
ಶಿವಮೊಗ್ಗ: ರಾಜ್ಯಪಾಲರ ಪ್ರಾಸಿಕ್ಯೂಷನ್ ಗೆ ಸಂಬಂಧಿಸಿದಂತೆ ನ್ಯಾಯಾಲಯ ತೀರ್ಪು ಪ್ರಕಟಿಸುವ ಮುನ್ನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೌರವಯುತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರು ಬುಧವಾರ ಒತ್ತಾಯಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪಿನ ನಂತರ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪರಿಸ್ಥಿತಿ ಎದುರಾಗಲಿದೆ ಎಂದು ಮಾಜಿ ಸಿಎಂ ಹೇಳಿದ್ದಾರೆ.
''ಕೋರ್ಟ್ ತೀರ್ಪಿನ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂರಕ್ಕೆ ನೂರರಷ್ಟು ರಾಜೀನಾಮೆ ನೀಡುವ ಪರಿಸ್ಥಿತಿ ಬರಲಿದೆ. ಕೋರ್ಟ್ ತೀರ್ಪು ಬರುವ ಮುನ್ನ ಗೌರವಯುತವಾಗಿ ರಾಜೀನಾಮೆ ನೀಡುವಂತೆ ನಾನು ಸಲಹೆ ನೀಡುತ್ತೇನೆ. ಅವರು ಮಾಡಿರುವ ಹಗರಣಗಳೆಲ್ಲವೂ ಸಾಬೀತಾಗಿರುವುದರಿಂದ ಅವರು ತಪ್ಪಿಸಿಕೊಳ್ಳಲು ಅವಕಾಶವಿಲ್ಲ ಎಂದರು.
ಈ ಸಂಬಂಧ ಇನ್ನು ಹೋರಾಟದ ಅಗತ್ಯವಿಲ್ಲ. ಒಂದು ರೀತಿಯಲ್ಲಿ ಪ್ರಕರಣ ಅಂತಿಮ ಹಂತಕ್ಕೆ ಬಂದಿದ್ದು, ಸಹಜವಾಗಿಯೇ ಅವರು(ಸಿಎಂ) ರಾಜೀನಾಮೆ ನೀಡುವ ಪರಿಸ್ಥಿತಿ ಬರಲಿದೆ ಎಂದು ಮಾಜಿ ಸಿಎಂ ಸುದ್ದಿಗಾರರಿಗೆ ತಿಳಿಸಿದರು.
ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.
ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 9ರಂದು ನಿಗದಿ ಮಾಡಲಾಗಿದ್ದು, ಅಲ್ಲಿಯವರೆಗೂ ಸಿದ್ದರಾಮಯ್ಯಗೆ ಮತ್ತೆ ರಿಲೀಫ್ ಸಿಕ್ಕಂತಾಗಿದೆ.
Advertisement