ಲೋಕಸಭೆ ಚುನಾವಣೆ 2024: ಪ್ರಜ್ವಲ್ ರೇವಣ್ಣ ಪರ ಪ್ರಚಾರ ನಡೆಸದಂತೆ ಜಿಲ್ಲಾ ಬಿಜೆಪಿ ಸುತ್ತೋಲೆ!

ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಹೆಸರು ಅಧಿಕೃತ ಘೋಷಣೆ ವಿಳಂಬವಾಗುತ್ತಿರುವುದು ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರ ಭದ್ರಕೋಟೆ ಹಾಸನದಲ್ಲಿ ಬಿಜೆಪಿ, ಜೆಡಿಎಸ್ ಪ್ರಮುಖರು ಹಾಗೂ ಕಾರ್ಯಕರ್ತರ ನಡುವಿನ ಭಿನ್ನಾಭಿಪ್ರಾಯ ಮತ್ತಷ್ಟು ಹೆಚ್ಚಾಗಲು ಕಾರಣವಾಗಿದೆ.
ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣTNIE

ಹಾಸನ: ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಹೆಸರು ಅಧಿಕೃತ ಘೋಷಣೆ ವಿಳಂಬವಾಗುತ್ತಿರುವುದು ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರ ಭದ್ರಕೋಟೆ ಹಾಸನದಲ್ಲಿ ಬಿಜೆಪಿ, ಜೆಡಿಎಸ್ ಪ್ರಮುಖರು ಹಾಗೂ ಕಾರ್ಯಕರ್ತರ ನಡುವಿನ ಭಿನ್ನಾಭಿಪ್ರಾಯ ಮತ್ತಷ್ಟು ಹೆಚ್ಚಾಗಲು ಕಾರಣವಾಗಿದೆ.

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣ ಹಾಸನ ಕ್ಷೇತ್ರವನ್ನು ಉಳಿಸಿಕೊಳ್ಳಲು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಹಾಸನದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯ ಅಧಿಕೃತ ಘೋಷಣೆ ವಿಳಂಬವಾಗುತ್ತಿರುವುದು ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಕಾರ್ಯಕರ್ತರನ್ನು ಸಂಘಟಿಸಲು ಮತ್ತು ವಿಶ್ವಾಸಕ್ಕೆ ತೆಗೆದುಕೊಳ್ಳಲು ಜೆಡಿಎಸ್ ಅಭ್ಯರ್ಥಿಗೆ ಖಂಡಿತವಾಗಿಯೂ ಪರಿಣಾಮ ಬೀರುತ್ತದೆ. ಅಚ್ಚರಿಯ ಬೆಳವಣಿಗೆಯಲ್ಲಿ ಎನ್‌ಡಿಎಯ ಹಿರಿಯ ನಾಯಕರು ಮೈತ್ರಿ ಅಭ್ಯರ್ಥಿಯನ್ನು ಅಧಿಕೃತವಾಗಿ ಘೋಷಿಸುವವರೆಗೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪ್ರಜ್ವಲ್ ರೇವಣ್ಣ ಅವರ ಪರ ಪ್ರಚಾರ ಮಾಡದಂತೆ ಜಿಲ್ಲಾ ಬಿಜೆಪಿ ಸುತ್ತೋಲೆ ಹೊರಡಿಸಿದೆ.

ಪ್ರಜ್ವಲ್ ರೇವಣ್ಣ
ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮೂರು ಕ್ಷೇತ್ರಗಳಿಂದ ಸ್ಪರ್ಧೆ, ಹಾಸನದಲ್ಲಿ ಪ್ರಜ್ವಲ್ ರೇವಣ್ಣ: ಹೆಚ್ ಡಿ ಕುಮಾರಸ್ವಾಮಿ

ಪಕ್ಷದ ಹೈಕಮಾಂಡ್ ಸೂಚನೆ ನೀಡುವವರೆಗೆ ಕಾರ್ಯಕರ್ತರು ಪ್ರಜ್ವಲ್ ರೇವಣ್ಣ ಪರವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಪ್ರಜ್ವಲ್ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ. ಆದರೆ ಅವರನ್ನು ಬೆಂಬಲಿಸಲು ಬಿಜೆಪಿ ಹೈಕಮಾಂಡ್ ಇನ್ನೂ ಯಾವುದೇ ನಿರ್ದೇಶನವನ್ನು ನೀಡಿಲ್ಲ ಎಂದು ಬಿಜೆಪಿ ಕಾರ್ಯಕರ್ತರಿಗೆ ಕೊಟ್ಟಿರುವ ಪತ್ರದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಹೇಳಿದ್ದಾರೆ. ಮೈತ್ರಿ ಅಭ್ಯರ್ಥಿಯನ್ನು ಅಧಿಕೃತವಾಗಿ ಬೆಂಬಲಿಸದಂತೆ ಅಥವಾ ಪ್ರಚಾರದಲ್ಲಿ ತೊಡಗದಂತೆ ಜಿಲ್ಲಾ ಬಿಜೆಪಿ ಘಟಕವು ತನ್ನ ಮುಖಂಡರು ಮತ್ತು ಕಾರ್ಯಕರ್ತರಿಗೆ ಸೂಚನೆ ನೀಡಿದೆ. ಅಲ್ಲದೆ ಹಾಸನದಲ್ಲಿ ಯಾವುದೇ ಸಂದರ್ಭದಲ್ಲೂ ಸಂಭಾವ್ಯ ಎನ್‌ಡಿಎ ಅಭ್ಯರ್ಥಿ ಪರ ಹೇಳಿಕೆ ನೀಡದಂತೆ ಕಾರ್ಯಕರ್ತರಿಗೆ ಪಕ್ಷ ಎಚ್ಚರಿಕೆ ನೀಡಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ರಾಜಕೀಯ ಭಿನ್ನಾಭಿಪ್ರಾಯ ಹೊಂದಿರುವ ಬಿಜೆಪಿ ಮುಖಂಡ ಹಾಗೂ ಮಾಜಿ ಶಾಸಕ ಪ್ರೀತಂ ಜೆ ಗೌಡ ಅವರಿಂದ ಅಂತರ ಕಾಯ್ದುಕೊಂಡಿರುವ ಬಿಜೆಪಿ ಕಾರ್ಯಕರ್ತರ ಜೊತೆ ಸಭೆ ಆರಂಭಿಸಿದ ಬೆನ್ನಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಪ್ರಜ್ವಲ್ ನಿನ್ನೆ ಪ್ರೀತಂ ಅವರೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಬಿಜೆಪಿಯ ವಿಜಯಕುಮಾರ್ ಅವರನ್ನು ಭೇಟಿ ಮಾಡಿದ್ದರು. ಪ್ರಜ್ವಲ್ ಅವರು ಆಲೂರು ಮತ್ತು ಸಕಲೇಶಪುರ ತಾಲೂಕಿನ ಪ್ರಮುಖ ಬಿಜೆಪಿ ಮತ್ತು ಆರ್‌ಎಸ್‌ಎಸ್ ಪದಾಧಿಕಾರಿಗಳನ್ನು ಭೇಟಿ ಮಾಡಿರುವುದು ಪ್ರೀತಂ ಅವರನ್ನು ಕೆರಳಿಸಿದೆ ಎನ್ನಲಾಗಿದೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪ್ರೀತಂ ಮೊದಲಿನಿಂದಲೂ ಎನ್ಡಿಎ ಮೈತ್ರಿಕೂಟದ ಪರವಾಗಿ ಪ್ರಜ್ವಲ್ ಅವರ ಹಾಸನದ ಸ್ಪರ್ಧೆಯನ್ನು ತೀವ್ರವಾಗಿ ವಿರೋಧಿಸುತ್ತಾ ಬಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com