ಅನಂತ ಕುಮಾರ್ ಹೆಗಡೆಗೆ ಕೊಕ್? ಜಗದೀಶ್ ಶೆಟ್ಟರ್ ಗೆ ಒಲಿದ ಲಕ್? ಬಂಡಾಯ ಶಮನಕ್ಕೆ ಬಿಜೆಪಿ ನಾಯಕರ ಯತ್ನ!

ಲೋಕಸಭೆ ಚುನಾವಣೆ 2024ಕ್ಕೆ ಕರ್ನಾಟಕದಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಭಾರತೀಯ ಜನತಾ ಪಾರ್ಟಿ ಶನಿವಾರ ಬಿಡುಗಡೆ ಮಾಡುವ ನಿರೀಕ್ಷೆಯಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಲೋಕಸಭೆ ಚುನಾವಣೆ 2024ಕ್ಕೆ ಕರ್ನಾಟಕದಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಭಾರತೀಯ ಜನತಾ ಪಾರ್ಟಿ ಶನಿವಾರ ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದ್ದು, ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಐದು ಲೋಕಸಭಾ ಕ್ಷೇತ್ರಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ಚಿಕ್ಕಬಳ್ಳಾಪುರದಿಂದ ಡಾ.ಕೆ.ಸುಧಾಕರ್, ಚಿತ್ರದುರ್ಗದಿಂದ ಮಾಜಿ ಸಚಿವ ಗೋವಿಂದ ಕಾರಜೋಳ ಮತ್ತು ಬಿ.ವಿ.ನಾಯಕ್ ರಾಯಚೂರು ಅಭ್ಯರ್ಥಿಗಳಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರೂ ಆಗಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಶುಕ್ರವಾರ ಪಟ್ಟಿಯನ್ನು ಪ್ರಕಟಿಸಲಿದ್ದೇವೆ ಎಂದು ಹೇಳಿದ್ದರು. ಆದರೆ, ಇಂದು ಘೋಷಣೆಯಾಗುವ ನಿರೀಕ್ಷೆಯಲ್ಲಿ ಪಕ್ಷದ ಮುಖಂಡರು ಇದ್ದಾರೆ.

ಕೇಸರಿ ಪಕ್ಷವು ಚುನಾವಣೆಗೆ ಭರದ ಸಿದ್ಧತೆ ಮಾಡಿಕೊಳ್ಳುತ್ತಿದೆ. ಲೋಕಸಭೆ ಚುನಾವಣೆಗೆಂದೇ ಮೀಸಲಾದ ಮಾಧ್ಯಮ ಕೇಂದ್ರವನ್ನು ನಿನ್ನೆ ಬೆಂಗಳೂರಿನಲ್ಲಿ ಉದ್ಘಾಟಿಸಿ, ಪೂಜೆ ಸಲ್ಲಿಸಲಾಯಿತು. ಇಂದು ಶನಿವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತಿತರರು ಔಪಚಾರಿಕವಾಗಿ ಉದ್ಘಾಟನೆ ಮಾಡಲಿದ್ದಾರೆ. ಸೋಮವಾರ ನಗರದ ಅರಮನೆ ಮೈದಾನದಲ್ಲಿ ಪಕ್ಷದ ರಾಜ್ಯ ಮಟ್ಟದ ಚುನಾವಣಾ ನಿರ್ವಹಣಾ ಸಮಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಭಿನ್ನಮತ ಶಮನ: ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಗದಿರುವ ಬಗ್ಗೆ ಹಲವು ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದು, ಪಕ್ಷದ ಮುಖಂಡರು ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮನವೊಲಿಸುವ ಪ್ರಯತ್ನದಲ್ಲಿದ್ದಾರೆ. ಅತೃಪ್ತ ನಾಯಕರನ್ನು ಸಮಾಧಾನಪಡಿಸುವ ಪ್ರಯತ್ನದಲ್ಲಿ ನಾಯಕರ ತಂಡವು ಪ್ರತಿ ಅತೃಪ್ತ ಆಕಾಂಕ್ಷಿಗಳನ್ನು ಭೇಟಿ ಮಾಡುತ್ತಿದೆ.

ಸಾಂದರ್ಭಿಕ ಚಿತ್ರ
ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿಯಿಂದ ತಲಾ 50 ಕೋಟಿ ರೂ. ಆಮಿಷ: ಸಿಎಂ ಸಿದ್ದರಾಮಯ್ಯ

ನಿನ್ನೆ ಮಾಜಿ ಸಿಎಂ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರು ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಅವರನ್ನು ಮಾಜಿ ಶಾಸಕ ಮಸಾಲೆ ಜಯರಾಂ ಅವರ ತುರುವೇಕೆರೆಯಲ್ಲಿರುವ ಫಾರ್ಮ್‌ಹೌಸ್‌ನಲ್ಲಿ ಭೇಟಿಯಾದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧುಸ್ವಾಮಿ ಅವರೊಂದಿಗೆ ಮಾತನಾಡಿದ್ದೇನೆ. ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಇಲ್ಲಿಗೆ ಬಂದಿದ್ದೇನೆ. ಮಾತುಕತೆಯಿಂದ ನಾನು ತೃಪ್ತನಾಗಿದ್ದೇನೆ. ಮಾಧುಸ್ವಾಮಿ ಪಕ್ಷ ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಎಲ್ಲವೂ ಸರಿ ಹೋಗುತ್ತದೆ ಎಂದಿದ್ದಾರೆ.

ಮಾಧುಸ್ವಾಮಿ ಅವರು ಪ್ರಚಾರಕ್ಕೆ ಸೇರುವ ಬಗ್ಗೆ ನಿರ್ಧರಿಸಿಲ್ಲ, ಆದರೆ ಪಕ್ಷವನ್ನು ಬಿಡುತ್ತಿಲ್ಲ ಎಂದು ಹೇಳಿದ್ದಾರೆ. ಬಿಜೆಪಿ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಕೂಡ ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಗಾಯತ್ರಿ ಸಿದ್ದೇಶ್ವರ ಅವರನ್ನು ಘೋಷಣೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ಮುರುಗೇಶ್ ನಿರಾಣಿ ರೇಣುಕಾಚಾರ್ಯ ಅವರೊಂದಿಗೆ ಮಾತನಾಡಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವರಿಕೆ ಮಾಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಸಾಂದರ್ಭಿಕ ಚಿತ್ರ
ಸೋಮಶೇಖರ್, ಹೆಬ್ಬಾರ್ ಬೆಂಬಲ ಕಾಂಗ್ರೆಸ್ ಅಭ್ಯರ್ಥಿಗೆ?: ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿದ ಬಿಜೆಪಿ ಶಾಸಕರು

ಒಂದು ವಾರದ ಹಿಂದೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಹೊರಬಿದ್ದಾಗಿನಿಂದಲೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕೊಪ್ಪಳ ಸಂಸದ ಕರಡಿ ಸಂಗಣ್ಣ ಮತ್ತು ಅವರ ಅನುಯಾಯಿಗಳನ್ನು ಸಮಾಧಾನಪಡಿಸುವ ಪ್ರಯತ್ನ ನಡೆಸಿದ್ದಾರೆ. ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸದಂತೆ ಸಂಗಣ್ಣ ಕರಡಿ ಮಾತು ಕೊಟ್ಟಿದ್ದಾರೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಬೆಂಗಳೂರು ಉತ್ತರ ಕ್ಷೇತ್ರದಿಂದ ಟಿಕೆಟ್ ಸಿಗದೆ ಅಸಮಾಧಾನಗೊಂಡಿರುವ ಮಾಜಿ ಸಿಎಂ ಡಿವಿ ಸದಾನಂದಗೌಡ ಅವರಿಗೆ ಸಂಘಪರಿವಾರದ ಸದಸ್ಯರು ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ. ಬಿಜೆಪಿಯಲ್ಲೇ ಇರುವುದಾಗಿ ಗೌಡರು ಮಾಧ್ಯಮಗೋಷ್ಠಿಯಲ್ಲಿ ಮೊನ್ನೆ ಹೇಳಿದ್ದಾರೆ.

ಮಾಜಿ ಸಚಿವ, ಜೆಡಿಎಸ್‌ನ ಹಿರಿಯ ಮುಖಂಡ ಹೆಚ್ ಡಿ ರೇವಣ್ಣ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಹಾಸನದಲ್ಲಿ ಪುತ್ರ ಪ್ರಜ್ವಲ್ ರೇವಣ್ಣ ಗೆಲುವಿಗೆ ನೆರವು ಕೋರಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹಾಸನದಲ್ಲಿ ಮೈತ್ರಿಯಿಂದ ಅತೃಪ್ತರಾಗಿರುವ ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ ಅವರನ್ನು ಸಮಾಧಾನಗೊಳಿಸಲು ಹಾಸನಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ.

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಬೆಂಗಳೂರಿನಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ಮೈಸೂರಿನಲ್ಲಿ ಪಕ್ಷದ ಅಭ್ಯರ್ಥಿ ಯದುವೀರ್ ಒಡೆಯರ್ ಪರ ಕೆಲಸ ಆರಂಭಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com