ಸರ್ಕಾರ ಅಸ್ಥಿರಗೊಳಿಸುವ ರಾಜ್ಯಪಾಲರ ಪ್ರಯತ್ನ ಮತ್ತು ಬಿಜೆಪಿ ಷಡ್ಯಂತ್ರಕ್ಕೆ ಬಗ್ಗುವ ಪ್ರಶ್ನೆಯೇ ಇಲ್ಲ: ಕಾಂಗ್ರೆಸ್

ಬೆಂಗಳೂರು: ಸರ್ಕಾರವನ್ನು ಅಸ್ಥಿರಗೊಳಿಸುವ ರಾಜ್ಯಪಾಲರ ಪ್ರಯತ್ನಕ್ಕೆ, ಬಿಜೆಪಿಯ ಷಡ್ಯಂತ್ರಕ್ಕೆ ಬಗ್ಗುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಮಂಗಳವಾರ ಹೇಳಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಹೋರಾಟ ಮುಂದುವರೆಯಲಿದೆ, ಸರ್ಕಾರವನ್ನು ಅಸ್ಥಿರಗೊಳಿಸುವ ರಾಜ್ಯಪಾಲರ ಪ್ರಯತ್ನಕ್ಕೆ, ಬಿಜೆಪಿಯ ಷಡ್ಯಂತ್ರಕ್ಕೆ ಬಗ್ಗುವ ಪ್ರಶ್ನೆಯೇ ಇಲ್ಲ. ರಾಜ್ಯಪಾಲರು ಕುಮಾರಸ್ವಾಮಿ ಹಾಗೂ ಇತರ ಬಿಜೆಪಿ ನಾಯಕರ ಬಗೆಗಿನ ದೂರುಗಳನ್ನು ಮುಚ್ಚಿಡಲು ಪ್ರಯತ್ನಿಸಿದ್ದು ಜಗಜ್ಜಾಹೀರಾಗಿದೆ, ಈ ಬಗ್ಗೆ ದೂರುಗಳು ಹೇಗೆ ಸೋರಿಕೆಯಾದವು ಎಂದು ರಾಜ್ಯಪಾಲರ ಪ್ರಶ್ನೆಯೇ ಅವರ ತಾರತಮ್ಯದ ರಾಜಕೀಯಕ್ಕೆ ಪುರಾವೆ ಒದಗಿಸುತ್ತವೆ ಎಂದು ಹೇಳಿದೆ.|
ಈ ನಡುವೆ ರಾಜ್ಯ ಬಿಜೆಪಿ ಘಟಕ ಕೂಡ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದೆ.
ಜಯತೆ, ಜಯತೆ, ಸತ್ಯಮೇವ ಜಯತೆ, ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ವಿರುದ್ಧ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿರುವುದು ಸ್ವಾಗತಾರ್ಹ. ತಮ್ಮ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಘನತೆವೆತ್ತ ರಾಜ್ಯಪಾಲರ ಮೇಲೆ ಕೀಳು ಮಟ್ಟದ ರಾಜಕೀಯಕ್ಕೆ ಕಾಂಗ್ರೆಸ್ ನ ನಾಯಕರು ಮುಂದಾಗಿದ್ದರು. ಆದರೆ ನ್ಯಾಯಾಲಯ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದು, ಭ್ರಷ್ಟರಿಗೆ ಭಾರತದಲ್ಲಿ ಜಾಗವಿಲ್ಲ ಎಂಬುದನ್ನು ಪುನರುಚ್ಛರಿಸಿದೆ.
ಸಿದ್ದರಾಮಯ್ಯ ಅವರಿಗೆ ಈ ನೆಲದ ಕಾನೂನಿನ ಬಗ್ಗೆ, ಸಂವಿಧಾನದ ಬಗ್ಗೆ , ನ್ಯಾಯಾಲಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ, ಭಂಡತನವನ್ನು ಮುಂದುವರೆಸದೆ, ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.
ಮತ್ತೊಂದು ಪೋಸ್ಟ್ ನಲ್ಲಿ ಬಡವರ ನಿವೇಶನ ಕಬಳಿಸಿ, ಲಜ್ಜೆಬಿಟ್ಟು ಸಿಎಂ ಹುದ್ದೆಯಲ್ಲಿ ಮುಂದುವರಿಯುತ್ತಿರುವ ಸಿದ್ದರಾಮಯ್ಯ ಅವರೇ ಒಂದು ಕ್ಷಣವೂ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುವ ನೈತಿಕತೆಯನ್ನು ಇಂದು ತಾವು ಉಳಿಸಿಕೊಂಡಿಲ್ಲ. ರಾಜೀನಾಮೆ ನೀಡಿ, ತನಿಖೆ ಎದುರಿಸಿ. ನೀವು ಕಟ್ಟಿರುವ ಸುಳ್ಳಿನ ಸಾಮ್ರಾಜ್ಯ ಸಂಪೂರ್ಣ ಕುಸಿದಿದೆ ಇನ್ನು ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಒತ್ತಾಯಿಸಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದ್ದು, ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದೆ.
ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಸಿಎಂ ಕುಟುಂಬಸ್ಥರು ಫಲಾನುಭವಿಗಳಾಗಿದ್ದಾರೆ. ಹೀಗಾಗಿ ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. ಸಿಎಂ ಎತ್ತಿದ್ದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



