ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ಇದೇ ವೇಳೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ನೇತೃತ್ವದಲ್ಲಿ ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ಸಿಎಂ ಸ್ಥಾನದಿಂದ ಕೆಳಗಿಳಿದು ತನಿಖೆ ಎದುರಿಸುವಂತೆ ಒತ್ತಾಯಿಸಿದರು.
ಹಾಲಿ ಮುಖ್ಯಮಂತ್ರಿಯ ವಿರುದ್ಧ ನ್ಯಾಯಯುತ ತನಿಖೆ ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಮೊದಲು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಆದರೆ ರಾಜೀನಾಮೆ ನೀಡದೇ ವಿಚಾರಣೆ ಎದುರಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಲೋಕಾಯುಕ್ತ ತನಿಖೆ ನಡೆಯುತ್ತಿರುವ ರೀತಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಶಾಸಕ ಶ್ರೀವತ್ಸ ಅವರು, ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಮಧ್ಯ ಪ್ರವೇಶಿಸಿದ ಪೊಲೀಸರು, ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಈ ವೇಳೆ ಪೊಲೀಸರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪೊಲೀಸರು ಕಾಂಗ್ರೆಸ್ ಸರ್ಕಾರದ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.
ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ತಮಗೆ ಪ್ರತಿಭಟನೆ ನಡೆಸಲು ಪೊಲೀಸರು ಬಿಡುತ್ತಿಲ್ಲ ಎಂದು ಆರೋಪಿಸಿದರು.
Advertisement