ವಾಲ್ಮೀಕಿ ಹಗರಣ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಿದರು.
ಬಿಜೆಪಿ ಪ್ರತಿಭಟನೆ
ಬಿಜೆಪಿ ಪ್ರತಿಭಟನೆ
Updated on

ಬೆಂಗಳೂರು: ಸರ್ಕಾರಿ ಸ್ವಾಮ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿ ಶುಕ್ರವಾರ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿತು.

ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಿದರು.

ಜಿಲ್ಲಾ ಕೇಂದ್ರವಾದ ಚಿತ್ರದುರ್ಗ ಪಟ್ಟಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸಿದ್ದರು. ವಿಜಯೇಂದ್ರ ಮತ್ತು ಇತರ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸುತ್ತಿದ್ದಂತೆ, ಪೊಲೀಸರು ಅವರನ್ನು ತಡೆದು ವಶಕ್ಕೆ ಪಡೆದರು. ಬೆಳಗಾವಿ, ಮಂಡ್ಯ, ಮಂಗಳೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಇದೇ ರೀತಿ ಪ್ರತಿಭಟನೆಗಳು ನಡೆದಿರುವ ಬಗ್ಗೆ ವರದಿಯಾಗಿದೆ.

ಬಿಜೆಪಿ ಪ್ರತಿಭಟನೆ
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ: ಜೂನ್ 28 ರಂದು ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಗೆ ಬಿಜೆಪಿ ಮುತ್ತಿಗೆ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಹಗರಣವನ್ನು ಮುಚ್ಚಿಹಾಕಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ ಎಂದು ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ.

ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಹಣಕಾಸು ಸಚಿವರಾಗಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ಜವಾಬ್ದಾರಿ ಹೊರಬೇಕು. ಅಲ್ಲದೆ ಈ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಶರಣ ಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷ ಬಸವರಾಜ್ ದದ್ಧಲ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಆಗ್ರಹಿಸಿದರು.

ಅಧಿಕಾರಿಗಳು ಹಾಗೂ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವವರಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ, ವಾಲ್ಮೀಕಿ ಹಾಗೂ ಇತರೆ ಎಸ್ಟಿ ಸಮುದಾಯಗಳಿಗೆ ಉಳಿಸಿಕೊಂಡಿದ್ದ ಹಣವನ್ನು ಕಾಂಗ್ರೆಸ್ ಸರ್ಕಾರ ಹಗಲು ದರೋಡೆ ಮಾಡಿ ಆ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಸರ್ಕಾರ ದಲಿತರ ಹಣವನ್ನು ಲೂಟಿ ಮಾಡುತ್ತಿದೆ ಎಂದು ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ಧ ಧಿಕ್ಕಾರ ಹಾಕಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com