
ಅರಕಲಗೂಡು (ಹಾಸನ ಜಿಲ್ಲೆ): ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಸಭೆ ಶೀಘ್ರದಲ್ಲೇ ನಡೆಯಲಿದ್ದು, ಸಭೆ ಬಳಿಕ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿಯವರು ಅವರು ಸೋಮವಾರ ಹೇಳಿದರು.
ಅರಕಲಗೂಡು ತಾಲೂಕಿನ ಬಿದರಕ್ಕನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗ ಯಾವಾಗ ಬೇಕಾದರೂ ಚುನಾವಣಾ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದ್ದು, ಉಪಚುನಾವಣೆ ಎದುರಿಸಲು ಮೈತ್ರಿ ಕೂಟದ ಮುಖಂಡರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಘೋಷಿಸಿರುವುದರಿಂದ ನಾನೂ ಕೂಡ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಯುವ ಸಾಧ್ಯತೆಗಳಿವೆ ಎಂದು ಹೇಳಿದರು.
ಟಿಕೆಟ್ ಪಡೆಯಲು ಬಿಜೆಪಿ-ಜೆಡಿಎಸ್ ಪಕ್ಷದ ಹಲವರು ಆಕಾಂಕ್ಷಿಗಳಿದ್ದಾರೆ. ಆದರೆ, ಎರಡೂ ಪಕ್ಷಗಳ ಉನ್ನತ ನಾಯಕರ ಚರ್ಚೆಯ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಇದೇ ವೇಳೆ 2022ರ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾದವರ ಮೇಲಿನ ಪ್ರಕರಣಗಳನ್ನು ಹಿಂಪಡೆದಿರುವ ಕಾಂಗ್ರೆಸ್ ಸರಕಾರವನ್ನು ಟೀಕಿಸಿದ ಅವರು, ಸಮಾಜ ವಿರೋಧಿಗಳು ಮತ್ತು ದೇಶ ವಿರೋಧಿಗಳ ವಿರುದ್ಧದ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವುದು ಸರಿಯಲ್ಲ ಎಂದರು.
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ನ ಕೆಟ್ಟ ಸ್ಥಿತಿಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು. ಗಡ್ಕರಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
Advertisement