ಚುನಾವಣೆಗಾಗಿ ರಾಮಮಂದಿರ ಉದ್ಘಾಟನೆ ಒಪ್ಪಲಾಗದು: ಸಚಿವ ಚಲುವರಾಯಸ್ವಾಮಿ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಓಲೈಸಲು ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಬಳಸಿಕೊಳ್ಳತ್ತಿರುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಶುಕ್ರವಾರ ಹೇಳಿದರು.
ಸಚಿವ ಚಲುವರಾಯಸ್ವಾಮಿ
ಸಚಿವ ಚಲುವರಾಯಸ್ವಾಮಿ

ಮೈಸೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಓಲೈಸಲು ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಬಳಸಿಕೊಳ್ಳತ್ತಿರುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಶುಕ್ರವಾರ ಹೇಳಿದರು.

ಆದಿಚುಂಚನಗಿರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಯಾವುದೇ ಕಲ್ಯಾಣ ಕಾರ್ಯಕ್ರಮ, ಅಭಿವೃದ್ಧಿ ಕಾರ್ಯಗಳನ್ನು ಪ್ರಸ್ತಾಪಿಸದೆ ರಾಮಮಂದಿರ ಉದ್ಘಾಟನೆಯನ್ನು ಪ್ರಸ್ತಾಪಿಸಿ ಮತದಾರರ ಓಲೈಸಲು ಮುಂದಾಗಿದ್ದಾರೆ. ಇಂತಹ ತಂತ್ರಗಳ ಮೂಲಕ ಐದು ವರ್ಷಕ್ಕೊಮ್ಮೆ ಚುನಾವಣೆ ಗೆಲ್ಲಬಹುದು ಎಂದು ತಿಳಿದಿದ್ದಾರೆಂದು ಹೇಳಿದರು.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಇಡೀ ರಾಷ್ಟ್ರದ ಜನರು ಅವರನ್ನು ಅಭಿನಂದಿಸುತ್ತಿದ್ದಾರೆ. ನಮಗೂ ಖುಷಿಯಾಗಿದೆ. ಆದರೆ, ಚುನಾವಣೆಗೆ ಇದನ್ನು ಬಳಕೆ ಮಾಡಿಕೊಳ್ಳುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಶಂಕರಾಚಾರ್ಯರ ನಾಲ್ಕು ಪೀಠಗಳ ಪೈಕಿ ಎರಡು ಪೀಠಗಳು ಶ್ರೀರಾಮ ಮಂದಿರ ಉದ್ಘಾಟನೆಗೆ ಅಸಮಾಧಾನ ವ್ಯಕ್ತಪಡಿಸಿವೆ. ಮೋದಿ ಅವರು ಪ್ರತಿ ಚುನಾವಣೆಯ ಸಂದರ್ಭದಲ್ಲಿ ಜನರ ಓಲೈಸಲು ಹೊಸ ವಿವಾದಗಳನ್ನು ಸೃಷ್ಟಿಸುತ್ತಾರೆಂದು ಕಿಡಿಕಾರಿದರು.

ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಕೆಲ ಸಚಿವರು ನಿರಾಕರಿಸಿದ್ದಾರೆಂಬ ಸುದ್ದಿಗಳ ಕುರಿತು ಪ್ರತಿಕ್ರಿಸಿ, ಯಾರೂ ಸ್ಪರ್ಧೆಯಿಂದ ಹಿಂದಕ್ಕೆ ಸರಿಯಬಾರದು ಎಂದು ಹೇಳಿದರು.

ಚುನಾವಣೆಗೆ ಸ್ಪರ್ಧಿಸುವ ಸಂಬಂಧ ಹೈಕಮಾಂಡ್ ಸೂಚನೆ ನೀಡಲಿದ್ದು, ಸೂಕ್ತ ಅಭ್ಯರ್ಥಿಯನ್ನು ಗುರುತಿಸಲು ಸಮೀಕ್ಷೆ ನಡೆಸಲಾಗುತ್ತಿದೆ. ಆಯಾ ಜಿಲ್ಲಾ ಉಸ್ತುವಾರಿ ಹಾಗೂ ಶಾಸಕರಿಗೆ ಮೊದಲ ಆದ್ಯತೆ ನೀಡಲಾಗಿದೆ. ಜನವರಿ 15 ಅಥವಾ ಅದಕ್ಕೂ ಮೊದಲು ಸಮೀಕ್ಷೆ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ, ಉಪಮುಖ್ಯಮಂತ್ರಿ ಹುದ್ದೆಗೆ ಸಚಿವರು ಬೇಡಿಕೆ ಇಟ್ಟಿರುವ ಕುರಿತು ಪ್ರತಿಕ್ರಿಯಿದ ಅವರು, ಚುನಾವಣೆ ಸಂದರ್ಭದಲ್ಲಿ ಈ ವಿಷಯದ ಬಗ್ಗೆ ಹೇಳಿಕೆಗಳ ನೀಡದಂತೆ ಹೈಕಮಾಂಡ್ ನಾಯಕರಿಗೆ ಎಚ್ಚರಿಕೆ ನೀಡಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com