BJP ಜೊತೆ ಸೇರಿ ಮನುವಾದಿ ಆಗಿಬಿಟ್ಟಿದ್ದಾರೆ: HDK ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ

ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನ ಒಳಗೊಂಡಿರುವ ಭಗವದ್ಗೀತೆಯನ್ನು ಶಾಲಾ ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರಿಗೆ ಮನವಿ ಮಾಡಿದ್ದರು.
CM Siddaramaiah
ವಿಧಾನಸೌಧ ಆವರಣದಲ್ಲಿರುವ ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಬಿಜೆಪಿ ಜೊತೆ ಕೈಜೋಡಿಸಿದ ಮೇಲೆ ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಕಿಡಿಕಾರಿದ್ದಾರೆ.

ವಿಧಾನಸೌಧದ ಮುಂಭಾಗ ನಡೆದ ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮುಖ್ಯಮಂತ್ರಿಗಳು ಮಾತನಾಡಿದರು.

ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನ ಒಳಗೊಂಡಿರುವ ಭಗವದ್ಗೀತೆಯನ್ನು ಶಾಲಾ ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರಿಗೆ ಮನವಿ ಮಾಡಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕುಮಾರಸ್ವಾಮಿ ಅವರು ಮನುವಾದಿ ಆಗಿಬಿಟ್ಟಿದ್ದಾರೆಂದು ಕಿಡಿಕಾರಿದರು.

ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿ, ಅವರಿಗೆ ಏನು ಅನಿಸಿದೆಯೋ ಅದನ್ನ ಕೇಂದ್ರಕ್ಕೆ ಬರೆದಿದ್ದಾರೆ. ಅದೆಲ್ಲ ಕೇಂದ್ರ ಸರ್ಕಾರಕ್ಕೆ ಬಿಟ್ಟ ವಿಚಾರ ಎಂದರು.

CM Siddaramaiah
ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸಿ: ಕೇಂದ್ರ ಸರ್ಕಾರಕ್ಕೆ HDK ಪತ್ರ

ಅಂಬೇಡ್ಕರ್ ಪ್ರತಿಮೆಗೆ ಸಿಎಂ ಪುಷ್ಪಾರ್ಚನೆ

ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ಸಂವಿಧಾನ ಶಿಲ್ಪಿ, ಭಾರತ ರತ್ನ ಡಾll ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಅವರು, ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರಲ್ಲದೇ, ದೇಶದಲ್ಲಿ ಸಾಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು ಎಂದು ಹೇಳಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ಎಂತಹಾ ಸಂವಿಧಾನದ ಅಗತ್ಯವಿದೆ ಎಂದು ಯೋಚಿಸಿ, ಇತರೆ ದೇಶಗಳ ಸಂವಿಧಾನವನ್ನು ಅಭ್ಯಾಸ ಮಾಡಿ, ಅತ್ಯಂತ ಶ್ರೇಷ್ಠ ಸಂವಿಧಾನವನ್ನು ಕೊಟ್ಟಿದ್ದಾರೆ. ನಮ್ಮ ಸಾಮಾಜಿಕ ವ್ಯವಸ್ಥೆಯ ಬದಲಾವಣೆಯಾಗಬೇಕು, ಎಲ್ಲರಿಗೂ ಸಮಾನ ಅವಕಾಶಗಳು ದೊರಕಬೇಕು ಹಾಗೂ ಸಾಮಾಜಿಕ ನ್ಯಾಯ ಸ್ಥಾಪನೆಯಾಗಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ಶಾಲಾ ಕಾಲೇಜು ಮಕ್ಕಳಿಗೆ ಇದರ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ನಿತ್ಯ ಬೋಧಿಸಲಾಗುತ್ತಿದೆ. ಸಂವಿಧಾನವು ಪ್ರತಿಯೊಬ್ಬರಿಗೂ ಹಕ್ಕು ಮತ್ತು ಬಾಧ್ಯತೆಗಳನ್ನು ನೀಡಿದೆ. ಸಂವಿಧಾನದ ಧ್ಯೇಯೋದ್ದೇಶಗಳು ಎಲ್ಲರಿಗೂ ಅರ್ಥವಾಗಬೇಕು ಎಂಬ ಕಾರಣದಿಂದ ಸರ್ಕಾರ ಇದನ್ನು ಜಾರಿ ಮಾಡಿದೆ ಎಂದು ತಿಳಿಸಿದರು.

ಅಂಬೇಡ್ಕರ್ ಅವರ ಪರಿನಿರ್ವಾಣ ದಿನದಂದು ನಾವು ಅವರನ್ನು ಸ್ಮರಿಸುವ ಕೆಲಸವನ್ನು ಮಾಡಿದ್ದೇವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅವರ ಕೊನೆಯ ದಿನಗಳಲ್ಲಿ ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ ಎಂದಿದ್ದರು. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಪಟ್ಟು, ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ್ದೇನೆ ಎಂದೂ ಹೇಳಿದ್ದರು. ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿ ಹೀಗೆ ಮಾಡಿದ್ದರು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com