
ಬೆಂಗಳೂರು: ಹಲವು ಅಪರಾಧ ಮಾಡಿರುವ ಭ್ರಷ್ಟ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ರಾಜಭವನದ ಸಿಬ್ಬಂದಿಯ ತನಿಖೆ ಮಾಡಲು ಅನುಮತಿ ಕೇಳಿದ್ದಾರೆ ಎಂದು ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಶನಿವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಜೆಡಿಎಸ್ ಪ್ರಧಾನ ಕಚೇರಿ ಜೆ. ಪಿ. ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ,ಲೋಕಾಯುಕ್ತ ವಿಶೇಷ ತನಿಖಾ ದಳದ ಐಜಿಪಿ ಎಂ. ಚಂದ್ರಶೇಖರ್ ಭ್ರಷ್ಟ ಅಧಿಕಾರಿ ಆಗಿದ್ದು, ಇಂತಹ ಅಧಿಕಾರಿಗಳನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರ ತನಿಖೆ ಮಾಡಿಸುತ್ತಿದೆ ಎಂದು ಆರೋಪಿಸಿದರು. ಅವರ ವಿರುದ್ಧದ ಸರಣಿ ದಾಖಲೆಯನ್ನು ಬಿಡುಗಡೆ ಮಾಡಿದರು.
ಸಿದ್ದರಾಮಯ್ಯ ಸರ್ಕಾರದಲ್ಲಿ ಯಾವ ತನಿಖೆಯೂ ಪಾರದರ್ಶಕವಾಗಿ ನಡೆಯುತ್ತಿಲ್ಲ. ರಾಜಕೀಯ ಸೇಡಿಗಾಗಿ ತನಿಖೆ ನಡೆಸಲಾಗುತ್ತಿದೆ. ಇಂತಹ ಉದ್ದೇಶಕ್ಕೆ ಚಂದ್ರಶೇಖರ್ ಅವರಂಥ ಕಳಂಕಿತ ಅಧಿಕಾರಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಈ ಅಧಿಕಾರಿಯ ವಿರುದ್ಧ ಕೇಂದ್ರ ಗೃಹ ಸಚಿವಾಲಯಕ್ಕೆ ದೂರು ನೀಡಲಾಗುವುದು ಎಂದು ಅವರು ತಿಳಿಸಿದರು.
ನನ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಲೋಕಾಯುಕ್ತಕ್ಕೆ ಬರೆದಿದ್ದ ಅತಿ ಗೌಪ್ಯ ಪತ್ರವೊಂದು ಸೋರಿಕೆ ಆಗಿತ್ತು. ಅದು ನಮ್ಮ ಕುಟುಂಬದ ವಿರುದ್ಧ ಅನೇಕ ತಿಂಗಳಿನಿಂದ ವೈಯಕ್ತಿಕವಾಗಿ ತೇಜೋವಧೆ ಮಾಡುತ್ತಿರುವ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಆ ಪತ್ರ ಸೋರಿಕೆ ಆಗಿತ್ತು. ಅದು ಐಜಿಪಿ ಚಂದ್ರಶೇಖರ್ ಅವರಿಂದಲೇ ಸೋರಿಕೆ ಆಗಿದೆ. ಆದರೆ ಅದೇ ಅಧಿಕಾರಿ ರಾಜ್ಯಪಾಲರ ಕಚೇರಿಯಿಂದಲೇ ಪತ್ರ ಸೋರಿಕೆ ಆಗಿದೆ ಎಂದು ಕಟ್ಟು ಕಥೆ ಹೇಳಿ ರಾಜಭವನ ಸಿಬ್ಬಂದಿಯನ್ನು ತನಿಖೆ ಮಾಡಲು ಅನುಮತಿ ಕೇಳಿ ಲೋಕಾಯುಕ್ತ ಎಡಿಜಿಪಿಗೆ ಪತ್ರ ಬರೆದಿದ್ದಾರೆ. ಸಂವಿಧಾನ ಮತ್ತು ರಾಷ್ಟ್ರಪತಿಗಳ ಪ್ರತಿನಿಧಿಯಾಗಿ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುವ ರಾಭವನದ ಬಗ್ಗೆ ತನಿಖೆಗೆ ಅನುಮತಿ ಕೋರುವ ದರ್ಪವನ್ನು ತೋರಿಸಿರುವ ಅಧಿಕಾರಿಗೆ ಮುಂದೆ ತಕ್ಕ ಶಾಸ್ತಿ ಕಾದಿದೆ ಎಂದು ಕುಮಾರಸ್ವಾಮಿ ಹೇಳಿದರು.
ಐಜಿಪಿ ಚಂದ್ರಶೇಖರ್ ಗೆ ಬೆಂಗಳೂರು ಪೊಲೀಸ್ ಕಮೀಷನರ್ ಆಮಿಷ ವೊಡ್ಡಲಾಗಿದೆ. ಐಪಿಎಸ್ ಅಧಿಕಾರಿಗಳಾದ ಬಿಕೆ ಸಿಂಗ್, ಚಂದ್ರಶೇಖರ್, ಗುಪ್ತದಳ ಮುಖ್ಯಸ್ಥರು ಸೇರಿದಂತೆ ಅನೇಕರಿಗೆ ಇದೇ ರೀತಿಯ ಆಮಿಷವೊಡ್ಡಲಾಗಿದ್ದು, ಈ ಸರ್ಕಾರದಲ್ಲಿ ತನಿಖೆಗಳು ಪಾರದರ್ಶಕವಾಗಿ ನಡೆಯುತ್ತವೆ ಎನ್ನುವ ನಂಬಿಕೆ ಇಲ್ಲ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಮೂಲತ: ಹಿಮಾಚಲ ಪ್ರದೇಶ ಕೇಡರ್ ನ ಅಧಿಕಾರಿಯಾಗಿ 1998ರಲ್ಲಿ ಆಯ್ಕೆಯಾದ ಚಂದ್ರಶೇಖರ್, ಐದು ವರ್ಷಗಳ ಅವಧಿಗೆ ನಿಯೋಜನೆ ಮೇಲೆ ಕರ್ನಾಟಕಕ್ಕೆ ಬಂದರು. ಹಿಮಾಚಲ ಪ್ರದೇಶದಲ್ಲಿ ಹವಾಮಾನ ಸರಿಯಾಗಿಲ್ಲ ಎಂದು ಸುಳ್ಳು ದಾಖಲೆ ಸೃಷ್ಟಿ ಮಾಡಿ ಕರ್ನಾಟಕದಲ್ಲಿ ಅಧಿಕಾರದಲ್ಲಿ ಮುಂದುವರೆದಿದ್ದಾರೆ. ನಿಯೋಜನೆ ಮೇಲೆ ಬಂದ ವ್ಯಕ್ತಿ, ಆಮೇಲೆ ಕರ್ನಾಟಕ ಕೇಡರ್ ಅಧಿಕಾರಿ ಆಗುತ್ತಾರೆ. ಇದಕ್ಕೆಲ್ಲಾ ಯಾರು ನೆರವು ನೀಡಿದ್ದರು ಎನ್ನುವುದನ್ನು ಹೇಳುವುದಿಲ್ಲ. ಅವರ ವಿರುದ್ಧ ಹಲವು ದೂರುಗಳು ದಾಖಲಾಗಿದ್ದು, ಆರೋಪ ಪಟ್ಟಿ ಸಲ್ಲಿಕೆಯಾಗಿವೆ. ತಮ್ಮ ಅಧೀನದಲ್ಲಿದ್ದ ಅಧಿಕಾರಿಯಿಂದ ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ರೂ. 20 ಕೋಟಿಗೆ ಬೇಡಿಕೆ ಇಟ್ಟಿದ್ದರು. ಅವರ ವಿರುದ್ಧ ಇನ್ಸ್ ಪೆಕ್ಟರ್ ಒಬ್ಬರು ದೂರು ಸಲ್ಲಿಸಿದ್ದರು. ಆ ದಾಖಲೆಯನ್ನು ಸಹ ಕುಮಾರಸ್ವಾಮಿ ಓದಿದರು.
ಚಂದ್ರಶೇಖರ್ ತನ್ನ ಪತ್ನಿ ಹೆಸರಿನಲ್ಲಿ 38 ಮಹಡಿಯ ವಾಣಿಜ್ಯ ಕಟ್ಟಡ ಕಟ್ಟುತ್ತಿದ್ದಾರೆ. ಅದು ರಾಜಕಾಲುವೆ ಮೇಲೆ ಕಟ್ಟಡ ಕಟ್ಟುತ್ತಿದ್ದಾರೆ. ಅಲ್ಲದೇ ಕೆರೆಯನ್ನು ಕೂಡಾ ಒತ್ತುವರಿ ಮಾಡಿಕೊಂಡಿದ್ದಾರೆ. ಇದರ ಬಗ್ಗೆ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ ಕುಮಾರಸ್ವಾಮಿ, ಈ ಅಧಿಕಾರಿ ವಿರುದ್ಧ ಸುಮಾರು ಎರಡೂ ಸಾವಿರಕ್ಕೂ ಹೆಚ್ಚು ಆರೋಪ ಪಟ್ಟಿಗಳು ದಾಖಲಾಗಿವೆ ಎಂದು ಆರೋಪಿಸಿದರು.
ಈ ಮಧ್ಯೆ ಚುನಾವಣಾ ಬಾಂಡ್ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜೀನಾಮೆ ನೀಡಬೇಕು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒತ್ತಾಯ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ,
ನಿರ್ಮಲಾ ಸೀತಾರಾಮನ್ ಏಕೆ ರಾಜೀನಾಮೆ ನೀಡಬೇಕು? ನಿರ್ಮಲಾ ಸೀತಾರಾಮನ್ ರಾಜೀನಾಮೆ ನೀಡಲು ಅವರ ವೈಯಕ್ತಿಕ ಖಾತೆಗೆ ಚುನಾವಣಾ ಬಾಂಡ್ ಹಣ ಹೋಗಿದೆಯೇ? ಅವರು ನಿಮ್ಮಂತೆ (ಸಿದ್ದರಾಮಯ್ಯ) ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಲಾಭ ಮಾಡಿಕೊಂಡಿದ್ದಾರೆಯೇ? ಎಂದು ಟೀಕಾ ಪ್ರಹಾರ ನಡೆಸಿದರು.
Advertisement