ಮಂಗಳೂರು: ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಗುರುವಾರ ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಮತ್ತು ಕಾಂಗ್ರೆಸ್‌ನ ರಾಜು ಪೂಜಾರಿ ಸೇರಿದಂತೆ ನಾಲ್ವರು ನಾಮಪತ್ರ ಸಲ್ಲಿಸಿದರು.
ಒಟ್ಟು ಐದು ಅಭ್ಯರ್ಥಿಗಳು ಕಣದಲ್ಲಿದ್ದು, ಎಸ್‌ಡಿಪಿಐನ ಅನ್ವರ್ ಸಾದತ್ ಮತ್ತು ಮೊಹಮ್ಮದ್ ರಿಯಾಝ್ ಮತ್ತು ದಿನಕರ್ ಉಳ್ಳಾಲ್ (ಸ್ವತಂತ್ರ) ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಇದಕ್ಕೂಮುನ್ನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅಭ್ಯರ್ಥಿ ಕಿಶೋರ್ ಕುಮಾರ್, ನನ್ನಂತಹ ಸಾಮಾನ್ಯ ಕಾರ್ಯಕರ್ತನಿಗೆ ಇಂತಹ ಅವಕಾಶ ಸಿಗುವುದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಪಕ್ಷಕ್ಕೆ ಕಪ್ಪುಚುಕ್ಕಿ ಬರದಂತೆ ಜವಾಬ್ದಾರಿ ನಿರ್ವಹಿಸುತ್ತೇನೆ. ನನ್ನ ತಂದೆ ರಾಮಯ್ಯ ಭಂಡಾರಿ ಜನಸಂಘದಲ್ಲಿ ಕೆಲಸ ಮಾಡಿದವರು. ಚಿಕ್ಕಪ್ಪ ಸೇರಿದಂತೆ ಕುಟುಂಬದ ಅನೇಕರು ಆರ್‌ಎಸ್‌ಎಸ್ ಕಾರ್ಯಕರ್ತರಾಗಿ ದುಡಿದವರು ಎಂದರು. ಪ್ರತಿಯೊಬ್ಬ ಕಾರ್ಯಕರ್ತರು ತಾವೇ ಅಭ್ಯರ್ಥಿ ಎಂದು ಭಾವಿಸಿ ಕೆಲಸ ಮಾಡಬೇಕು. ಸಣ್ಣ ಸಮುದಾಯವಾಗಿರುವ ಸವಿತಾ ಸಮಾಜದ ವ್ಯಕ್ತಿಯೊಬ್ಬರಿಗೆ ಟಿಕೆಟ್ ನೀಡುವ ಮೂಲಕ ಬಿಜೆಪಿ ವಿಭಿನ್ನ ಪಕ್ಷ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ಸಂಸದ ಬ್ರಿಜೇಶ್ ಚೌಟ ತಿಳಿಸಿದರು.
ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಬೆಂಬಲಿತರು ಅಧಿಕ ಸಂಖ್ಯೆಯಲ್ಲಿ ಇರುವುದರಿಂದ ಕಿಶೋರ್ ಗೆಲುವು ಕಠಿಣವಲ್ಲ, ಆದರೆ, ಮತಗಳ ಅಂತರವನ್ನು ಇನ್ನಷ್ಟು ಹೆಚ್ಚಿಸಬೇಕು ಎಂದು ಸತೀಶ್ ಕುಂಪಲ ಹೇಳಿದರು. ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಕಿಶೋರ್ ಕುಮಾರ್ ಮಾತನಾಡಿ, ‘ಪ್ರತಿ ಮಹಾಶಕ್ತಿ ಕೇಂದ್ರದಲ್ಲಿ ಸಭೆ ನಡೆಸುವ ಮೂಲಕ ಪ್ರತಿಯೊಬ್ಬ ಮತದಾರನನ್ನು ಭೇಟಿ ಮಾಡಲು ಯೋಜನೆ ರೂಪಿಸಲಾಗಿದೆ’ ಎಂದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ, 20 ವರ್ಷಗಳಿಂದ ಗ್ರಾಮ, ತಾಲೂಕು, ಜಿಲ್ಲಾ ಪಂಚಾಯಿತಿಗಳಲ್ಲಿ ಕೆಲಸ ಮಾಡಿದ ಅನುಭವವಿದ್ದು, ಸ್ಥಳೀಯ ಸಂಸ್ಥೆಗಳ ಸಮಸ್ಯೆಗಳನ್ನು ಸಮರ್ಥವಾಗಿ ಮಂಡಿಸಲು ಸಾಧ್ಯವಾಗುತ್ತದೆ. ಕಳೆದ ಮೂರು ದಶಕಗಳಿಂದ ತಮ್ಮ ಸೇವೆಯನ್ನು ಪರಿಗಣಿಸಿ ಅವಕಾಶ ಕಲ್ಪಿಸಿಕೊಟ್ಟ ಪಕ್ಷಕ್ಕೆ ಕೃತಜ್ಞತೆ ಸಲ್ಲಿಸಿದರು.
ಚುನಾಯಿತ ಪ್ರತಿನಿಧಿಗಳಾದ ಮತದಾರರು ಸಾಕಷ್ಟು ಬುದ್ಧಿವಂತರಾಗಿದ್ದು, ಪರಿಷತ್ತಿನಲ್ಲಿ ತಮ್ಮನ್ನು ಸಮರ್ಥವಾಗಿ ಪ್ರತಿನಿಧಿಸಬಲ್ಲವರು ಯಾರೆಂದು ತಿಳಿದಿದೆ. ಹೀಗಾಗಿ ಗೆಲುವು ನಮ್ಮದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Advertisement