
ಬೆಂಗಳೂರು: ಮೈಸೂರಿನಲ್ಲಿ ಹಂಚಿಕೆಯಾಗಿದ್ದ ನಿವೇಶನಗಳನ್ನು ವಾಪಸ್ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ಹಗರಣವನ್ನು ಪರೋಕ್ಷವನ್ನು ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಲಾಲ್ ಸಿಂಗ್ ಆರ್ಯ ಶುಕ್ರವಾರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಆರ್ಯ, ಹಗರಣಗಳಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಬಾರದು. ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಪಕ್ಷ ದಲಿತ ವಿರೋಧಿ ಮಾತ್ರವಲ್ಲ ಮೀಸಲಾತಿ ವಿರೋಧಿಯೂ ಆಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೆರಿಕ ಪ್ರವಾಸದ ವೇಳೆಯಲ್ಲಿ ಮೀಸಲಾತಿ ರದ್ದುಪಡಿಸುವ ಹೇಳಿಕೆ ನೀಡಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಮೀಸಲಾತಿ ವಿರೋಧಿ ನಿಲುವನ್ನು ಮತ್ತೊಮ್ಮೆ ಬಹಿರಂಗಪಡಿಸಿದೆ. ಮಹರ್ಷಿ ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದರು.
ಪಕ್ಷವು ದೇಶಾದ್ಯಂತ 90 ಕೋಟಿ ಪ್ರಾಥಮಿಕ ಸದಸ್ಯರನ್ನು ಸೇರ್ಪಡೆಗೊಳಿಸಿದೆ. ಸಮಾಜದ ಎಲ್ಲ ವರ್ಗದ ಜನರು ಬಿಜೆಪಿಯತ್ತ ಆಕರ್ಷಿತರಾಗಿ ಸದಸ್ಯರಾಗಿ ಸೇರ್ಪಡೆಯಾಗುತ್ತಿದ್ದಾರೆ ಎಂದು ಅವರು ತಿಳಿಸಿದರು.
ಇದೇ ವೇಳೆ ಮಾತನಾಡಿದ ವಿಧಾನಪರಿಷತ್ ಸದಸ್ಯ ಎನ್.ರವಿ ಕುಮಾರ್, ಮುಡಾ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸುತ್ತೇವೆ. ಸಿದ್ದರಾಮಯ್ಯ ಲೆಕ್ಕವಿಲ್ಲದಷ್ಟು ಅಕ್ರಮ ಎಸಗಿದ್ದಾರೆ ಎಂಬುದು ಎಲ್ಲರಿಗೂ ಸ್ಪಷ್ಟವಾಗುತ್ತಿದೆ. ಆದರೆ, ಸಿದ್ದರಾಮಯ್ಯ ತಾನು ಯಾವುದೇ ತಪ್ಪು ಮಾಡಿಲ್ಲ, ಚಾಮುಂಡೇಶ್ವರಿಯ ಆಶೀರ್ವಾದವಿದೆ ಎಂದು ಹೇಳಿಕೊಳ್ಳುತ್ತಲೇ ಇದ್ದಾರೆ. ಅವರು ನೈತಿಕ ಮತ್ತು ಕಾನೂನಾತ್ಮಕವಾಗಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ, ನ್ಯಾಯಾಲಯದ ಆದೇಶದಂತೆ ಹಲವು ತಪ್ಪುಗಳನ್ನು ಮಾಡಿದ್ದಾರೆ ಎಂಬುದು ಬಹಿರಂಗವಾಗಿದೆ. ಬಿಜೆಪಿ ನಾಯಕರು ಇದೇ ರೀತಿ ಸಿಕ್ಕಿಬಿದಿದ್ದರೆ ಸಿದ್ದರಾಮಯ್ಯ ಎಷ್ಟು ಆಕ್ರಮಣಕಾರಿಯಾಗಿ ದಾಳಿ ಮಾಡುತ್ತಿದ್ದರು ಎಂಬುದನ್ನು ಜನರು ಊಹಿಸಿಕೊಳ್ಳಲು ಅಸಾಧ್ಯವಾಗಿತ್ತು ಎಂದರು.
Advertisement