
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ, ಸಿಎಂ ಬದಲಾವಣೆ, ಅಧಿಕಾರ ಹಂಚಿಕೆ ಸೇರಿದಂತೆ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಯಾವುದೇ ಬಹಿರಂಗ ಹೇಳಿಕೆ ನೀಡದಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಶಾಸಕರು ಹಾಗೂ ಸಚಿವರು ಇದೀಗ ಮೌನ ತಾಳಿದ್ದು, ಹೇಳಿಕೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಆದರೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪಟ್ಟು ಹಿಡಿದು ಕುಳಿತಿರುವ ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ನಡೆ ಮಾತ್ರ ಇನ್ನೂ ನಿಗೂಢವಾಗಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಗೆ ಆಗ್ರಹಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಖರ್ಗೆ ಸೂಚನೆ ನೀಡಿರುವುದರಿಂದ ಇನ್ನು ಮುಂದೆ ಈ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.
ಸತೀಶ್ ಜಾರಕಿಹೊಳಿ ಪರವಾಗಿರುವ ಶಾಸಕರು ಗುಂಪು, ಬೆಂಬಲಿಗರು ಇದೀಗ ದುಬೈ ಪ್ರವಾಸಕ್ಕೆ ತೆರಳಲು ಸಿದ್ಧತೆ ನಡೆಸುತ್ತಿದ್ದು, ಭೇಟಿ ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಮಾತುಕತೆ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ಏತನ್ಮಧ್ಯೆ, ಸತೀಶ್ ಜಾರಕಿಹೊಳಿ ಸಹೋದರ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಯವರು ಅಸಮಾಧಾನಿತ ಶಾಸಕರ ಪಕ್ಷಕ್ಕೆ ಬರಮಾಡಿಕೊಳ್ಳಲು ತಂತ್ರ ರೂಪಿಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.
ಈ ಹಿಂದೆ ಹೇಳಿಕೆ ನೀಡಿದ್ದ ಬಿಜೆಪಿ ಹಿರಿಯ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಅವರು. 60 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ ಎಂದು ಹೇಳಿದ್ದರು.
ಪಕ್ಷದ ಯಾವುದೇ ಶಿಸ್ತುಬದ್ಧ ಕಾರ್ಯಕರ್ತರು ಅಥವಾ ನಾಯಕರು ಖರ್ಗೆ ಅವರ ಸೂಚನೆಗಳನ್ನು ಉಲ್ಲಂಘಿಸಬಾರದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಅವರು ತಿಳಿಸಿದರು.
ಖರ್ಗೆ ಅವರಿಗೆ 50 ವರ್ಷಗಳ ರಾಜಕೀಯ ಅನುಭವ ಇದ್ದು, ಅವರಿಗೆ ಆದೇಶ ಹೊರಡಿಸುವ ಎಲ್ಲ ಹಕ್ಕು ಇದೆ ಎಂದು ಹೇಳಿದರು. ಪಕ್ಷದ ಹಿತದೃಷ್ಟಿಯಿಂದ ಶಿಸ್ತು ಮುಖ್ಯ ಎಂದು ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ ಯತ್ನಾಳ್ ಹೇಳಿಕೆಗೆ ತಿರುಗೇಟು ನೀಡಿದ ಅವರು, 60 ಅಲ್ಲ 6 ಶಾಸಕರೂ ಕೂಡ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವುದಿಲ್ಲ. ಬಿಜೆಪಿ ಮತ್ತು ಜೆಡಿಎಸ್‌ನ ಸುಮಾರು 25 ಶಾಸಕರು ಸೂಕ್ತ ಸಮಯದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 5 ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸುತ್ತಾರೆಂದು ಹೇಳಿದರು.
ಎಂಎಲ್'ಸಿ ಯತೀಂದ್ರ ಸಿದ್ದರಾಮಯ್ಯ ಅವರು, ನನ್ನ ತಂದೆ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಲಿದ್ದಾರೆಂದು ಹೇಳಿದರು.
ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾತನಾಡಿ, ಸಿದ್ದರಾಮಯ್ಯ ಅವರು ಅಧಿಕಾರವನ್ನು ಪೂರ್ಣಗೊಳಿಸಲಿದ್ದಾರೆಂದು ತಿಳಿಸಿದರು.
Advertisement