
ಶಿಗ್ಗಾಂವಿ: ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಜ್ಜಂಪೀರ್ ಖಾದ್ರಿ ಬದಲಿಗೆ ಯಾಸಿರ್ ಅಹ್ಮದ್ ಖಾನ್ ಗೆ ಟಿಕೆಟ್ ಘೋಷಣೆಯಾಗಿತ್ತು. ಇದರಿಂದ ಬೇಸರಗೊಂಡಿರುವ ಅಜ್ಜಂಪೀರ್ ಖಾದ್ರಿ ಇದೀಗ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಶಿಗ್ಗಾಂವಿ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿತ್ತು. ಅನ್ನು ನಾಮಪತ್ರ ಸಲ್ಲಿಕೆಗೆ ಇನ್ನು 13 ನಿಮಿಷ ಬಾಕಿ ಇರುವಂತೆ ಬೈಕ್ ನಲ್ಲಿ ಬಂದ ಅಜ್ಜಂಪೀರ್ ಖಾದ್ರಿ ನಾಮಪತ್ರ ಸಲ್ಲಿಸಿದ್ದಾರೆ. ಅಜ್ಜಂಪೀರ್ ಖಾದ್ರಿಯ ಈ ನಡೆ ಇದೀಗ ಕಾಂಗ್ರೆಸ್ಸಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.
ಅಜ್ಜಂಪೀರ್ ಖಾದ್ರಿಗೂ ಮೊದಲು ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ನಾಮಪತ್ರ ಸಲ್ಲಿಸಿದ್ದರು. ಅಲ್ಲದೆ ಅಜ್ಜಂಪೀರ್ ಖಾದ್ರಿ ನಾಮಪತ್ರ ಸಲ್ಲಿಸದಂತೆ ಮನವೊಲಿಸಲು ಸಚಿವ ಜಮೀರ್ ಅಹ್ಮದ್ ಖಾನ್ ಬಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೆ ಅಜ್ಜಂಪೀರ್ ಖಾದ್ರಿ ಬೆಂಬಲಿಗರು ಜಮೀರ್ ಕಾರಿನ ಮೇಲೆ ಕಲ್ಲು ತೂರಿದ್ದಾರೆ. ಇದರಿಂದಾಗಿ ಕಾರಿನ ಗ್ಲಾಸ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಶಿಗ್ಗಾಂವಿ ಬಿಜೆಪಿ ಶಾಸಕರಾಗಿದ್ದ ಮಾಜಿ ಸಿಎಂ, ಪ್ರಸ್ತುತ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಅವರ ರಾಜಿನಾಮೆಯಿಂದ ತೆರವಾಗಿದ್ದ ಶಿಗ್ಗಾಂವಿ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿತ್ತು. ಇನ್ನು ಬಿಜೆಪಿ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ನೀಡಿದೆ.
Advertisement