
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಮುನಿರತ್ನ ನಾಯ್ಡು ಅವರಿಗೆ ಶನಿವಾರ ಬಿಜೆಪಿ ಶೋಕಾಸ್ ನೋಟೀಸ್ ಜಾರಿ ಮಾಡಿದೆ.
ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಮುನಿರತ್ನ ಅವರಿಗೆ ಶೊಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ನಿಂದನೆ ಆಡಿಯೋ ಪ್ರಕರಣದಿಂದಾಗಿ ಪಕ್ಷದ ಶಿಸ್ತಿಗೆ ಧಕ್ಕೆಯುಂಟಾಗಿದೆ. ಈ ಹಿನ್ನೆಲೆಯಲ್ಲಿ 5 ದಿನಗಳ ಒಳಗಾಗಿ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚಿಸಿ ನೋಟೀಸ್ ನೀಡಲಾಗಿದೆ.
ಬಿಜೆಪಿ ಶಾಸಕ ಮುನಿರತ್ನ ಅವರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ, ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರ ಚಲುವರಾಜು ಅವರು ಪೊಲೀಸರು ದೂರು ನೀಡಿದ್ದರು.
ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರ್‌ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರನ್ನು ಇಂದು ಸಂಜೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Advertisement