ಆಡಳಿತಯಂತ್ರ ಕುಸಿದಿರುವುದಕ್ಕೆ 'ಜನಾಕ್ರೋಶ'ವೇ ಸಾಕ್ಷಿ; 'ಜನತಾ ದರ್ಶನ' ಎಲ್ಲಿಯೂ ನಡೆದಿಲ್ಲ!
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತ ಯಂತ್ರ ಸಂಪೂರ್ಣ "ಕುಸಿದಿದೆ" ಮತ್ತು "ಭ್ರಷ್ಟಾಚಾರ ಮೇರೆ ಮೀರಿದೆ" ಎಂಬುದಕ್ಕೆ ರಾಜ್ಯಾದ್ಯಂತ ನಡೆಯುತ್ತಿರುವ 'ಜನಾಕ್ರೋಶ'ವೇ ಸಾಕ್ಷಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗುರುವಾರ ಹೇಳಿದ್ದಾರೆ.
ಕರ್ನಾಟಕ ಭ್ರಷ್ಟಾಚಾರದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ ಮತ್ತು 20 ತಿಂಗಳ ಬಳಿಕ ಸರ್ಕಾರ ಟೇಕಾಫ್ ಆಗುತ್ತಿದೆ ಎಂಬ ಸಚಿವ ಡಿ. ಸುಧಾಕರ್ ಹೇಳಿಕೆ ಸರ್ಕಾರದ ಕಾರ್ಯವೈಖರಿಗೆ ಕನ್ನಡಿ ಹಿಡಿದಿವೆ ಎಂದು ಟೀಕಿಸಿದ್ದಾರೆ.
"ರಾಜ್ಯದಾದ್ಯಂತ ಜನರು ಈ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪಕ್ಷದ 'ಜನಾಕ್ರೋಶ ಯಾತ್ರೆ'ಗೆ ಸಿಗುತ್ತಿರುವ ಬೆಂಬಲ ಮತ್ತು ವಿವಿಧ ಜಿಲ್ಲೆಗಳಲ್ಲಿ ಜನರು ವ್ಯಕ್ತಪಡಿಸಿದ ಭಾವನೆಗಳು ಇದಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ" ಎಂದು ಅಶೋಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಮುಸ್ಲಿಂ ಓಲೈಕೆ ಖಂಡಿಸಿ ರಾಜ್ಯ ಬಿಜೆಪಿ ಸೋಮವಾರದಿಂದ ತನ್ನ 16 ದಿನಗಳ 'ಜನಾಕ್ರೋಶ ಯಾತ್ರೆ'ಯನ್ನು ಆರಂಭಿಸಿದೆ.
"ಇದೊಂದು ವಂಚಕ ಸರ್ಕಾರ, ಕೆಟ್ಟ ಆಡಳಿತ ನೀಡುತ್ತಿದೆ. ಅದನ್ನು ಮರೆಮಾಚಲು ನಡೆಸಿದ ಕಸರತ್ತು ವಿಫಲವಾಗಿವೆ. 20 ತಿಂಗಳಲ್ಲಿ ಸಿದ್ದರಾಮಯ್ಯ ಸರ್ಕಾರದ ಬಣ್ಣ ಬಯಲಾಗಿದೆ. ಅವೈಜ್ಞಾನಿಕ ಗ್ಯಾರಂಟಿ ಯೋಜನೆ ಜಾರಿಯಿಂದ ಬೊಕ್ಕಸ ಬರಿದಾಗಿ, ಸರ್ಕಾರ ದಿವಾಳಿಯಾಗಿದೆ. ಒಂದೇ ಒಂದು ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನ ಆಗುತ್ತಿಲ್ಲ ಎಂದು ಆರೋಪಿಸಿದ್ದಾರೆ" ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಮುಖ್ಯಮಂತ್ರಿ ಮತ್ತು ಸಚಿವರು ರಾಜ್ಯ ಪ್ರವಾಸ ಮಾಡುತ್ತಿಲ್ಲ ಮತ್ತು ಅವರು ಹೋದಲ್ಲೆಲ್ಲಾ ಸಾರ್ವಜನಿಕರ ಆಕ್ರೋಶ ಎದುರಿಸುತ್ತಿದ್ದಾರೆ. ಹೀಗಾಗಿ ಅವರು ಬೆಂಗಳೂರಿನಲ್ಲಿ ಕುಳಿತು ಸಮಯ ವ್ಯರ್ಥ ಮಾಡುತ್ತಿದ್ದಾರೆ" ಎಂದು ಟೀಕಿಸಿದರು.
"ಒಂದೆಡೆ, ಬೆಲೆ ಏರಿಕೆ ಸಾರ್ವಜನಿಕರನ್ನು ತೀವ್ರವಾಗಿ ಬಾಧಿಸುತ್ತಿದೆ; ಮತ್ತೊಂದೆಡೆ, ಪ್ರತಿ ಸರ್ಕಾರಿ ಕಚೇರಿಯಲ್ಲೂ ಲಂಚದ ಹಾವಳಿಯಿಂದ ಜನ ಹೈರಾಣ ಆಗಿದ್ದಾರೆ ಎಂದು ಹರಿಹಾಯ್ದಿದ್ದಾರೆ" ಎಂದು ಆರೋಪಿಸಿದರು.
ಈ ವಾಸ್ತವ ಸಂಗತಿಯನ್ನು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರೇ ಹಾದಿ ಬೀದಿಗಳಲ್ಲಿ ಟೀಕಿಸುತ್ತಿದ್ದಾರೆ. ಹೆಚ್ಚು ದಿನ ಸುಳ್ಳು ಹೇಳಿ ಕಾಲಹರಣ ಮಾಡಲು ಆಗುವುದಿಲ್ಲ. ಹೀಗಾಗಿ ಆ ಸತ್ಯವನ್ನು ರಾಯರೆಡ್ಡಿ ಮತ್ತು ಸಚಿವ ಡಿ. ಸುಧಾಕರ್ ಬಹಿರಂಗವಾಗಿ ಹೇಳಿದ್ದಾರೆ. ಇದಕ್ಕಿಂತ ಈ ಸರ್ಕಾರಕ್ಕೆ ದೊಡ್ಡ ಸರ್ಟಿಫಿಕೇಟ್ ಬೇಕೆ ಎಂದು ಅಶೋಕ್ ವ್ಯಂಗ್ಯವಾಡಿದ್ದಾರೆ.
ಕೆಲವು ತಿಂಗಳ ಹಿಂದೆ, ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂದೆ ದಿನವಿಡೀ 'ಜನತಾ ದರ್ಶನ' ನಡೆಸಿ, ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಗಳಲ್ಲಿ ಪ್ರತಿ ತಿಂಗಳು ಇದೇ ರೀತಿಯ ಜನತಾ ದರ್ಶನ ನಡೆಸಬೇಕೆಂದು ಸೂಚಿಸಿದ್ದರು. ಆದರೆ ಸಿಎಂ ಮಾತಿಗೆ ಯಾವ ಸಚಿವರು ಕೇರ್ ಮಾಡುತ್ತಿಲ್ಲ. ಜನತಾ ದರ್ಶನ ಎಲ್ಲಿಯೂ ನಡೆದಿಲ್ಲ ಎಂದರು.
ಸಿದ್ದರಾಮಯ್ಯನವರು ಇನ್ನೆಷ್ಟು ದಿನ ಇರುತ್ತಾರೆ? ಬದಲಾಗುತ್ತಾರೆ ಎಂಬ ಉಡಾಫೆ ಸಚಿವರಲ್ಲಿದೆ. ಇದರಿಂದ ಜನರ ಅಹವಾಲು ಕೇಳುವವರು ದಿಕ್ಕಿಲ್ಲದಂತಾಗಿದೆ. ಅಧಿಕಾರಿಗಳು ಕೂಡ ಮಾತು ಕೇಳುತ್ತಿಲ್ಲ, ಕಚೇರಿಗೂ ಬರುತ್ತಿಲ್ಲ. ಹೀಗಾಗಿ ಆಡಳಿತ ಹಳಿ ತಪ್ಪಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಯಕತ್ವ ಬದಲಾವಣೆ ರಾದ್ಧಾಂತ, ಭ್ರಷ್ಟಾಚಾರ, ಲೂಟಿಯಲ್ಲೇ ಇಡೀ ಸರ್ಕಾರ ಮುಳುಗಿ ಹೋಗಿದೆ. ದರ ಏರಿಕೆ ಬರೆ ಮೂಲಕ ಜನಸಾಮಾನ್ಯರನ್ನು ರಣಹದ್ದುಗಳಂತೆ ಕುಕ್ಕಿ ತಿನ್ನುತಿದ್ದಾರೆ. ರಾಜ್ಯದಲ್ಲಿ ಅರಾಜಕತೆ ತಾಂಡವವಾಡುತ್ತಿದೆ ಎಂದು ಅಶೋಕ್ ಆರೋಪಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ