

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಪವರ್ ಫೈಟ್ ಪಾಲಿಟಿಕ್ಸ್ ಜೋರಾಗಿದ್ದು, ಈ ನಡುವಲ್ಲೇ ‘ವೋಟ್ ಚೋರಿ’ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಸೇರಿದಂತೆ 100ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಶನಿವಾರ ತೆರಳಿಗೆ ತೆರಳಿದ್ದು, ಈ ಭೇಟಿ ವೇಳೆ ರಾಜ್ಯ ರಾಜಕೀಯ ವಿಚಾರ ಕುರಿತಂತೆಯೂ ಹೈಕಮಾಂಡ್ ಜೊತೆ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಸಚಿವ ಆರ್.ಬಿ. ತಿಮ್ಮಾಪುರ್ ಮತ್ತು ಎನ್. ಚೆಲುವರಾಯಸ್ವಾಮಿ, ಎಂಎಲ್ಸಿ ಬಿ.ಕೆ. ಹರಿಪ್ರಸಾದ್, ಮಾಜಿ ಸಚಿವ ಎಚ್.ಎಂ. ರೇವಣ್ಣ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಸೇರಿದಂತೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಎರಡೂ ಬಣಗಳ ನಾಯಕರು ಶನಿವಾರ ರಾತ್ರಿ ದೆಹಲಿ ತೆರಳಿದ್ದಾರೆ.
ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತರಾಗಿರುವ ಭಂಡಾರಿ ಅವರು, ಕರ್ನಾಟಕದ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಕುರಿತು ಹೈಕಮಾಂಡ್ ನಾಯಕರೊಂದಿಗೆ ಮಾತುಕತೆ ನಡೆಸುವ ಸುಳಿವು ನೀಡಿದರು.
ಇದೇ ವೇಳೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು, ಮತದಾರರ ಹಕ್ಕುಗಳಿಗಾಗಿ ಹೋರಾಟವನ್ನು ಪ್ರಾರಂಭಿಸಿದ್ದೇವೆ, ಚಿಲುಮೆ ಎಂಬ ಎನ್‌ಜಿಒ ಮೂಲಕ ಬಿಜೆಪಿ ಚುನಾವಣಾ ವಂಚನೆ ಮಾಡಲು ಪ್ರಯತ್ನಿಸುತ್ತಿದೆ. ಕರ್ನಾಟಕದಿಂದ ಹೋರಾಟ ಆರಂಭಗೊಂಡಿದ್ದು, ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ರ್ಯಾಲಿ ನಡೆಯಲಿದೆ ಎಂದು ಹೇಳಿದರು.
ಕರ್ನಾಟಕದಿಂದ ಪಕ್ಷದ ಸಾವಿರಾರು ಕಾರ್ಯಕರ್ತರು, 100 ಕ್ಕೂ ಹೆಚ್ಚು ಶಾಸಕರು ಮತ್ತು ಎಂಎಲ್‌ಸಿಗಳು ಈ ರ್ಯಾಲಿಯಲ್ಲಿ ಭಾಗವಹಿಸುತ್ತಿದ್ದಾರೆ. ಮತಗಳ್ಳತನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಕಾಂಗ್ರೆಸ್ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ರ್ಯಾಲಿಯನ್ನು ನಡೆಸುತ್ತಿದೆ ಎಂದು ತಿಳಿಸಿದರು.
ಇದೇ ವೇಳೆ ರಾಜ್ಯ ರಾಜಕೀಯ ವಿಚಾರ ಚರ್ಚಿಸಲು ಹೈಕಮಾಂಡ್ ನಾಯಕರ ಭೇಟಿಯಾಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ಶನಿವಾರ ತಡರಾತ್ರಿ ದೆಹಲಿಗೆ ಆಗಮಿಸಿದ್ದು, ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದ ನೋಟಿಸ್ ಕುರಿತು ನಾನು ಉತ್ತರ ನೀಡಬೇಕಾಗಿದೆ, ನಾನು ಅವರಿಗೆ ಎಲ್ಲಾ ದಾಖಲೆಗಳನ್ನು ನೀಡುತ್ತೇನೆಂದು ಹೇಳಿದರು.
ಮೂಲಗಳ ಪ್ರಕಾರ ಡಿಕೆ.ಶಿವಕುಮಾರ್ ತಮ್ಮ ಕಿರಿಯ ಸಹೋದರ ಮತ್ತು ಬೆಂಗಳೂರು ಗ್ರಾಮೀಣ ಮಾಜಿ ಸಂಸದ ಡಿಕೆ ಸುರೇಶ್ ಅವರೊಂದಿಗೆ ಶನಿವಾರ ಸಂಜೆ ದೆಹಲಿಗೆ ಭೇಟಿ ನೀಡಿದ್ದು, ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಕೆಲವು ಶಾಸಕರೊಂದಿಗಿದ್ದ ಮನಸ್ತಾಪವನ್ನು ತಿಳಿಗೊಳಿಸಿರುವುದಾಗಿ ತಿಳಿಸಿದ್ದಾರೆಂದು ತಿಳಿದುಬಂದಿದೆ.
ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ನಡುವಲ್ಲೇ ಡಿಕೆ. ಶಿವಕುಮಾರ್ ಅವರು ತಮ್ಮ ಬೆಂಬಲಿಗರು ಆಯೋಜಿಸಿದ್ದ ಭೋಜನ ಕೂಟದಲ್ಲಿ ಭಾಗವಹಿಸಿದ್ದರು, ಇದರಲ್ಲಿ ಸುಮಾರು 30 ಕಾಂಗ್ರೆಸ್ ಶಾಸಕರು ಭಾಗವಹಿಸಿದ್ದರು ಎಂದು ತಿಳಿದುಬಂದಿದೆ.
ಇದಲ್ಲದೆ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರೊಂದಿಗೆ ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ, ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಇದ್ದರು ಎಂದು ತಿಳಿದುಬಂದಿದೆ.
ಇದಕ್ಕೂ ಮೊದಲು, ಮಾಜಿ ಶಾಸಕ ಫಿರೋಜ್ ಸೇಠ್ ಆಯೋಜಿಸಿದ್ದ ಭೋಜನ ಕೂಟದಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದರು, ಈ ಸಂದರ್ಭದಲ್ಲಿ ಹಲವಾರು ಮುಸ್ಲಿಂ ಶಾಸಕರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.
Advertisement