
ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳಿರುವ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಗತ್ಯ ಹೇಳಿಕೆ ನೀಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಸಚಿವರಿಗೆ ಮಂಗಳವಾರ ಸೂಚನೆ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ(SIT) ನಡೆಸುತ್ತಿದೆ. ಪ್ರಕರಣದ ಕುರಿತು ಕೆಲ ಸಚಿವರ ಹೇಳಿಕೆಗಳು ತನಿಖೆಯ ದಾರಿ ತಪ್ಪಿಸುವ ಸಾಧ್ಯತೆ ಇದೆ. ಹೇಳಿಕೆಗಳಿಂದ ಪಕ್ಷಕ್ಕೂ ಕೂಡ ಡ್ಯಾಮೆಜ್ ಆಗುವ ಸಾಧ್ಯತೆ ಇದೆ. ಹೀಗಾಗಿ ಅನಗತ್ಯ ಹೇಳಿಕೆ ನೀಡದಂತೆ ಸಿಎಂ ಸಿದ್ದರಾಮಯ್ಯ ಅವರು ಸಚಿವರಿಗೆ ಕೆಲ ಸೂಚನೆ ನೀಡಿದ್ದಾರೆ.
ಪೆನ್ಡ್ರೈವ್ ಪ್ರಕರಣದಲ್ಲಿ ಅನಗತ್ಯವಾಗಿ ಪ್ರತಿಕ್ರಿಯೆ ಕೊಡಬೇಡಿ. ಮಾತು ಹೆಚ್ಚಾದರೆ ಇಡೀ ಪ್ರಕರಣದ ದಿಕ್ಕೇ ತಪ್ಪಿ ಹೋಗಬಹುದು. ಹೀಗಾಗಿ ಪ್ರತಿಕ್ರಿಯೆ ಕೊಡುವಾಗ ಎಚ್ಚರಿಕೆ ವಹಿಸಿ ಎಂದು ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಸಚಿವರಿಗೆ ಸಲಹೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಈ ಸಲಹೆಯನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸಚಿವರು ಗಂಭೀರವಾಗಿ ಪರಿಗಣಿಸಿದ್ದಾರೆ.
ಇನ್ನು ನೂರಾರು ಮಹಿಳೆಯರ ಜೊತೆಗಿನ ರಾಸಲೀಲೆ ವಿಡಿಯೋಗಳು ಬಹಿರಂಗಗೊಂಡ ನಂತರ ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
Advertisement