ಆರೋಗ್ಯ ಗಟ್ಟಿಯಾಗಿದೆ, ಇನ್ನೂ ಎಂಟತ್ತು ವರ್ಷ ರಾಜಕೀಯದಲ್ಲಿ ಇರುತ್ತೇನೆ; ನನ್ನ ನಾಯಕತ್ವದಲ್ಲೇ ಮುಂದಿನ ಚುನಾವಣೆ: ಡಿಕೆಶಿ ಹೊಸ ದಾಳ
ಬೆಂಗಳೂರು: ತಮ್ಮ ನಾಯಕತ್ವದಲ್ಲಿ ಮುಂದಿನ ಚುನಾವಣೆ ನಡೆಯಲಿದೆ ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೊಸ ದಾಳ ಉರುಳಿಸಿದ್ದಾರೆ.
ಬೆಂಗಳೂರು ಅರಮನೆ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಸಮಾವೇಶದಲ್ಲಿ ಶಿವಕುಮಾರ್ ಅವರು ಗುರುವಾರ ಮಾತನಾಡಿದರು. "ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಓಪಿಎಸ್ ಬಗ್ಗೆ ನಾವು ಭರವಸೆ ನೀಡಿದ್ದೆವು. ಅದರಂತೆ ಅದನ್ನು ಜಾರಿಗೆ ತರಲು ಬದ್ದರಾಗಿದ್ದೇವೆ. ನೀವು ಬಿಟ್ಟರೂ ಈ ವಿಚಾರವನ್ನು ನಾವು ಬಿಡುವುದಿಲ್ಲ. ಆದರೆ ಸ್ವಲ್ಪ ತಾಳ್ಮೆಯಿರಲಿ" ಎಂದು ತಿಳಿಸಿದರು.
ಓಪಿಎಸ್ ಜಾರಿ ವಿಚಾರವಾಗಿ ಡಿಸಿಎಂ ಭರವಸೆ ನೀಡಿದಾಗ ನೌಕರರು ಡಿಕೆ, ಡಿಕೆ ಎಂದು ಘೋಷಣೆ ಕೂಗಿದರು. ಆಗ ಸಭಿಕರಿಗೆ ಸುಮ್ಮನಿರಲು ಹೇಳಿದ ಡಿಸಿಎಂ ಅವರು, "ನಾನು ಮುಂದಿನ ಬಾರಿ ಚುನಾವಣೆಗೆ ನಿಂತಾಗ, ನನ್ನ ನಾಯಕತ್ವದಲ್ಲಿ ನಡೆದಾಗ ದಯವಿಟ್ಟು ಈ ಪದವನ್ನು ಉಪಯೋಗಿಸಿ. ನಾನು ವಿಧಾನಸೌಧದಲ್ಲಿ ಇರುವವನೇ. ನಾನು ಇನ್ನು ಎಂಟತ್ತು ವರ್ಷ ಬಿಟ್ಟು ಹೋಗುವುದಿಲ್ಲ. ನನ್ನ ಆರೋಗ್ಯ ಇನ್ನೂ ಗಟ್ಟಿಯಾಗಿದೆ. ನನ್ನ ಮೇಲೆ ನಂಬಿಕೆಯಿಡಿ" ಎಂದು ಮಾರ್ಮಿಕವಾಗಿ ಹೇಳಿದರು.
ಓಪಿಎಸ್ (ಓಲ್ಡ್ ಪೆನ್ಷನ್ ಸ್ಕೀಮ್) ಜಾರಿ ಸಂಬಂಧ ಅಂಜುಮ್ ಪರ್ವೇಜ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಆ ಸಮಿತಿಯ ವರದಿಯನ್ನು ಪರಿಶೀಲಿಸಿ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು.
ಸರ್ಕಾರದ ರಥ ಎಳೆಯುವವರು ಸರ್ಕಾರಿ ನೌಕರರು. ನೀವು ಇಲ್ಲದಿದ್ದರೆ ಸರ್ಕಾರದ ಚಕ್ರ ಮುಂದಕ್ಕೆ ಸಾಗುವುದಿಲ್ಲ. ನಿಮ್ಮ ಸಂಘ ರಚನಾತ್ಮಕವಾಗಿ ಕೆಲಸ ಮಾಡುತ್ತಿದೆ. ಸರ್ಕಾರಿ ಕೆಲಸ ಕೇವಲ ಹುದ್ದೆಯಲ್ಲ. ಅದೊಂದು ಜವಾಬ್ದಾರಿ. ನೀವು ಹೃದಯ ಶ್ರೀಮಂತಿಕೆಯಿಂದ ಜವಾಬ್ದಾರಿ ಸರಿಯಾಗಿ ನಿಭಾಯಿಸಬೇಕು” ಎಂದರು.
ನಾನು 1989ರಿಂದ ವಿಧಾನಸಭೆಯಲ್ಲಿ ಇದ್ದೇನೆ. ಕಾರ್ಯಾಂಗದ ಭಾಗವಾಗಿ ಸರ್ಕಾರಿ ನೌಕರರು ನೀವೀದ್ದೀರಿ. ನಿಮ್ಮ ಜವಾಬ್ದಾರಿ ನನಗೆ ಅರಿವಿದೆ. ನಾವು ದೇವಾಲಯಕ್ಕೆ ಹೋದಾಗ ದೇವರ ಬಳಿ ಏನು ಮಾತನಾಡಬೇಕು ತಿಳಿಯದೇ ಇದ್ದಾಗ ನಮ್ಮ ಮಧ್ಯೆ ಮಾತುಕತೆ ನಡೆಸಲು ಅರ್ಚಕರು ಸಹಾಯ ಮಾಡುತ್ತಾರೆ. “ಅರ್ಚಕಸ್ಯ ಪ್ರಭಾವೇನ ಶಿಲಾಭವತಿ ಶಂಕರಃ” ಅಂದರೆ ಅರ್ಚಕರ ಪ್ರಭಾವದಿಂದ ನಾವು ಶಿಲೆಯಲ್ಲೂ ಶಂಕರನನ್ನು ಕಾಣಬಹುದು ಎಂದು ಅರ್ಥ. ಪ್ರಜಾಪ್ರಭುತ್ವ, ಸಂವಿಧಾನದ ವ್ಯವಸ್ಥೆಯಲ್ಲಿ ಸರ್ಕಾರಿ ನೌಕರರು ಸರ್ಕಾರ ಹಾಗೂ ಜನರ ಮಧ್ಯೆ ಸಂಪರ್ಕ ಸೇತುವೆಯಂತೆ ಇದ್ದಾರೆ. ಜನ ದೇವಾಲಯಕ್ಕೆ ತಮ್ಮ ಕಷ್ಟ ಹೇಳಿಕೊಳ್ಳಲು ಹೋಗುವಂತೆ ಜನ ತಮ್ಮ ಸಮಸ್ಯೆಯನ್ನು ಹೊತ್ತು ನಿಮ್ಮ ಬಳಿಗೆ ಬರುತ್ತಾರೆ” ಎಂದು ತಿಳಿಸಿದರು.
“ಇದನ್ನು ನೀವು ಅರಿಯಬೇಕು. ಮಗುವಿಗೆ ತಾಯಿಯ ಮೇಲೆ ನಂಬಿಕೆ, ಮರಕ್ಕೆ ತನ್ನ ಬೇರಿನ ಮೇಲೆ ನಂಬಿಕೆ. ಪೋಷಕರಿಗೆ ತಮ್ಮ ಮಕ್ಕಳ ಮೇಲೆ ನಂಬಿಕೆ, ಭಕ್ತನಿಗೆ ಭಗವಂತನ ಮೇಲೆ ನಂಬಿಕೆ. ಈ ಸರ್ಕಾರದ ಅಭಿವೃದ್ಧಿ ವಿಚಾರದಲ್ಲಿ ನನಗೆ ಸರ್ಕಾರಿ ನೌಕರರ ಮೇಲೆ ನಂಬಿಕೆ ಇದೆ. ಮನುಷ್ಯನಿಗೆ ನಂಬಿಕೆಗಿಂತ ದೊಡ್ಡ ಗುಣವಿಲ್ಲ. ಅದೇ ರೀತಿ ನಿಮ್ಮೆಲ್ಲರ ನಂಬಿಕೆಯನ್ನು ನಿಮ್ಮ ಸಂಘದ ಅಧ್ಯಕ್ಷರಾದ ಷಡಕ್ಷರಿ ಅವರು ಉಳಿಸಿಕೊಳ್ಳುತ್ತಾರೆ ಎಂದು ಭಾವಿಸಿದ್ದೇನೆ. ನಾನು ಕೂಡ ಬಡ ನೌಕರನಂತೆ 38 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಶಾಸಕನಾಗಿ ಸರ್ಕಾರದ ವೇತನ ಪಡೆದಿದ್ದೇನೆ. ನನಗೂ ಪಿಂಚಣಿ ಬರುತ್ತದೆ” ಎಂದು ಹೇಳಿದರು.
ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರೆಲ್ಲರೂ ಒಂದೇ. ನಾವು ನಿಮ್ಮನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತೇವೆ. ನಿಮ್ಮ ಬೇಡಿಕೆಯನ್ನು ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಸೇರಿಸಿದ್ದೇವೆ. ನಾವು ರಾಜ್ಯದ ನಾಲ್ಕು ಕೋಟಿ ಜನರಿಗೆ ಸಹಾಯ ಮಾಡುವ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಆಸರೆಯಾಗಲು ಪಂಚ ಗ್ಯಾರಂಟಿ ಘೋಷಣೆ ಮಾಡಿದ್ದೇವೆ. ಸರ್ಕಾರ ಹಂತಹಂತವಾಗಿ ಸಂಪನ್ಮೂಲ ಕ್ರೂಢೀಕರಣ ಆದಂತೆ ನಾವು ನಮ್ಮ ಯೋಜನೆಗಳ ಫಲಾನುಭವಿಗಳಿಗೆ ಹಣ ನೀಡುತ್ತೇವೆ. ನಾವು ಯಾರಿಗೂ ಗೃಹಲಕ್ಷ್ಮೀ ಹಣ ತಪ್ಪಿಸುವ ಪ್ರಮೇಯವೇ ಇಲ್ಲ” ಎಂದು ಭರವಸೆ ನೀಡಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ