
ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ನಡುವೆ ಜಿದ್ದಾಜಿದ್ದಿಗೆ ಸಾಕ್ಷಿಯಾಗಲಿರುವ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗವು ಉಪಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದ್ದು, ನವೆಂಬರ್ 13ರಂದು ಮತದಾನ ನಡೆಯಲಿದೆ.
ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಡುವೆ ವಿವಿಧ ಹಗರಣಗಳ ಕುರಿತಂತೆ ತೀವ್ರ ಆರೋಪ-ಪ್ರತ್ಯಾರೋಪ ನಡೆಯುತ್ತಿರುವ ನಡುವಲ್ಲೇ ಉಪಚುನಾವಣೆ ಘೋಷಣೆಯಾಗಿರುವುದು ತೀವ್ರ ರಾಜಕೀಯ ವಾಕ್ಸಮರಕ್ಕೆ ವೇದಿಕೆಯಾಗುವ ಸಾಧ್ಯತೆಗಳಿವೆ.
ಈ ತಿಂಗಳು 18ರಂದು ಉಪಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದ್ದು, 25ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. 28ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. 30 ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ನ.13ರಂದು ಚುನಾವಣೆ ನಡೆಯಲಿದ್ದು, ನಂ.23ರಂದು ಮತ ಎಣಿಕೆ ನಡೆಯಲಿದೆ.
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ಶಿಗ್ಗಾಂವಿ ಹಾಗೂ ಇ.ತುಕಾರಾಂ ರಾಜೀನಾಮೆಯಿಂದ ಸಂಡೂರು ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಹೀಗಾಗಿ ವೈಯಕ್ತಿಕವಾಗಿ ಈ ಕ್ಷೇತ್ರಗಳು ಹೆಚ್'ಡಿಕೆ ಹಾಗೂ ಬೊಮ್ಮಾಯಿಗೆ ಪ್ರತಿಷ್ಠೆಯ ಪ್ರಶ್ನೆಗಳಾಗಿವೆ. ಇನ್ನು ಚನ್ನಪಟ್ಟಣವು ಡಿಕೆ.ಶಿವಕುಮಾರ್ ಅವರ ತವರು ಜಿಲ್ಲೆಗೆ ಸೇರಿರುವ ಕಾರಣ ಅದೂ ಕೂಡ ಅವರಿಗೆ ಪ್ರತಿಷ್ಠೆಯ ವಿಷಯವಾಗಿದೆ.
ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್, ಮೈತ್ರಿ ಪಕ್ಷಗಳಾದ ಬಿಜೆಪಿ-ಜೆಡಿಎಸ್ ಗೆಲ್ಲುವ ಅಭ್ಯರ್ಥಿಗಳಿಗಾಗಿ ಹುಡುಕಾಟ ಶುರು ಮಾಡಿದೆ.
ಕಾಂಗ್ರೆಸ್ ಮೂಲಗಳ ಪ್ರಕಾರ, ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಹಾಲಿ ಸಂಸದ ಇ ತುಕಾರಾಂ ಅವರ ಪತ್ನಿ ಅಥವಾ ಮಗಳಿಗೆ ಟಿಕೆಟ್ ಸಿಗುವ ನಿರೀಕ್ಷೆಯಿದೆ ಎಂದು ತಿಳಿಸಿವೆ.
ಇನ್ನು ಬಿಜೆಪಿ ಸಂಡೂರು ಕ್ಷೇತ್ರದಲ್ಲಿ ಗೆಲ್ಲಲು ಮತ್ತು ಈ ಗೆಲುವನ್ನು ಪ್ರಧಾನಿ ಮೋದಿಯವರಿಗೆ ಉಡುಗೊರೆಯಾಗಿ ನೀಡಲು ಬಿಜೆಪಿ ನಾಯಕರು ಉತ್ಸುಕರಾಗಿದ್ದಾರೆ. ಹೀಗಾಗಿ ಸೂಕ್ತ ಅಭ್ಯರ್ಥಿಗಳಿಗಾಗಿ ಪಕ್ಷ ಹುಡುಕಾಟ ನಡೆಸುತ್ತಿದೆ. ಈ ನಡುವೆ ಮಾಜಿ ಸಚಿವ ಬಿ ಶ್ರೀರಾಮುಲು ಅವರ ಹೆಸರು ಕೂಡ ಕ್ಷೇತ್ರದಲ್ಲಿ ಕೇಳಿ ಬರುತ್ತಿದೆ.
ಕೆಪಿಸಿಸಿ ವಕ್ತಾರ ವೆಂಕಟೇಶ ಹೆಗಡೆ ಮಾತನಾಡಿ, ಸಂಡೂರು ಉಪಚುನಾವಣೆಯಲ್ಲಿ ಯಾರೇ ಸ್ಪರ್ಧಿಸಿದರೂ ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ. ತುಕಾರಾಂ ಅವರು ಕೈಗೊಂಡ ಅಭಿವೃದ್ಧಿ ಯೋಜನೆಗಳು ಪಕ್ಷದ ದೊಡ್ಡ ಶಕ್ತಿಯಾಗಿದೆ. ಕಳೆದ ನಾಲ್ಕು ವಿಧಾನಸಭಾ ಚುನಾವಣೆಗಳಲ್ಲಿ ತುಕಾರಾಂ ಅವರು ತಮ್ಮ ಎದುರಾಳಿಗಳ ಮೇಲೆ ಹಿಡಿತ ಸಾಧಿಸಿದ್ದರು. ಸಂಡೂರಿನಲ್ಲಿ ಸೋಮವಾರ ನಡೆದ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶದ ಉದ್ಘಾಟನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಕಾರಾಂ ಅವರು ಕೈಗೊಂಡಿದ್ದ ಕಾಮಗಾರಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆಂದು ಹೇಳಿದ್ದಾರೆ.
ಏತನ್ಮಧ್ಯೆ, ಉಪಚುನಾವಣೆಯಲ್ಲಿ ಪಕ್ಷವನ್ನು ಪ್ರತಿನಿಧಿಸಲು ಸಮರ್ಥ ಅಭ್ಯರ್ಥಿಯನ್ನು ಹೆಸರಿಸಲಾಗುವುದು ಎಂದು ಬಳ್ಳಾರಿಯ ಹಿರಿಯ ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ.
ಉಪಚುನಾವಣೆ ವೀಕ್ಷಕರು ಮತ್ತು ಸಮೀಕ್ಷಾ ತಂಡವು ಕೆಲವು ಹೆಸರುಗಳನ್ನು ಪಕ್ಷದ ವರಿಷ್ಠರಿಗೆ ತಿಳಿಸಿದೆ. ಅಂತಿಮವಾಗಿ ಯಾರೇ ಅಭ್ಯರ್ಥಿಯಾಗಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಸಂಪೂರ್ಣ ಬೆಂಬಲ ಸಿಗಲಿದ್ದು, ಅವರ ಗೆಲುವಿಗೆ ಶ್ರಮಿಸಲಿದ್ದಾರೆ ಎಂದು ಹೇಳಿದ್ದಾರೆ.
Advertisement