
ಬೆಂಗಳೂರು: ಕಾಂಗ್ರೆಸ್‌ನಲ್ಲಿನ ಆಂತರಿಕ ಭಿನ್ನಾಭಿಪ್ರಾಯಗಳಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬವಾಗಿದೆ. ರಾಜ್ಯದ ಆಡಳಿತಾರೂಢ ಪಕ್ಷದ ಸಚಿವರಲ್ಲಿ ಸಮನ್ವಯವಿಲ್ಲ ಎಂದು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಶನಿವಾರ ಹೇಳಿದರು.
ತುಮಕೂರಿನಲ್ಲಿ ಜೆಡಿಎಸ್ ನಾಯಕರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ನಾಯಕರು ತಮ್ಮ ಆಂತರಿಕ ಜಗಳಗಳಲ್ಲಿ ನಿರತರಾಗಿದ್ದಾರೆ. ಆಡಳಿತದತ್ತ ಗಮನಹರಿಸುತ್ತಿಲ್ಲ ಎಂದು ಕಿಡಿಕಾರಿದರು.
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದ್ದುಸ ತಳಮಟ್ಟದ ಎರಡೂ ಪಕ್ಷದ ಕಾರ್ಯಕರ್ತರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವ ಕುರಿತು ಎರಡೂ ಪಕ್ಷಗಳ ಹಿರಿಯ ನಾಯಕರು ನಿರ್ಧರಿಸುತ್ತಾರೆ ಎಂದು ಹೇಳಿದರು.
ಎಚ್ ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾದ ಮೇಲೆ ಕೆಲಸ ಮಾಡುತ್ತಿಲ್ಲ ಎಂಬ ಟೀಕೆಗಳಿಗೆ ಉತ್ತರಿಸಿ, ಕೇಂದ್ರ ಸಚಿವರಾಗಿ ತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ಹೊರತಾಗಿಯೂ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಪಕ್ಷದ ಕೆಲಸಕ್ಕೆ ಸಾಕಷ್ಟು ಸಮಯವನ್ನು ನೀಡುತ್ತಿದ್ದಾರೆ. ವಯಸ್ಸಿಗೆ ಮೀರಿ ಎಚ್ ಡಿ ಕುಮಾರಸ್ವಾಮಿ ಕೆಲಸ ಮಾಡುತ್ತಿದ್ದಾರೆ, ಹೀಗಾಗಿ ಜೆಡಿಎಸ್ ರಾಜ್ಯ ಅಧ್ಯಕ್ಷರ ಬದಲಾವಣೆಯ ಪ್ರಶ್ನೆ ಅಪ್ರಸ್ತುತ. ಸದ್ಯಕ್ಕೆ ಜೆಡಿಎಸ್ ಅಧ್ಯಕ್ಷರಾಗಿ ಎಚ್ ಡಿ ಕುಮಾರಸ್ವಾಮಿ ಅವರೇ ಮುಂದುವರಿಯುತ್ತಾರೆಂದು ತಿಳಿಸಿದರು.
Advertisement