ಸಿದ್ದರಾಮಯ್ಯ ಐದು ವರ್ಷ ಸಿಎಂ ಹುದ್ದೆಯಲ್ಲಿರುತ್ತಾರೆ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬಿಜೆಪಿಯು ಸಿದ್ದರಾಮಯ್ಯನವರ ಇಮೇಜ್ ಗೆ ಹಾನಿ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಕೊಂದು ವಾಮಮಾರ್ಗದ ಮೂಲಕ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ.
Yatindra Siddaramaiah
ಯತೀಂದ್ರ ಸಿದ್ದರಾಮಯ್ಯ
Updated on

ಮೈಸೂರು: ಇತ್ತೀಚೆಗಷ್ಟೇ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಸ್ಥಾನಗಳನ್ನು ಗೆದ್ದುಕೊಂಡಿದ್ದು, ತಮ್ಮ ತಂದೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವುದಿಲ್ಲ. ಪೂರ್ಣ ಐದು ವರ್ಷಗಳ ಅವಧಿಗೆ ಅಧಿಕಾರದಲ್ಲಿ ಇರುತ್ತಾರೆ ಎಂದು ಕಾಂಗ್ರೆಸ್ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸುವ ಮೂಲಕ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರತಿಪಕ್ಷಗಳು ಪ್ರಯತ್ನಿಸುತ್ತಿವೆ ಎಂದು ವಾಗ್ದಾಳಿ ನಡೆಸಿದ ಯತೀಂದ್ರ, ಬಿಜೆಪಿಯು ಸಿದ್ದರಾಮಯ್ಯನವರ ಇಮೇಜ್ ಗೆ ಹಾನಿ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಕೊಂದು ವಾಮಮಾರ್ಗದ ಮೂಲಕ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ ಎಂದರು.

ಸಿಎಂ ರಾಜೀನಾಮೆಗೆ ಯಾವುದೇ ಕಾರಣವಿಲ್ಲ, ಅವರು ಯಾವುದೇ ತಪ್ಪು ಮಾಡಿಲ್ಲ, ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಕೇಂದ್ರ ಸರ್ಕಾರ ತನಿಖೆ ನಡೆಸುತ್ತಿದೆ ಎಂದು ಆರೋಪಿಸಿದ ಯತೀಂದ್ರ ಸಿದ್ದರಾಮಯ್ಯ, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಜನತೆಗೆ ಕೃತಜ್ಞತೆಗಳು, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಮೂರೂ ಸ್ಥಾನಗಳನ್ನು ಗಳಿಸಿದ್ದು ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದರು.

ಹಾಸನದಲ್ಲಿ ರ್ಯಾಲಿ ಆಯೋಜಿಸುವುದನ್ನು ವಿರೋಧಿಸಿ ಪತ್ರ ಬರೆದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಯತೀಂದ್ರ, ಸಿದ್ದರಾಮಯ್ಯ ಅವರ ಮುಂದಾಳತ್ವದಲ್ಲಿ ಡಿಸೆಂಬರ್ 5 ರಂದು ಶೋಷಿತ ವರ್ಗಗಳ ಸಮಾವೇಶವನ್ನು ಆಯೋಜಿಸಲು ಪಕ್ಷ ಒಪ್ಪಿಗೆ ನೀಡಿದೆ. ಇದು ನಕಲಿ ಪತ್ರವಾಗಿರಬಹುದು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಆರೋಪ ಹೊರಿಸುವ ಷಡ್ಯಂತ್ರದ ವಿರುದ್ಧ ಮೈಸೂರಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿತ್ತು. ಹಾಸನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳುತ್ತೇವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com