
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಕ್ಕಷ್ಟೇ ಅಲ್ಲ ದೇಶಕ್ಕೆ ಅನಿವಾರ್ಯವಾಗಿದ್ದಾರೆ. ನಾವೆಲ್ಲ ಶಾಸಕರು ಅವರ ಬೆಂಬಲಕ್ಕಿದ್ದೇವೆ ಎಂದು ಕಾಂಗ್ರೆಸ್ ಶಾಸಕ ಕಂಪ್ಲಿ ಗಣೇಶ್ ಅವರು ಶನಿವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಂಪ್ಲಿ ಗಣೇಶ್, ಸಿದ್ದರಾಮಯ್ಯ ಅವರು ಇರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲ. ಇದಕ್ಕೆ ಈ ಬಾರಿಯ ವಿಧಾನಸಭೆ ಚುನಾವಣೆಯೇ ಸಾಕ್ಷಿಯಾಗಿದೆ. ಅವರು ಒಂದು ರೀತಿ ರೋಲ್ ಮಾಡೆಲ್ ಇದ್ದಂತೆ ಎಂದರು.
ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಬೇಕು ಎಂಬ ವಿಚಾರವಾಗಿ ಮಾತನಾಡಿದ ಗಣೇಶ್, ಹೈಕಮಾಂಡ್ ಹೇಳಿದರೆ ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಹೇಳಿದರು.
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದ್ರೆ ಒಳ್ಳೆಯದಲ್ವೇ? ನಾನೊಬ್ಬನೇ ಅಲ್ಲ 138 ಶಾಸಕರ ಬೆಂಬಲ ಅವರಿಗಿದೆ ಎಂದು ಗಣೇಶ್ ಬ್ಯಾಟಿಂಗ್ ಮಾಡಿದರು.
ಇನ್ನು ಇದೇ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಮಾತನಾಡಿ, ಅದನ್ನು ಪಾರ್ಟಿ ಹೈಕಮಾಂಡ್ ನಿರ್ಧಾರ ಮಾಡುತ್ತೆ. ಅದರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ ಎಂದರು.
Advertisement