ರಾಜಕೀಯ

MUDA ಸಂಕಷ್ಟದಲ್ಲಿ ಸಿದ್ದರಾಮಯ್ಯ; ರಾಜಿನಾಮೆಗೆ ಬಿಜೆಪಿ ಪಟ್ಟು; 'ಕೈ' ಹಿಡಿಯುತ್ತದೇಯೇ ಕಾಂಗ್ರೆಸ್?

MUDA ಸಂಕಷ್ಟದಲ್ಲಿ ಸಿದ್ದರಾಮಯ್ಯ; ರಾಜಿನಾಮೆಗೆ ಬಿಜೆಪಿ ಪಟ್ಟು; 'ಕೈ' ಹಿಡಿಯುತ್ತದೇಯೇ ಕಾಂಗ್ರೆಸ್?
ಸಂಗ್ರಹ ಚಿತ್ರ
Published On :

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂದಿದ್ದು, ಹೈಕೋರ್ಟ್‌ನ ಏಕ ಪೀಠದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾಂಗ್ರೆಸ್ ನಿರ್ಧಾರ ಕೈಗೊಂಡಿದೆ.

ಆದರೆ, ಕಾನೂನು ಹೋರಾಟವನ್ನು ಸುಪ್ರೀಂಕೋರ್ಟ್ ನಲ್ಲಿ ನಡೆಸುವುದು ಉತ್ತಮವೇ ಅಥವಾ ವಿಭಾಗೀಯ ಪೀಠದಲ್ಲಿ ನಡೆಸುವ ಕುರಿತು ಗೊಂದಲಗಳು ಶುರುವಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಸರ್ಕಾರದ ಮಾಜಿ ಕಾನೂನು ಸಲಹೆಗಾರ ಬ್ರಿಜೇಶ್ ಕಾಳಪ್ಪ ಅವರು, ಸಿದ್ದರಾಮಯ್ಯ ಅವರು ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಹೋರಾಟ ಮಾಡುವುದನ್ನು ಬಿಟ್ಟು ನೇರವಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋಗಬೇಕೆಂದು ಸಲಹೆ ನೀಡಿದ್ದಾರೆ.

ಆದಾಗ್ಯೂ, ಕೆಲವು ಕಾಂಗ್ರೆಸ್ ನಾಯಕರು ಸುಪ್ರೀಂ ಕೋರ್ಟ್‌ಗೆ ಹೋಗುವ ಮೊದಲು ಹೈಕೋರ್ಟ್ ನಲ್ಲಿಯೇ ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂದು ಸಲಹೆ ನೀಡಿದ್ದಾರೆ.

ಈ ಎಲ್ಲಾ ಬೆಳವಣಿಗೆ ನಡುವೆ ಮುಡಾ ಹಗರಣ ವಿಚಾರದಲ್ಲಿ ಕಾಂಗ್ರೆಸ್ ಬಲವಾಗಿ ನಿಲ್ಲುತ್ತದೆಯೇ ಅಥವಾ ಬಿಜೆಪಿ ಹೋರಾಟ ಗೆಲುವು ಸಾಧಿಸುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಈ ನಡುವೆ ಬಿಜೆಪಿ ಒತ್ತಡಕ್ಕೆ ಮಣಿಯುವುದಿಲ್ಲ, ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈಗಾಗಲೇ ಬಿಜೆಪಿ ಮುಡಾ ಹಗರಣದಲ್ಲಿ ಹಿಂದೆ ಸರಿಯುವ ಮಾತೇ ಇಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆಗಳು ಮುಂದುವರೆಯಲಿವೆ ಎಂದು ಹೇಳಿದೆ.

ಏತನ್ಮಧ್ಯೆ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆಸಿ.ವೇಣುಗೋಪಾಲ್ ಅವರು ಮಾತನಾಡಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೋದಿ-ಶಾ ಆಡಳಿತವು "ಜನಪರ" ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರ ಕಚೇರಿಯನ್ನು ಬಳಸುತ್ತಿದೆ. ಈ ಪಿತೂರಿ ವಿರುದ್ಧ ಕಾನೂನು ಹಾಗೂ ರಾಜಕೀಯವಾಗಿ ಕಾಂಗ್ರೆಸ್ ಹೋರಾಟ ನಡೆಯಲಿದೆ ಎಂದು ಹೇಳಿದರು.ಕಾಂಗ್ರೆಸ್ ಯಾವುದೇ ಕಾರಣಕ್ಕೂ ಮಂಡಿಯೂರುವುದಿಲ್ಲ. ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲಲಿದೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರ, ಜಮ್ಮು ಮತ್ತು ಕಾಶ್ಮೀರ, ಹರಿಯಾಣ ಮತ್ತು ಜಾರ್ಖಂಡ್‌ನಲ್ಲಿ ಚುನಾವಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ಹಿರಿಯ ನಾಯಕರನ್ನು ಬದಿಗೊತ್ತುವ ನಿರ್ಧಾರವನ್ನು ಕಾಂಗ್ರೆಸ್ ತೆಗೆದುಕೊಳ್ಳುವುದಿಲ್ಲ. ಆದರೆ, ಸಾರ್ವಜನಿಕರ ದೃಷ್ಟಿಯನ್ನು ಸೂಕ್ಷ್ಮವಾಗಿ ಗಮನಿಸಿ ನಿರ್ಧಾರ ಕೈಗೊಳ್ಲುವ ಸಾಧ್ಯತೆಗಳಿವೆ. ಇದೀಗ ನಾವು ಸಿದ್ದರಾಮಯ್ಯ ಪರವಾಗಿ ನಿಲ್ಲಬಹುದು. ಆದರೆ, ಚುನಾವಣೆ ಎದುರಾಗುವ ರಾಜ್ಯಗಳಲ್ಲಿನ ಜನರ ದೃಷ್ಟಿಕೋನವನ್ನು ಗಮನಿಸಿ ಚಿಂತನೆ ನಡೆಸಬೇಕಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.