ಬೆಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಯಿಂದ ನಡೆಯಲಿರುವ ವಿಧಾನಪರಿಷತ್ತಿನ ಉಪ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಮಂಗಳವಾರ ಪ್ರಕಟಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಸವಿತಾ ಸಮಾಜದ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಆಯ್ಕೆಯಾಗಿರುವುದರಿಂದ ಅವರಿಂದ ತೆರವಾಗಿರುವ ಸ್ಥಾನಕ್ಕೆ ಅಕ್ಟೋಬರ್ 21 ರಂದು ಉಪ ಚುನಾವಣೆ ನಿಗದಿಯಾಗಿದೆ.
ಆಡಳಿತಾರೂಢ ಕಾಂಗ್ರೆಸ್ ಇನ್ನೂ ಅಭ್ಯರ್ಥಿಯನ್ನು ಘೋಷಿಸಿಲ್ಲ. ಕಿಶೋರ್ ಕುಮಾರ್ ಪುತ್ತೂರು ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅಭಿನಂದಿಸಿದ್ದು,ಬಿಜೆಪಿ ಯಾವಾಗಲೂ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯುತ್ತದೆ. ಈ ನಿಟ್ಟಿನಲ್ಲಿ ಅತ್ಯಂತ ಹಿಂದುಳಿದ ಸಮುದಾಯಕ್ಕೆ ಸೇರಿದ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವ ಮೂಲಕ ಪಕ್ಷದ ಮುಖಂಡರು ಸಾಮಾಜಿಕ ನ್ಯಾಯ ಮತ್ತು ಹಿಂದುಳಿದ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯಕ್ಕೆ ಬದ್ಧತೆಯನ್ನು ತೋರಿದ್ದಾರೆ ಎಂದು ಅವರು ಹೇಳಿದ್ದಾರೆ.
ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅಕ್ಟೋಬರ್ 3 ಕೊನೆಯ ದಿನಾಂಕವಾಗಿದ್ದು, ಅಕ್ಟೋಬರ್ 4 ರಂದು ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 7 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿರುತ್ತದೆ. ಅಕ್ಟೋಬರ್ 24 ರಂದು ಮತ ಎಣಿಕೆ ನಡೆಯಲಿದೆ.
Advertisement