

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ 5 ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೇ ಮಾದರಿಯಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆಯವರು ಹೇಳಿದ್ದಾರೆ.
ಮಂಗಳವಾರ ನಗರದ ಪ್ರತಾಪ್ ನಗರದ ಘಾಳೆ ಲಕ್ಜುರೀಸ್ ಕನ್ವೆನ್ಷನ್ ಹಾಲ್‌ನಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಸರ್ಕಾರ ಪಂಚ ಗ್ಯಾರಂಟಿಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ 'ಗ್ಯಾರಂಟಿ ಕಾರ್ಯಾಗಾರ-ಗ್ಯಾರಂಟಿ ಉತ್ಸವ' ಕಾರ್ಯಕ್ರಮ ಉದ್ಘಾಟಿಸಿ ಸಚಿವರು ಮಾತನಾಡಿದರು.
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಯಿಂದ ರಾಜ್ಯದ 4 ಕೋಟಿಗೂ ಹೆಚ್ಚು ಜನರು ಫಲಾನುಭವಿಗಳಾಗಿದ್ದಾರೆ. ಪ್ರತಿ ಪಕ್ಷಗಳು, ಬಂಡವಾಳಶಾಹಿಗಳು ಗ್ಯಾರಂಟಿಗಳನ್ನು ವಿರೋಧಿಸುವರು, ಟೀಕಿಸುವರು, ಅವರೇ ಇವಾಗ ದೇಶದ ಇತರೆ ರಾಜ್ಯಗಳಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡುತ್ತಿದ್ದಾರೆ, ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ತಿಳಿಸಿರುವ ಹಾಗೆ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆಂದು ಹೇಳಿದರು.
ಬೀದರ್ ಜಿಲ್ಲೆಯಲ್ಲಿ ಗೃಹ ಲಕ್ಷ್ಮೀ ಯೋಜನೆಯಡಿ 3,44,855 ಮಹಿಳೆಯರು ಫಲಾನುಭವಿಗಳು ಇದ್ದು, ಇದುವರೆಗೆ ಯಾವುದೇ ಮಧ್ಯವರ್ತಿಗಳಿಲ್ಲದೆ ತಿಂಗಳಿಗೆ 2 ಸಾವಿರ ರೂ. ಅಂತೆ 1,552 ಕೋಟಿ ರೂ. ನೇರವಾಗಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 3,48,617 ಫಲಾನುಭವಿಗಳಿದ್ದು, 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದ್ದು, 447 ಕೋಟಿ ರೂ. ಬಳಸಲಾಗಿದೆ.
ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ 13,13,355 ಜನರು ಫಲಾನುಭವಿಗಳಾಗಿದ್ದು, ಶೇ.80 ರಷ್ಟು ಜನರು ಒಳಗೊಂಡಿದ್ದಾರೆ. ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ 11 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಇದರಿಂದಾಗಿ ಸರ್ಕಾರ ಕೆಎಸ್‌ಆರ್‌ಟಿಸಿಗೆ 315 ಕೋಟಿ ರೂ. ಪಾವತಿಸಿದೆ ಎಂದು ಹೇಳಿದರು.
ಒಟ್ಟಾರೆಯಾಗಿ, ಬೀದರ್ ರೈತರಿಗೆ ಬೆಳೆ ಪರಿಹಾರವಾಗಿ ಬಿಡುಗಡೆಯಾದ ರೂ.300 ಕೋಟಿಗಳ ಜೊತೆಗೆ, ಐದು ಗ್ಯಾರಂಟಿ ಯೋಜನೆಗಳ ಅಡಿಯಲ್ಲಿ ಜಿಲ್ಲೆಗೆ ಸುಮಾರು ರೂ.2,500 ಕೋಟಿಗಳು ದೊರೆತಿವೆ. “ನಮ್ಮ ಸರ್ಕಾರ ಬಡವರ ಪರವಾಗಿದೆ ಮತ್ತು ಸಮಗ್ರ ಅಭಿವೃದ್ಧಿಗೆ ಬದ್ಧವಾಗಿದೆ. "ಈ ಕ್ರಮಗಳಿಂದಾಗಿ, ಕರ್ನಾಟಕ ಇಂದು ದೇಶದಲ್ಲೇ ಅತಿ ಹೆಚ್ಚು ತಲಾ ಆದಾಯವನ್ನು ದಾಖಲಿಸಿದೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ ಅವರು ಮಾತನಾಡಿ, ರಾಜ್ಯದಲ್ಲಿ ತಮ್ಮ ಸರ್ಕಾರ ಜನಪರ, ಬಡವರ ಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಮೊದಲಿನಿಂದಲೂ ತಮ್ಮ ಸರ್ಕಾರ ಜನರು ಬದುಕು ಕಟ್ಟಿಕೊಳ್ಳುವಂತೆ ಮಾಡಿದೆ. ಉಳುವವನೇ ಭೂಮಿಯ ಒಡೆಯ, 20 ಅಂಶಗಳ ಕಾರ್ಯಕ್ರಮ ಯಶಸ್ವಿಯಾಗಿ ಜಾರಿಯಾಗಿದ್ದು, ಶಿಕ್ಷಣ, ಆರೋಗ್ಯ, ವಿಜ್ಞಾನ ತಂತ್ರಜ್ಞಾನದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದೆ ಎಂದರು.
Advertisement