
ದಾವಣಗೆರೆ: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕಕ್ಕೇರಿದ್ದು, ಈ ನಡುವಲ್ಲೇ ನಾಯಕರ ಒಗ್ಗೂಡಿಸಲು ರಾಜ್ಯ ಪ್ರವಾಸ ಮಾಡುವುದಾಗಿ ಬಿಜೆಪಿ ನಾಯಕ ಬಿ.ಶ್ರೀರಾಮುಲು ಅವರು ಭಾನುವಾರ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಮಾತನಾಡಿದ ಶ್ರೀರಾಮುಲು ಅವರು, ರಾಜ್ಯದಲ್ಲಿ ಬಿಜೆಪಿಯ ಎಲ್ಲಾ ನಾಯಕರೂ ಒಂದೇ ವೇದಿಕೆಯಲ್ಲಿ ಬರಬೇಕು. ಹೈಕಮಾಂಡ್ ಎಲ್ಲರನ್ನೂ ಒಟ್ಟಿಗೆ ತರಬೇಕು. ಬಿಜೆಪಿಯ ಎಲ್ಲಾ ಒಡೆದ ಮನಸ್ಸುಗಳನ್ನು ಒಟ್ಟುಗೂಡಿಸುವ ಸದುದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆಂದು ಹೇಳಿದರು.
ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಹಾಗೂ ಪಕ್ಷದ ಒಡೆದ ಮನಸುಗಳನ್ನು ಒಂದುಗೂಡಿಸಲು ರಾಜ್ಯದಾದ್ಯಂತ ಯಾತ್ರೆ ಹಮ್ಮಿಕೊಳ್ಳಲಾಗುವುದು. ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಯಾತ್ರೆ ಮಾಡುವ ಉದ್ದೇಶವಿದ್ದು, ಈ ಕುರಿತು ಪಕ್ಷದ ಹಿರಿಯ ನಾಯಕರು ಮತ್ತು ಹೈಕಮಾಂಡ್ ಜೊತೆ ಚರ್ಚೆ ನಡೆಸಿದ್ದೇನೆಂದು ತಿಳಿಸಿದರು.
ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಳ್ಳುವ ವಿಚಾರದಲ್ಲಿ ಯಾವುದೇ ವೈಯಕ್ತಿಕ ಸ್ವಾರ್ಥ ಇಲ್ಲ. ಬಿಜೆಪಿ ನಾಯಕರು ಹಾಗೂ ಸಂಘ ಪರಿವಾರದ ಎಲ್ಲರೂ ಒಗ್ಗೂಡಬೇಕು ಎಂಬುದಷ್ಟೇ ನನ್ನ ಆಶಯ ಎಂದರು.
Advertisement