ಬಳ್ಳಾರಿ: ಸಂಡೂರು ಹಾಗೂ ಸುತ್ತಮುತ್ತಲ ಗುಡ್ಡಗಳನ್ನು ಗಣಿಗಾರಿಕೆಯಿಂದ ರಕ್ಷಿಸಬೇಕಾದರೆ ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬನ್ನಿಹಟ್ಟಿ ಗ್ರಾಮದಲ್ಲಿ ಶುಕ್ರವಾರ ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಶಾಸಕ ಜಿ.ಜನಾರ್ದನ ರೆಡ್ಡಿ ಮತ್ತು ಅವರ ಬೆಂಬಲಿಗರು ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ಮೂಲಕ ‘ರಿಪಬ್ಲಿಕ್ ಆಫ್ ಬಳ್ಳಾರಿ’ ಸಂಸ್ಕೃತಿಯನ್ನು ಮತ್ತೆ ಪರಿಚಯಿಸಲು ಮುಂದಾಗಿದ್ದಾರೆ, ಹೀಗಾಗಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಅವರನ್ನು ಸೋಲಿಸುವುದು ಅನಿವಾರ್ಯವಾಗಿದೆ ಎಂದರು. ಇನ್ನು, 2013ರ ಬಳ್ಳಾರಿ ಪಾದಯಾತ್ರೆ ವೇಳೆ ರೆಡ್ಡಿ ಬಳ್ಳಾರಿ ಜನತೆಗೆ ಬೆಂಬಲ ನೀಡದಂತೆ ಎಚ್ಚರಿಕೆ ನೀಡಿದ್ದರು, ನಾನು ಬಳ್ಳಾರಿಗೆ ಬಂದಾಗ ರೆಡ್ಡಿ ಬ್ರದರ್ಸ್ ಮತ್ತು ಶ್ರೀರಾಮುಲು ಭಾಷಣ ಮಾಡೋಕೆ ಜಾಗ ಕೊಡದೇ ಅವಮಾನ ಮಾಡಿದ್ದರು. ದೇವಸ್ಥಾನದ ಬಾಗಿಲಲ್ಲಿ ಒಬ್ಬನೇ ನಿಂತು ಭಾಷಣ ಮಾಡಿ ಹೋಗಿದ್ದೆ. ಒಂದು ಮನೆಗೆ ಹೋಗಿ ಕುಡಿಯೋಕೆ ನೀರು ಕೇಳಿದ್ರೂ ನನಗೆ ನೀರು ಕೊಡೋಕೂ ಜನ ಭಯ ಬೀಳ್ತಿದ್ದರು. ಅಷ್ಟೊಂದು ರೆಡ್ಡಿ ದರ್ಬಾರ್ ಇತ್ತು. ಅಕ್ರಮ ಗಣಿಗಾರಿಕೆಯಿಂದ ರೆಡ್ಡಿ ಬ್ರದರ್ಸ್ ಬಳ್ಳಾರಿ ಹಾಳು ಮಾಡಲು ಬಿಡಬಾರದು ಎಂದು ನಾನು ಬೆಂಗಳೂರಿನಿಂದ ಪಾದಯಾತ್ರೆ ಮಾಡಿದೆ. ಬಳ್ಳಾರಿ ಜನರನ್ನು ಭಯಮುಕ್ತಗೊಳಿಸಿದ್ದು ಕಾಂಗ್ರೆಸ್" ಎಂದು ಹೇಳಿದರು. ರೆಡ್ಡಿ ಮತ್ತು ಬಿಜೆಪಿಯವರು ಸಂವಿಧಾನದ ಬಗ್ಗೆ ಹೇಗೆ ಕಾಳಜಿ ವಹಿಸುತ್ತಾರೆ ಎಂಬುದನ್ನು ಇದು ನಮಗೆ ತೋರಿಸಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಜಿಂದಾಲ್‌ಗೆ ಕಾಲಿಟ್ಟರೂ ಜಿಲ್ಲಾ ಮಟ್ಟದ ಅಧಿಕಾರಿಗಳೂ ಯಡಿಯೂರಪ್ಪ ಅವರನ್ನು ಕಾಣಲು ಬರಲಿಲ್ಲ. ಆ ಮಟ್ಟದಲ್ಲಿ ಅಧಿಕಾರಿಗಳಲ್ಲಿ ಭಯ, ಭೀತಿ ಸೃಷ್ಟಿ ಮಾಡಿದ್ದರು. ಏನಾದರೂ ಜನಾರ್ದನ ರೆಡ್ಡಿ ಪಟಾಲಂ ಬೆಳೆದರೆ ಮತ್ತೆ ಅದೇ ಭೀತಿ, ಭಯದಲ್ಲಿ ಬಳ್ಳಾರಿ ನರಳಬೇಕಾಗುತ್ತದೆ. ಆದ್ದರಿಂದ ಇದಕ್ಕೆ ಅವಕಾಶ ಕೊಡಬೇಡಿ. ಬಿಜೆಪಿಯನ್ನು ಸೋಲಿಸಿ ಬಳ್ಳಾರಿಯನ್ನು ಉಳಿಸಿ" ಎಂದು ಕರೆ ನೀಡಿದರು.
ಸಂಡೂರಿನಲ್ಲಿ ರಸ್ತೆ, ನೀರು, ಶಾಲೆ, ಅಂಗನವಾಡಿ, ಆಸ್ಪತ್ರೆ, ಮೊಬೈಲ್ ಕ್ಲೀನಿಕ್‌ಗಳು ಸೇರಿ ಏನೇನು ಅಭಿವೃದ್ಧಿ ಆಗಿದೆಯೋ ಅದೆಲ್ಲವೂ ಸಂತೋಷ್ ಲಾಡ್ ಮತ್ತು ತುಕಾರಾಮ್ ಅವರ ಅವಧಿಯಲ್ಲಿ ನಡೆದಿರುವುದು. ಬಿಜೆಪಿ ಅವಧಿಯಲ್ಲಿ ಲೂಟಿ ಮಾಡಿದ್ದು ಬಿಟ್ಟರೆ ಬೇರೇನೂ ಮಾಡಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರನ್ನು 50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.
Advertisement