
ಕೋಲಾರ: ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ಗುರುವಾರ ಹೇಳಿದ್ದಾರೆ. ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಪರ ಪ್ರಚಾರ ನಡೆಸಿದ ಬಳಿಕ ಅವರು ಟಿಎನ್ಐಇ ಜೊತೆಗೆ ದೂರವಾಣಿ ಮೂಲಕ ಮಾತನಾಡಿದರು.
'ದೇಶದಲ್ಲಿ ಕಾಂಗ್ರೆಸ್‌ಗೆ ಮತದಾರರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಬಿಜೆಪಿಗೆ ಇದು ವಿಶ್ರಾಂತಿಯ ಸಮಯ. ಜನರು ಕಾಂಗ್ರೆಸ್ ಮತ್ತು ಅದರ I.N.D.I.A ಮೈತ್ರಿಕೂಟದ ಪಕ್ಷಗಳನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ I.N.D.I.A ಬಣವನ್ನು ಬಹಿರಂಗವಾಗಿ ಬೆಂಬಲಿಸಿದ್ದಾರೆ ಎಂದು ಹೇಳಿದರು.
ರಾಯಬರೇಲಿಯಲ್ಲಿ ರಾಹುಲ್ ಗಾಂಧಿ ಉತ್ತಮ ಬಹುಮತದಿಂದ ಗೆಲ್ಲುತ್ತಾರೆ. ರಾಯ್ ಬರೇಲಿ ಕಾಂಗ್ರೆಸ್ ಭದ್ರಕೋಟೆಯೋಗಿದ್ದು, ರಾಹುಲ್ ಅವರ ತಾಯಿ ಹಾಗೂ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಂಸದರಾಗಿದ್ದ ಅವಧಿಯಲ್ಲಿ ರಾಯಬರೇಲಿಯನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಪಡಿಸಿದ್ದರು. ತಾವು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದಾಗ ರಾಯಬರೇಲಿಗೆ ರೈಲ್ವೆ ಕೋಚ್ ಫ್ಯಾಕ್ಟರಿ ಮಂಜೂರು ಮಾಡಿದ್ದು, ಈಗ ನೂರಾರು ಜನರಿಗೆ ಉದ್ಯೋಗ ನೀಡುತ್ತಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಬಡವರು, ರೈತರು, ನಿರ್ಗತಿಕರು ಮತ್ತು ದೀನದಲಿತರ ಕಲ್ಯಾಣಕ್ಕಾಗಿ ಕೆಲಸ ಮಾಡುವಲ್ಲಿ ವಿಫಲವಾಗಿದೆ. I.N.D.I.A ಮೈತ್ರಿಕೂಟ ಅಧಿಕಾರಕ್ಕೆ ಬಂದ ನಂತರ, ನಾವು ಆರ್ಥಿಕವಾಗಿ ದುರ್ಬಲ ವರ್ಗ, ರೈತರು ಮತ್ತು ದೀನದಲಿತರ ಉನ್ನತಿಗಾಗಿ ಶ್ರಮಿಸುತ್ತೇವೆ ಎಂದು ಮುನಿಯಪ್ಪ ಹೇಳಿದರು.
ದೇಶದಲ್ಲಿ ಈಗಾಗಲೇ ನಾಲ್ಕು ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆದಿದ್ದು, ಬಿಜೆಪಿ ಮತ್ತು ಎನ್‌ಡಿಎ ಮಿತ್ರಪಕ್ಷಗಳು ಸೋಲಿನ ಭೀತಿಯಲ್ಲಿವೆ. ಆದರೆ, ಕಾಂಗ್ರೆಸ್ ಮತ್ತು ಅದರ ಇಂಡಿಯಾ ಮೈತ್ರಿಕೂಟದ ಪಕ್ಷಗಳಿಗೆ ಮತದಾರರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲ ಭರವಸೆಗಳನ್ನು ಈಡೇರಿಸಲಿದೆ ಎಂದರು.
Advertisement