
ಬೆಂಗಳೂರು: ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್‌ನ ರಾಜ್ಯ ಘಟಕವು ಅಭ್ಯರ್ಥಿಗಳನ್ನು ಬಹುತೇಕ ಅಂತಿಮಗೊಳಿಸಿದ್ದು, ಶೀಘ್ರದಲ್ಲೇ ಪಟ್ಟಿಯನ್ನು ಹೈಕಮಾಂಡ್‌ಗೆ ಕಳುಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.
ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಲು ಸಚಿವರಿಗೆ ಜವಾಬ್ದಾರಿ ನೀಡಲಾಗಿದೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಶಿವಕುಮಾರ್ ತಿಳಿಸಿದ್ದಾರೆ.
"ನಾವು ಬಹುತೇಕ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದೇವೆ. ನಾವು ಈ ಬಗ್ಗೆ ನಮ್ಮ ಸಚಿವರ ಅಭಿಪ್ರಾಯವನ್ನು ಕೇಳಿದ್ದೇವೆ. ಅವರಿಗೆ ಜವಾಬ್ದಾರಿಗಳನ್ನು ನೀಡಲಾಗಿದೆ... ನಾವು ನಮ್ಮ ಪ್ರಸ್ತಾಪವನ್ನು ದೆಹಲಿಗೆ ಕಳುಹಿಸುತ್ತೇವೆ(ಹೈಕಮಾಂಡ್). ಅವರು ಚರ್ಚಿಸಿ ನಿರ್ಧರಿಸುತ್ತಾರೆ" ಡಿಕೆ ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಪ್ರತಿ ಸ್ಥಾನಕ್ಕೆ ಎಷ್ಟು ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್‌ಗೆ ಶಿಫಾರಸು ಮಾಡಲಾಗುವುದು ಎಂಬುದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ತಮ್ಮ ಸಹೋದರ ಹಾಗೂ ಬೆಂಗಳೂರು ಗ್ರಾಮಾಂತರ ಮಾಜಿ ಸಂಸದ ಡಿ.ಕೆ.ಸುರೇಶ್‌ಗೆ ಚನ್ನಪಟ್ಟಣದಿಂದ ಟಿಕೆಟ್ ನೀಡಬೇಕೆಂದು ಪಕ್ಷದ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದ ಶಿವಕುಮಾರ್, ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಅವರಿಗೆ ಹೇಳಿದ್ದೇನೆ. ಲೋಕಸಭೆ ಚುನಾವಣೆಯ ಸೋಲಿನ ಆಘಾತದಿಂದ ನಾವು ಇನ್ನೂ ಹೊರಬಂದಿಲ್ಲ. ಆದರೆ ನಾವು ಜನರ ಸೇವೆ ಬಿಡಲು ಸಿದ್ಧರಿಲ್ಲ ಎಂದಿದ್ದಾರೆ.
ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ತಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಡಿಕೆ ಸುರೇಶ್ ಭಾನುವಾರ ಹೇಳಿದ್ದರು.
ಚನ್ನಪಟ್ಟಣ ಟಿಕೆಟ್‌ಗಾಗಿ ಬಿಜೆಪಿ ಎಂಎಲ್‌ಸಿ ಸಿ ಪಿ ಯೋಗೀಶ್ವರ ಅವರು ಕಾಂಗ್ರೆಸ್‌ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಜೆಡಿಎಸ್ ಮುಖಂಡ ಮತ್ತು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ಹೇಳಿಕೆಯನ್ನು ಶಿವಕುಮಾರ್ ತಳ್ಳಿಹಾಕಿದ್ದಾರೆ.
''ನಾನು ಯೋಗೀಶ್ವರ ಅವರನ್ನು ಭೇಟಿ ಮಾಡಿಲ್ಲ ಮತ್ತು ಅವರೊಂದಿಗೆ ಮಾತನಾಡಿಲ್ಲ. ನಾನು ಅವರನ್ನು ಕೊನೆಯ ಬಾರಿಗೆ ನೋಡಿದ್ದು, ಅವರು ಎಂಎಲ್‌ಸಿಯಾಗಿ ಭಾಗವಹಿಸಿದ್ದ ಸ್ವಾತಂತ್ರ್ಯ ದಿನಾಚರಣೆಯ ಅಧಿಕೃತ ಕಾರ್ಯಕ್ರಮದಲ್ಲಿ... ನಾವು ಯಾಕೆ ಭೇಟಿಯಾಗಬೇಕು. ಅವರು(ಯೋಗೀಶ್ವರ), ಮತ್ತೊಂದು ಪಕ್ಷದ ಎಂಎಲ್‌ಸಿ. ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ನಾವು ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ ಎಂದರು.
ಸಂಡೂರು, ಶಿಗ್ಗಾಂವ್ ಮತ್ತು ಚನ್ನಪಟ್ಟಣಕ್ಕೆ ನವೆಂಬರ್ 13 ರಂದು ಉಪಚುನಾವಣೆ ನಡೆಯುತ್ತಿದ್ದು, ನಾಮಪತ್ರ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನವಾಗಿದೆ ಮತ್ತು ನಾಮಪತ್ರ ಹಿಂಪಡೆಯಲು ಅಕ್ಟೋಬರ್ 30 ಕೊನೆಯ ದಿನವಾಗಿದೆ.
ಸಂಡೂರು ಮತ್ತು ಶಿಗ್ಗಾಂವ್ ಕ್ಷೇತ್ರಗಳಿಗೆ ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದರೆ, ತನ್ನ ಮಿತ್ರ ಪಕ್ಷ ಜೆಡಿಎಸ್‌ಗೆ ಹೈ ಪ್ರೊಫೈಲ್ ಚನ್ನಪಟ್ಟಣ ಕ್ಷೇತ್ರವನ್ನು ಬಿಟ್ಟುಕೊಟ್ಟಿದೆ.
Advertisement