

ಕಲಬುರಗಿ: ರಾಜ್ಯದಲ್ಲಿ ಸಿಎಂ ಕುರ್ಚಿ ಕದನ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಯಾವುದೇ ಗೊಂದಲ ಸೃಷ್ಟಿ ಮಾಡಿಲ್ಲ. ಇದು ಸ್ಥಳೀಯ ಮಟ್ಟದಲ್ಲೇ ಇದ್ದು, ಸ್ಥಳೀಯ ನಾಯಕರೇ ಇದನ್ನ ಬಗೆಹರಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಸ್ಪಷ್ಟಪಡಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, "ಹೈಕಮಾಂಡ್ ಯಾವುದೇ ಗೊಂದಲವನ್ನು ಸೃಷ್ಟಿಸಿಲ್ಲ. ಅದು ಸ್ಥಳೀಯ ಮಟ್ಟದಲ್ಲೇ ಇದೆ" ಎಂದರು.
ನಾಯಕತ್ವ ಬದಲಾವಣೆ ಗೊಂದಲದ ಬಗ್ಗೆ "ಹೈಕಮಾಂಡ್ ಮೇಲೆ ಆರೋಪ ಹೊರಿಸುವುದು ಎಷ್ಟು ಸರಿ?". ಹೈಕಮಾಂಡ್ ಅನ್ನು ದೂಷಿಸುವ ಬದಲು ಸ್ಥಳೀಯ ನಾಯಕರು ಆಂತರಿಕ ಗೊಂದಲವನ್ನು ಸರಿಪಡಿಸಿಕೊಳ್ಳಬೇಕು ಎಂದು ಖರ್ಗೆ ತಾಕೀತು ಮಾಡಿದ್ದಾರೆ.
ಕಾಂಗ್ರೆಸ್ ಯಾರೋ ಒಬ್ಬ ನಾಯಕನಿಂದ ಬೆಳೆದಿಲ್ಲ. ಹೀಗಾಗಿ ಯಾರೊಬ್ಬರೂ ನನ್ನಿಂದ ಅಧಿಕಾರಕ್ಕೆ ಬಂತು, ನಾನೇ ಪಕ್ಷ ಕಟ್ಟಿದ್ದೇನೆಂದು ಹೇಳಬಾರದು. ಕಾಂಗ್ರೆಸ್ ಪಕ್ಷ ಕಾರ್ಯಕರ್ತರಿಂದ ಕಟ್ಟಿದ ಪಕ್ಷ. ಪಕ್ಷ ಅಂದ ಮೇಲೆ ಎಲ್ಲರ ಪಾತ್ರವೂ ಇರುತ್ತೆ. ಕೆಲ ಕಾರ್ಯಕರ್ತರು ಕೂಡ ಒಬ್ಬರಿಂದಲೇ ಪಕ್ಷ ಇದೆ ಎನ್ನಬಾರದು ಎಂದು ನೇರವಾಗಿ ಯಾರ ಹೆಸರನ್ನೂ ಹೇಳದೆ ಮಾರ್ಮಿಕವಾಗಿ ನುಡಿದರು.
ಪಕ್ಷದ ಕಾರ್ಯಕರ್ತರು ತಮ್ಮ ವೈಯಕ್ತಿಕ ಕೊಡುಗೆಗಳ ಬಗ್ಗೆ ಹೆಮ್ಮೆ ಪಡುವುದನ್ನು ಮೊದಲು ನಿಲ್ಲಿಸಬೇಕು ಮತ್ತು ಕಾರ್ಯಕರ್ತರ ಸಾಮೂಹಿಕ ಪ್ರಯತ್ನವನ್ನು ಗುರುತಿಸಬೇಕು ಎಂದು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹೇಳಿದರು.
ಇನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪಕ್ಷದ ಹೈಕಮಾಂಡ್ ಭೇಟಿ ಮಾಡಲು ದೆಹಲಿಗೆ ತೆರಳುತ್ತಿರುವ ಬಗ್ಗೆ ಕೇಳಿದಾಗ, "ಈ ವಿಷಯದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ" ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.
Advertisement