
ಬೆಂಗಳೂರು: ಕೇರಳದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರಂತಹ ಹೃದಯ ವೈಶಾಲ್ಯ ಇರುವ, ಸಂವೇದನಾಶೀಲ ಮುಖ್ಯಮಂತ್ರಿ ಕರ್ನಾಟಕದಲ್ಲೂ ಇದ್ದಿದ್ದರೆ, ಎಲ್ಲ ಕ್ಷೇತ್ರಗಳಿಗೂ ಭರಪೂರ ಅನುದಾನ ಸಿಕ್ಕುತ್ತಿತ್ತು. ನತದೃಷ್ಟ ಕನ್ನಡಿಗರು ಮಲಯಾಳಿಗಳಷ್ಟು ಅದೃಷ್ಟವಂತರಲ್ಲ ಬಿಡಿ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
ರಾಜ್ಯ ಸರ್ಕಾರದ 2024-25 ನೇ ಸಾಲಿನ ಪೂರಕ ಅಂದಾಜನ್ನು ಬುಧವಾರ ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ಈ ಕೇರಳದ ವಯನಾಡು ಜಿಲ್ಲೆಯಲ್ಲಿ ಕಳೆದ ವರ್ಷ ಸಂಭವಿಸಿದ್ದ ಭೂಕುಸಿತದ ಸಂತ್ರಸ್ತರಿಗೆ ಮನೆಗಳನ್ನು ಕಟ್ಟಿಕೊಡುವ ಸಲುವಾಗಿ ಎಎಸ್ಡಿಆರ್ಎಫ್ ಮೂಲಕ 10 ಕೋಟಿ ರೂಪಾಯಿ ಹಣಕಾಸು ನೆರವು ನೀಡುವ ಬಗ್ಗೆ ಉಲ್ಲೇಖಿಸಲಾಗಿತ್ತು.
ಈ ನಡೆಗೆ ಬಿಜೆಪಿ ಅಕ್ಷೇಪ ವ್ಯಕ್ತಪಡಿಸಿದ್ದು, ಕೇರಳದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು ಎಂದು ಟೀಕಿಸಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂಪಾಯಿ ವಿಶೇಷ ಅನುದಾನ ನೀಡಿರುವ ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು. ಕೇರಳದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರಂತಹ ಹೃದಯ ವೈಶಾಲ್ಯ ಇರುವ, ಸಂವೇದನಾಶೀಲ ಮುಖ್ಯಮಂತ್ರಿ ಕರ್ನಾಟಕದಲ್ಲೂ ಇದ್ದಿದ್ದರೆ, ಎಲ್ಲ ಕ್ಷೇತ್ರಗಳಿಗೂ ಭರಪೂರ ಅನುದಾನ ಸಿಕ್ಕುತ್ತಿತ್ತು. ನತದೃಷ್ಟ ಕನ್ನಡಿಗರು ಮಲಯಾಳಿಗಷ್ಟು ಅದೃಷ್ಟವಂತರಲ್ಲ ಬಿಡಿ ಎಂದು ತಿವಿದಿದ್ದಾರೆ.
Advertisement