
ಬೆಂಗಳೂರು: ನವೆಂಬರ್ 13 ರಂದು ನಡೆಯಲಿರುವ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರಿಂದ ಒತ್ತಡವಿದೆ ಎಂದು ಕಾಂಗ್ರೆಸ್ ಮಾಜಿ ಸಂಸದ ಡಿ ಕೆ ಸುರೇಶ್ ಭಾನುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರ ಸಹೋದರ ಸುರೇಶ್, ಈ ಭಾಗದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಪಕ್ಷದ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ. ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಚನ್ನಪಟ್ಟಣ ತಾಲೂಕಿನ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದೇವೆ. ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ ಎಂದು ಎಲ್ಲರೂ ಹೇಳಿದ್ದಾರೆ. ನನ್ನ ಮೇಲೂ ಸ್ಪರ್ಧಿಸುವಂತೆ ಒತ್ತಡವಿದೆ ಎಂದರು.
ಪಕ್ಷದ ಹೈಕಮಾಂಡ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ. ಅಭ್ಯರ್ಥಿಗಿಂತ ಹೆಚ್ಚಾಗಿ ಪಕ್ಷದ ಇತರ ಕಾರ್ಯಕರ್ತರೊಂದಿಗೆ ಕಾರ್ಯಕರ್ತನಾಗಿ ಕೆಲಸ ಮಾಡಲು ನನಗೆ ಖುಷಿಯಿದೆ. ಇದಕ್ಕೆ ಅವಕಾಶ ನೀಡುವಂತೆ ಪಕ್ಷದ ಮುಖಂಡರನ್ನು ಕೇಳಿದ್ದೇನೆ. ಎರಡ್ಮೂರು ದಿನಗಳಲ್ಲಿ ಪಕ್ಷ ಏನೇ ತೀರ್ಮಾನ ಕೈಗೊಂಡರೂ ಎಲ್ಲಾ ಮುಖಂಡರು, ಕಾರ್ಯಕರ್ತರು ಅದಕ್ಕೆ ಬದ್ಧರಾಗಿರುತ್ತಾರೆ ಎಂದು ಹೇಳಿದರು.
ನವೆಂಬರ್ 13 ರಂದು ಸಂಡೂರು ಮತ್ತು ಶಿಗ್ಗಾಂವ್ ವಿಧಾನಸಭಾ ಕ್ಷೇತ್ರಗಳ ಜೊತೆಗೆ ಚನ್ನಪಟ್ಟಣ ಉಪಚುನಾವಣೆ ನಡೆಯಲಿದೆ. ಇಲ್ಲಿ ಶಾಸಕರಾಗಿದ್ದ ಹೆಚ್ ಡಿ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿ ಕೇಂದ್ರ ಸಚಿವರಾಗಿ ಆಯ್ಕೆಯಾದ ನಂತರ ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆ ಅನಿವಾರ್ಯವಾಗಿದೆ.
ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಘೋಷಣೆಯಾಗುವ ಸಾಧ್ಯತೆಯಿದೆ. ಬಿಜೆಪಿ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಆಯ್ಕೆ ಮಾಡುವ ನಿರ್ಧಾರವನ್ನು ಕುಮಾರಸ್ವಾಮಿ ಅವರಿಗೆ ನೀಡಿದ್ದು, ಶೀಘ್ರದಲ್ಲೇ ಅವರು ಅಭ್ಯರ್ಥಿಯನ್ನು ಘೋಷಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಆದಾಗ್ಯೂ, ಚನ್ನಪಟ್ಟಣ ಕ್ಷೇತ್ರಕ್ಕೆ ನಾನೇ ಎನ್ ಡಿಎ ಅಭ್ಯರ್ಥಿ ಎಂದು ಸಿ.ಪಿ. ಯೋಗೇಶ್ವರ್ ಪದೇ ಪದೇ ಹೇಳುತ್ತಿದ್ದಾರೆ. 2018 ಮತ್ತು 2023ರ ಚುನಾವಣೆಯಲ್ಲಿ ಕುಮಾರಸ್ವಾಮಿ ಈ ಕ್ಷೇತ್ರದಿಂದ ಗೆದ್ದಿದ್ದರು.
Advertisement