ಬೆಂಗಳೂರು: ಕಾಂಗ್ರೆಸ್ ಸರ್ಕಾರ ಭ್ರಷ್ಟಚಾರದಿಂದ ಲೂಟಿ ಮಾಡಿದ ಹಣವನ್ನು ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಳಸಿಕೊಳ್ಳುತ್ತಿರುವ ಕುರಿತು ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಬಿಜೆಪಿ ಒತ್ತಾಯಿಸಿದೆ.
ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಉಪ ಚುನಾವಣೆ ಉಸ್ತುವಾರಿ ಹೊತ್ತಿರುವ ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಿಂದ ದೋಚಿದ ಅಪಾರ ಪ್ರಮಾಣದ ಹಣವನ್ನು ಮೂರು ಕ್ಷೇತ್ರಗಳಲ್ಲಿ ಬಳಸಲು ಪ್ರಯತ್ನಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ವಿಚಾರವನ್ನು ರಾಜ್ಯ ಮುಖ್ಯ ಚುನಾವಣಾ ಆಯುಕ್ತರು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದರು.
ಈ ಮೂರು ಕ್ಷೇತ್ರಗಳಲ್ಲಿ ಹಣದ ಅಬ್ಬರ ಜಾಸ್ತಿ ಆಗಿರುವುದರಿಂದ ನ್ಯಾಯ ಸಮ್ಮತ ಚುನಾವಣೆ ನಡೆಯುವುದು ಕಷ್ಟ. ಇದಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ಅಗತ್ಯವಿರುವ ಮಾಹಿತಿ ನೀಡಲು ಸಿದ್ಧರಿದ್ದೇವೆ. ಚುನಾವಣಾ ಆಯೋಗ ನಿಗಾ ಇಡದಿದ್ದರೆ ಹಣದ ಪ್ರಭಾವದಿಂದ ಜನಸಾಮಾನ್ಯರ ಮನಸ್ಥಿತಿ ಹಾಳು ಮಾಡಿ, ಈ ಚುನಾವಣೆಯನ್ನು ಹಣದ ಪ್ರಭಾವದ ಚುನಾವಣೆಯನ್ನಾಗಿ ಪರಿವರ್ತಿಸಲಿದ್ದಾರೆ ಎಂದರು.
ಕಾಂಗ್ರೆಸ್ ನಾಯಕರ ಆಟಗಳಿಗೆ ಬಿಜೆಪಿ ಹೆದರುವುದಿಲ್ಲ. ಎನ್ ಡಿಎ ಕಾರ್ಯಕರ್ತರು ಈ ಷಡ್ಯಂತ್ರವನ್ನು ಬಯಲಿಗೆಳೆಯುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಲಿದ್ದಾರೆ. ಕಾಂಗ್ರೆಸ್ ಪಕ್ಷದ ಚುನಾವಣಾ ಉಸ್ತುವಾರಿಗಳ ಭೂಗತ ಚಟುವಟಿಕೆಗಳನ್ನು ನಿಯಂತ್ರಿಸದಿದ್ದಲ್ಲಿ ಸಾಮಾನ್ಯ ಜನರ ಮೇಲೆ ಗಂಭೀರ ಪ್ರಭಾವ ಬೀರಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಸಂಡೂರಿನಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ, ಶಿಗ್ಗಾವಿಯಲ್ಲಿ ಜಮ್ಮೀರ್ ಅಹ್ಮದ್ ಖಾನ್ ಹಾಗೂ ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್ ಅವರಿಗೆ ಚುನಾವಣಾ ಉಸ್ತುವಾರಿ ನೀಡುವ ಮೂಲಕ ಉಪ ಚುನಾವಣೆಯಲ್ಲಿ ಗೆಲ್ಲಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ. ಈ ಮೂವರು ಕಾಂಗ್ರೆಸ್ ನಾಯಕರು ರಾಜ್ಯದ ಖಜಾನೆ ಲೂಟಿಯಲ್ಲಿ ನಿಸ್ಸೀಮರಾಗಿದ್ದು, ಹಣದ ಪ್ರಭಾವದಿಂದ ಚುನಾವಣೆ ಗೆಲ್ಲಲು ನಿರ್ಧರಿಸಿದ್ದಾರೆ. ಆದರೆ ಎನ್ ಡಿಎ ಎಲ್ಲಾ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Advertisement