
ನವದೆಹಲಿ: ವಿಧಾನ ಪರಿಷತ್ತಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ ಮಾಡುವ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಿದೆ. ಖಾಲಿ ಇರುವ ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಪಕ್ಷ ಇನ್ನೂ ಯಾವುದೇ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಶುಕ್ರವಾರ ಹೇಳಿದ್ದಾರೆ.
ಪ್ರಸ್ತುತ ಖಾಲಿ ಇರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡುವಲ್ಲಿನ ವಿಳಂಬವು ಕಾಂಗ್ರೆಸ್ ಸರ್ಕಾರದ ಕಾರ್ಯತಂತ್ರದ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
"ಪರಿಷತ್ ಅಭ್ಯರ್ಥಿಗಳ ಆಯ್ಕೆ ಕುರಿತು ಈಗಾಗಲೇ ಎರಡು ಸುತ್ತಿನ ಚರ್ಚೆಗಳು ನಡೆದಿವೆ. ಹೆಚ್ಚಿನ ಚರ್ಚೆಯ ಅಗತ್ಯವಿದೆ" ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರೂ ಆಗಿರುವ ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಸಿದ್ಧಾಂತದ ಪರವಾಗಿ ಆಕ್ರಮಣಕಾರಿಯಾಗಿ ಧ್ವನಿ ಎತ್ತುವ ಉತ್ತಮ ವಾಗ್ಮಿಗಳನ್ನು ಎಂಎಲ್‌ಸಿಗಳಾಗಿ ನಾಮನಿರ್ದೇಶನ ಮಾಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಸುಳಿವು ನೀಡಿದ್ದಾರೆ.
ಆಕಾಂಕ್ಷಿಗಳ ಪಟ್ಟಿ ಹೈಕಮಾಂಡ್ ಗೆ ತಲುಪಿದೆ. ಮೇಲ್ಮನೆಯಲ್ಲಿ ಬಿಜೆಪಿ ಉತ್ತಮ ವಾಗ್ಮಿಗಳನ್ನು ಹೊಂದಿರುವುದರಿಂದ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಎದುರಿಸಲು ಬಯಸುತ್ತದೆ ಎಂದರು.
ದೆಹಲಿಯಲ್ಲಿರುವ ರಾಷ್ಟ್ರೀಯ ನಾಯಕರು ಅಂತಿಮ ಆಯ್ಕೆ ಬಗ್ಗೆ ರಾಜ್ಯ ಘಟಕಕ್ಕೆ ತಿಳಿಸುವ ಮೊದಲು ವಿವರವಾಗಿ ಚರ್ಚಿಸುತ್ತಾರೆ ಎಂದು ಅವರು ಹೇಳಿದರು.
ಕೆಪಿಸಿಸಿ ನಾಯಕತ್ವ ಬದಲಾವಣೆಯ ಕುರಿತು ನಡೆಯುತ್ತಿರುವ ಚರ್ಚೆಯ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, "ಪಕ್ಷ ಹೇಳಿದಂತೆ ನಾನು ನಡೆಯುತ್ತೇನೆ ಎಂದು ಮಾರ್ಮಿಕವಾಗಿ ಉತ್ತರಿಸಿದರು.
ಕಳೆದ ಐದು ವರ್ಷಗಳಲ್ಲಿ ನಾನು ಬಹಳಷ್ಟು ಕೆಲಸ ಮಾಡಿದ್ದೇನೆ. ಪಕ್ಷಕ್ಕೆ ಯಾವುದು ಒಳ್ಳೆಯದೋ ಅದು ಆಗಲಿ. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದರು.
Advertisement