
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿರುವ ಚನ್ನಪಟ್ಟಣ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಬಹುತೇಕ ಅಂತಿಮವಾಗಿದ್ದು, ಕಾರ್ಯಕರ್ತರ ಒತ್ತಡಕ್ಕೆ ಮಣಿದು ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಗುರುವಾರ ಘೋಷಿಸಿದ್ದಾರೆ.
ಇದರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸಿ.ಪಿ ಯೋಗೇಶ್ವರ್ ಅವರಿಗೆ ಎದುರಾಳಿ ಯಾರು ಅನ್ನೋ ಗೊಂದಲಕ್ಕೆ ತೆರೆ ಬಿದ್ದಿದೆ.
ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರೇ ಕಣಕ್ಕಿಳಿಯುವುದು ಬಹುತೇಕ ಫಿಕ್ಸ್ ಆಗಿದೆ. ಜೆಡಿಎಸ್ ವರಿಷ್ಠರು ಕಾರ್ಯಕರ್ತರ ಒತ್ತಡಕ್ಕೆ ಮಣಿದು ನಿಖಿಲ್ ಅವರನ್ನ ಮತ್ತೊಂದು ಅಗ್ನಿಪರೀಕ್ಷೆಯ ಕಣಕ್ಕಿಳಿಸಲು ರೆಡಿಯಾಗಿದ್ದಾರೆ
ಇಂದು ಜೆಡಿಎಸ್ ಕಚೇರಿಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ಸಂಬಂಧ ಕಾರ್ಯಕರ್ತರ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಕಾರ್ಯಕರ್ತರು ನಿಖಿಲ್ ಅವರೇ ಅಭ್ಯರ್ಥಿ ಆಗಬೇಕು ಅನ್ನೋ ಒತ್ತಾಯ ಮಾಡಿದರು. ಈ ಸಭೆಯಲ್ಲಿ, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ಸಮ್ಮುಖದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ನಿಮ್ಮ ಒತ್ತಡಕ್ಕೆ ಮಣಿದು ಚುನಾವಣೆಗೆ ಸ್ಪರ್ಧಿಸಲು ನಾನು ಸಿದ್ಧ ಎಂದು ಘೋಷಣೆ ಮಾಡಿದ್ದಾರೆ. ಖುದ್ದು ನಿಖಿಲ್ ಅವರ ಈ ಮಾತಿನಿಂದ ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸುವುದು ಫಿಕ್ಸ್ ಆಗಿದೆ.
ಚನ್ನಪಟ್ಟಣದಲ್ಲಿ NDA ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಕಣಕ್ಕಿಳಿಯೋ ಲೆಕ್ಕಾಚಾರ ಅಂತಿಮವಾಗಿದೆ. ಅಧಿಕೃತವಾಗಿ ಘೋಷಣೆ ಮಾಡುವುದು ಮಾತ್ರವೇ ಬಾಕಿ ಉಳಿದಿದೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಅವರು ಸಭೆ ನಡೆಸಿ, ನಂತರ ಅಧಿಕೃತವಾಗಿ ಎನ್ ಡಿಎ ಅಭ್ಯರ್ಥಿ ಘೋಷಣೆ ಮಾಡಲು ನಿರ್ಧಾರ ಮಾಡಿದ್ದಾರೆ.
Advertisement