ಚಿಕ್ಕಮಗಳೂರು: ಚಿಕ್ಕಮಗಳೂರು ಶಾಸಕ ಎಚ್.ಡಿ.ತಮ್ಮಯ್ಯ ಅವರ ಭೇಟಿಯಲ್ಲಿ ಯಾವುದೇ ರಾಜಕೀಯ ಉದ್ದೇಶ ಇರಲಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತಿವೃಷ್ಟಿಯಿಂದ ಆಗಿರುವ ರಸ್ತೆ ಹಾನಿಯ ಪ್ರಮಾಣ ತಿಳಿಯಲು ಶಾಸಕ ಎಚ್.ಡಿ.ತಮ್ಮಯ್ಯ ಅವರ ಆಹ್ವಾನದ ಮೇರೆಗೆ ಚಿಕ್ಕಮಗಳೂರಿಗೆ ಭೇಟಿ ನೀಡಿದ್ದೆ, ಈ ಭೇಟಿಯಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಹೇಳಿದರು.
ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕೈಗೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲು ತೆರಳಿದ್ದೆ. ಮಾರ್ಗಮಧ್ಯೆ ಚಿಕ್ಕಮಗಳೂರಿಗೆ ಭೇಟಿ ನೀಡುವಂತೆ ತಮ್ಮಯ್ಯ ಮನವಿ ಮಾಡಿದ್ದರಿಂದ ಭೇಟಿ ನೀಡಿದ್ದೆ ಎಂದು ತಿಳಿಸಿದರು.
ಇದೇ ವೇಳೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಮೈಸೂರು ಮತ್ತು ಬೆಂಗಳೂರಿನಲ್ಲಿ ಈ ಬಗ್ಗೆ ಹೇಳಿಕೆ ನೀಡಿದ್ದು, ವಿರೋಧ ಪಕ್ಷದ ನಾಯಕರು ಟೀಕಿಸುತ್ತಾರೆ ಎಂಬ ಕಾರಣಕ್ಕೆ ಹೆಚ್ಚಿನ ಉತ್ತರ ನೀಡುವ ಅಗತ್ಯವಿಲ್ಲ ಎಂದರು.
ಸಿದ್ದರಾಮಯ್ಯ ಅವರು ಅಧಿಕಾರದಿಂದ ಕೆಳಗಿಳಿಯುವ ಅಗತ್ಯವಿಲ್ಲ, ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಸ್ಪಷ್ಟಪಡಿಸಿದರು.
Advertisement