ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆ ಬಗ್ಗೆ ಮಗಳನ್ನೇ ಕೇಳುತ್ತೇನೆ: ಸತೀಶ್ ಜಾರಕಿಹೊಳಿ
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬೆಳಗಾವಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಜಾರಕಿಹೊಳಿಯನ್ನು ಕಣಕ್ಕಳಿಸುವ ಕುರಿತು ಚರ್ಚೆ ನಡೆದಿರುವುದು ನಿಜ. ಆದರೆ, ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆ ಬಗ್ಗೆ ಮೊದಲು ಪುತ್ರಿಯನ್ನು ಕೇಳುತ್ತೇನೆಂದು ಸಚಿವ ಸತೀಶ ಜಾರಕಿಹೊಳಿ ಅವರು ಭಾನುವಾರ ಹೇಳಿದರು.
ಬೆಳಗಾವಿಯ ಹುದಲಿ ಗ್ರಾಮದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಮತ್ತೊಮ್ಮೆ ಪ್ರಿಯಾಂಕಾ ಜಾರಕಿಹೊಳಿ ಅವರೊಂದಿಗೆ ಚರ್ಚಿಸಿ ಅಂತಿಮ ಮಾಹಿತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ತಿಳಿಸಿದ್ದೇನೆ. ಆಕಾಂಕ್ಷಿಗಳ ಅಭಿಪ್ರಾಯ ಬಹಳ ಮುಖ್ಯ. ಆಕೆ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ತೋರದಿದ್ದರೆ ಕಷ್ಟವಾಗುತ್ತದೆ ಎಂದು ಹೇಳಿದರು.
ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಈಗಾಗಲೇ ಒಂದು ಸುತ್ತಿನ ಸಭೆ ನಡೆಸಲಾಗಿದೆ. ಅಭ್ಯರ್ಥಿಗಳ ಆಯ್ಕೆಗೆ ಇನ್ನೂ ಸಮಯವಿದೆ. ಇನ್ನೊಂದು ಸುತ್ತಿನ ಸಭೆ ನಡೆಸಿ ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ. ಚುನಾವಣೆ ಘೋಷಣೆಗೆ ಇನ್ನೂ ಹದಿನೈದು ದಿನ ಬಾಕಿ ಇದ್ದು, ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಮೂರನೇ ಅಥವಾ ಕೊನೆಯ ಪಟ್ಟಿಯಲ್ಲಿ ಪ್ರಕಟಿಸಬಹುದು ಎಂದು ತಿಳಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ