
ಬೆಂಗಳೂರು: ರಾಜ್ಯದ ಆರ್ಥಿಕ ವ್ಯವಹಾರಗಳ ನಿರ್ವಹಣೆಗೆ ವಿದೇಶಿ ಕಂಪನಿಯನ್ನು ಸಲಹೆಗಾರನಾಗಿ ನೇಮಿಸಿರುವುದು ಆಘಾತಕಾರಿ ಮತ್ತು ಆಶ್ಚರ್ಯಕರವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪರಿಣಿತ ಅಧಿಕಾರಿಗಳು ಇದ್ದರೂ ವಿದೇಶಿ ಸಲಹಾ ಸಂಸ್ಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ಅನೇಕ ಐಎಎಸ್ ಅಧಿಕಾರಿಗಳಿದ್ದಾರೆ. ಆದರೂ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯದಲ್ಲಿ ಸೂಕ್ತ ವ್ಯಕ್ತಿ ಏಕೆ ಸಿಗಲಿಲ್ಲವೇ? ಎಂದು ಪ್ರಶ್ನಿಸಿದರು. ವಿದೇಶಿ ತಜ್ಞರು ಸಿಎಂ ಸಿದ್ದರಾಮಯ್ಯ ಅವರಿಗೆ ಸಹಾಯ ಮಾಡಲು ಸಾಧ್ಯವಿಲ್ಲ ಎಂದು ನಾನು ಭಾವಿಸುತ್ತೇನೆ. 14 ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗೆ ಹಣಕಾಸು ಇಲಾಖೆ ನಿರ್ವಹಣೆ ಮಾಡಲು ಸಾಧ್ಯವಾಗದಿದ್ದರೆ ಹೇಗೆ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿಗಳ ಸುತ್ತಮುತ್ತ ಅನೇಕ ಅಧಿಕಾರಿಗಳು ಇದ್ದಾರೆ. ಅಷ್ಟೇಲ್ಲ ಇರುವಾಗ ವಿದೇಶಿ ಕನ್ಸಲ್ಟೆನ್ಸಿ ನೇಮಕ ಮಾಡಿಕೊಳ್ಳಲು ಮುಂದಾಗಿರುವುದು ಯಾವ ಪುರುಷಾರ್ಥಕ್ಕೆ? ಎಲ್ಲ ರಂಗಗಳಲ್ಲೂ ವಿಫಲವಾಗಿರುವ ಸರ್ಕಾರ ಜನರ ಪಾಲಿಗೆ ಇದ್ದು ಸತ್ತಂತಾಗಿದೆ ಎಂದು ವಾಗ್ದಾಳಿ ನಡೆಸಿದರು.
ಇದೇ ವೇಳೆ ಇತ್ತೀಚಿಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಮತ್ತು ಜೆಡಿಎಸ್‌ನ ಎಲ್ಲಾ 19 ಲೋಕಸಭಾ ಸದಸ್ಯರಿಗೆ ಶನಿವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸನ್ಮಾನಿಸಲಾಗುವುದು ಎಂದು ವಿಜಯೇಂದ್ರ ತಿಳಿಸಿದರು.
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸೋಲಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ವಿಜಯೇಂದ್ರ ಕಾರಣ ಎಂಬ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಅವರ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಪಕ್ಷದ ಕಚೇರಿಯಲ್ಲಿ ಈ ವಿಷಯಗಳ ಬಗ್ಗೆ ಚರ್ಚಿಸಲು ನಾನು ಪಕ್ಷದ ರಾಜ್ಯಾಧ್ಯಕ್ಷನಾಗಿ ಅವರನ್ನು ವಿನಂತಿಸುತ್ತೇನೆ. ಸಾರ್ವಜನಿಕ ಹೇಳಿಕೆಗಳಿಂದ ಪಕ್ಷಕ್ಕೆ ಒಳ್ಳೆಯದಾಗುವುದಿಲ್ಲ ಮತ್ತು ಸಂಘಟನೆಗೆ ಹಿನ್ನಡೆ ಉಂಟುಮಾಡುತ್ತದೆ ಎಂದರು.
Advertisement