

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆ ಬದಲಾವಣೆ ಸಮಸ್ಯೆ ಬಗೆಹರಿದಿಲ್ಲ. ರಾಜ್ಯ ಸರ್ಕಾರದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿದರೆ ಉಂಟಾಗುವ ಪರಿಣಾಮಗಳ ಕುರಿತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ತಂತ್ರಜ್ಞ ಸುನಿಲ್ ಕಾನುಗೋಳ್ ಸೇರಿದಂತೆ ವಿವಿಧ ಮೂಲಗಳಿಂದ ವರದಿಗಳನ್ನು ತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಉನ್ನತ ಮೂಲಗಳ ಪ್ರಕಾರ, ರಾಜ್ಯದಲ್ಲಿ ಸಿಎಂ ಬದಲಾವಣೆಯ ನಿರ್ಧಾರವನ್ನು ರಾಹುಲ್ ಗಾಂಧಿ ಸದ್ಯಕ್ಕೆ ತಡಹಿಡಿದಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಗೆ ಇದು ಸೂಕ್ತ ಸಮಯವಲ್ಲ ಎಂದು ಸೂಚಿಸುವ ವರದಿಗಳು ರಾಹುಲ್ ಗಾಂಧಿಗೆ ಹೋಗಿವೆಯಂತೆ.
ಇತ್ತೀಚೆಗೆ ದೆಹಲಿಗೆ ಹೋಗಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿಲ್ಲವಾದರೂ, ಸಿದ್ದರಾಮಯ್ಯ ಅವರ ಬೆಂಬಲಿಗರಾದ ಎಂಎಲ್‌ಸಿ ಬಿಕೆ ಹರಿಪ್ರಸಾದ್ ಮತ್ತು ಸಚಿವ ಕೆಜೆ ಜಾರ್ಜ್ ಇತ್ತೀಚೆಗೆ ರಾಹುಲ್ ಗಾಂಧಿ ಭೇಟಿ ಮಾಡಿ ಮುಖ್ಯಮಂತ್ರಿ ಬದಲಾವಣೆಯ ವಿರುದ್ಧ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಆರ್‌ಡಿಪಿಆರ್ ಮತ್ತು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದರು. ಆದರೆ ಅವರ ನಡುವೆ ಏನಾಯಿತು ಎಂಬುದು ತಿಳಿದಿಲ್ಲ.
ಬಲ್ಲ ಮೂಲಗಳ ಪ್ರಕಾರ, ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಗೆ ಇದು ಸೂಕ್ತ ಸಮಯವಲ್ಲ ಎಂದು ಸುನಿಲ್ ಕನುಗೋಳ್ ಸೇರಿದಂತೆ ವಿವಿಧ ಮೂಲಗಳಿಂದ ರಾಹುಲ್ ಗಾಂಧಿ ಅವರಿಗೆ ವರದಿ ಹೋಗಿದೆ ಎಂದು ಗೊತ್ತಾಗಿದೆ.
ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ನಾಯಕತ್ವದ ಬಗ್ಗೆ ಗೊಂದಲ ಪಕ್ಷದ ರಾಜ್ಯ ಘಟಕದಲ್ಲಿ ಮಾತ್ರ ಇದೆ, ಹೈಕಮಾಂಡ್ ನಲ್ಲಿ ಇಲ್ಲ ಎಂದು ಹೇಳಿದ್ದರು.
ಈ ಮಧ್ಯೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕೇರಳ ಮತ್ತು ಹರಿಯಾಣ ರಾಜ್ಯಗಳಲ್ಲಿ ಕಾರ್ಯನಿರತರಾಗಿದ್ದಾರೆ. ಕೇರಳದಲ್ಲಿ ಕಾಂಗ್ರೆಸ್ ಗೆದ್ದರೆ ವೇಣುಗೋಪಾಲ್ ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿದ್ದರೆ, ಸುರ್ಜೇವಾಲಾ ಹರಿಯಾಣ ಪಿಸಿಸಿ ಮುಖ್ಯಸ್ಥರಾಗುವ ಆಕಾಂಕ್ಷೆ ಹೊಂದಿದ್ದಾರೆ ಎಂದು ಪಕ್ಷದ ಆಂತರಿಕ ಮೂಲಗಳು ತಿಳಿಸಿವೆ.
ಇದರರ್ಥ ಕರ್ನಾಟಕದಲ್ಲಿ ಅಧಿಕಾರ ಹಂಚಿಕೆಯ ನಿರ್ಧಾರ ರಾಹುಲ್ ಗಾಂಧಿಯವರ ಬಳಿ ಮಾತ್ರ ಇದೆ ಎಂದು ಮೂಲಗಳು ತಿಳಿಸಿವೆ. ನಾಳೆ ದೆಹಲಿಯಲ್ಲಿ ನಡೆಯುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ಭಾಗವಹಿಸಿದ ನಂತರ ರಾಹುಲ್ ಗಾಂಧಿ ಯುರೋಪ್ ಪ್ರವಾಸ ಹೋಗಿ ಜನವರಿ 10 ರ ನಂತರ ಹಿಂತಿರುಗಲಿದ್ದಾರೆ. ಅಲ್ಲಿಯವರೆಗೆ, ಸಂಪುಟ ಪುನಾರಚನೆ ಅಥವಾ ರಾಜ್ಯದಲ್ಲಿ ಸಿಎಂ ಬದಲಾವಣೆಯ ಬಗ್ಗೆ ಯಾವುದೇ ನಿರ್ಧಾರವಿರುವುದಿಲ್ಲ.
ಎಲ್ಲಾ ಸಾಧ್ಯತೆಗಳಲ್ಲಿ, ಸಿದ್ದರಾಮಯ್ಯ ಅವರು ಡಿ ದೇವರಾಜ್ ಅರಸ್ ಅವರು ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ನಿರ್ಮಿಸಿದ್ದ ದಾಖಲೆಯನ್ನು ಮುರಿಯುವ ಸಾಧ್ಯತೆಯಿದೆ. ಜನವರಿ 6 ರಂದು ಸಿದ್ದರಾಮಯ್ಯ ಅವರು 7 ವರ್ಷ 238 ದಿನಗಳ ಆಡಳಿತ ಪೂರೈಸುವ ಮೂಲಕ ಈ ದಾಖಲೆಯನ್ನು ಮುರಿಯಲಿದ್ದಾರೆ. ಅಲ್ಲದೆ, ಸಿದ್ದರಾಮಯ್ಯ ಅವರು ದಾಖಲೆಯ 17 ನೇ ಬಜೆಟ್ ನ್ನು ಮಂಡಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಇಂದು ಸಿದ್ದರಾಮಯ್ಯ ದೆಹಲಿಗೆ
ಸಿಎಂ ಸಿದ್ದರಾಮಯ್ಯ ಅವರು ಇಂದು ಸಂಜೆ ದೆಹಲಿಗೆ ತೆರಳಲಿದ್ದು, ನಾಳೆ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯ ಹೊರತಾಗಿ ಕಾಂಗ್ರೆಸ್ ಸಂಸದೀಯ ಪಕ್ಷದ (CPP) ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಕೇಂದ್ರ ನಾಯಕರನ್ನು ಭೇಟಿಯಾಗಲಿದ್ದಾರೆ.
ಅವರು ತಮ್ಮ ಭೇಟಿಯ ಸಮಯದಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಕರ್ನಾಟಕಕ್ಕೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ. ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನಾರಚನೆ ವಿಷಯವನ್ನು ಕೈಗೆತ್ತಿಕೊಳ್ಳುವ ಸಾಧ್ಯತೆ ಕಡಿಮೆ. ರಾಹುಲ್ ಗಾಂಧಿಯವರು ತಮ್ಮ ಯುರೋಪ್ ಪ್ರವಾಸದಿಂದ ಹಿಂದಿರುಗಿದ ನಂತರ ಸಿಎಂ ದೆಹಲಿಗೆ ಭೇಟಿ ನೀಡಿ ಸಂಪುಟ ಪುನಾರಚನೆಗೆ ಅನುಮೋದನೆ ಪಡೆಯುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
Advertisement