
ಬೆಂಗಳೂರು: ಮುಂಬರುವ ಚುನಾವಣೆಗಳನ್ನುನ್ನು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿಯೇ ಎದುರಿಸಲಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಜಿ ಸಿ ಚಂದ್ರಶೇಖರ್ ಸೋಮವಾರ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಯಾವುದೇ ಬದಲಾವಣೆಗಿದು ಕಾಲವಲ್ಲ. ಮುಂಬರುವ ಬಿಬಿಎಂಪಿ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಡಿಕೆ.ಶಿವಕುಮಾರ್ ಅವರ ನೇತೃತ್ವದಲ್ಲಿಯೇ ಪಕ್ಷ ಎದುರಿಸಲಿದೆ. ಚುನಾವಣೆ ಕುರಿತು ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಅವರೊಂದಿಗೆ ಚರ್ಚಿಸಲಿದೆ. ಶಿವಕುಮಾರ್ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಸಚಿವ ಸ್ಥಾನ ತೊರೆಯಲು ಸಿದ್ಧ ಎಂಬ ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿ, ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂದು ತಿರುಗೇಟು ನೀಡಿದರು.
ಕೆಪಿಸಿಸಿ ಅಧ್ಯಕ್ಷರಾಗುವ ಬಯಕೆ ಹಲವರಿಗಿದೆ. ಆದರೆ, ಈ ವಿಚಾರವನ್ನು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕೇ ವಿನಃ ಸಾರ್ವಜನಿಕವಾಗಿ ಮಾತನಾಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಬಾರದು ಎಂದು ಸಲಹೆ ನೀಡಿದರು.
ಇದೇ ವೇಳೆ ಬೆಂಗಳೂರು ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ಅವರು ಮಹಾರಾಷ್ಟ್ರದವರೇ ಆಗಿರುವುದರಿಂದ ಅವರು ಒಕ್ಕಲಿಗನಲ್ಲ ಎಂಬ ಬಿಜೆಪಿಯ ಮಾಜಿ ಸಚಿವ ಮುನಿರತ್ನ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದರು.
ಜಾತಿ ವಿಷಯ ಪ್ರಸ್ತಾಪಿಸಿದ ಮುನಿರತ್ನ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಲಿದೆ ಎಂದು ಹೇಳಿದರು.
ಬಳಿಕ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ರಾಮೋಜಿಗೌಡ ಅವರಿಗೆ ಮೊದಲ ಸ್ಥಾನ ಸಿಗುವ ವಿಶ್ವಾಸವಿದೆ. ಹೀಗಾಗಿ ವಿರೋಧ ಪಕ್ಷದವರು ಇದನ್ನು ಅರಗಿಸಿಕೊಳ್ಳಲಾಗದೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಇದೇ ವೇಳೆ ನೌಕರರಿಗೆ ಅನುಕೂಲವಾಗುವಂತೆ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಜಾರಿಗೆ ತರಲಿದೆ ಎಂದು ತಿಳಿಸಿದರು.
7ನೇ ವೇತನ ಆಯೋಗದ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡಸಿ, ಚುನಾವಣಾ ಫಲಿತಾಂಶದ ನಂತರ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಲಿದೆ ಎಂದು ಪರಿಷತ್ ಮಾಜಿ ಅಧ್ಯಕ್ಷ ವಿ.ಆರ್.ಸುದರ್ಶನ್ ಹೇಳಿದರು
Advertisement