
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ತೀವ್ರಗೊಂಡಿದ್ದು, ಈ ನಡುವಲ್ಲೇ ಪ್ರತಿ ಜಿಲ್ಲೆಯಿಂದ ಮೂವರು ನಾಯಕರ ಹೆಸರುಗಳನ್ನು ಶಿಫಾರಸು ಮಾಡಲು ರಾಜ್ಯ ಬಿಜೆಪಿ ಕೋರ್ ಕಮಿಟಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಮಂಗಳವಾರ ಸಭೆ ನಡೆದಿದ್ದು, ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಿಎಂಗಳಾದ ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಬಿ ಶ್ರೀರಾಮುಲು ಮತ್ತಿತರರು ಪಾಲ್ಗೊಂಡಿದ್ದರು.
ಸಭೆಯಲ್ಲಿ ಉಪಸ್ಥಿತರಿದ್ದ ಬಿಜೆಪಿಯ ಹಿರಿಯ ಮುಖಂಡ ಸಿ.ಟಿ.ರವಿ ಮಾಧ್ಯಮದವರೊಂದಿಗೆ ಮಾತನಾಡಿ, ಮುಂದಿನ ಮೂರು ವರ್ಷಗಳಲ್ಲಿ ಜಿಲ್ಲೆಯನ್ನು ಹೆಚ್ಚಿನ ಸಾಮರ್ಥ್ಯದೊಂದಿಗೆ ಮುನ್ನಡೆಸಲು ಪ್ರತಿ ಜಿಲ್ಲೆಯಿಂದ ಮೂರು ಹೆಸರನ್ನು ಶಿಫಾರಸು ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಕೇವಲ ಸಾಮಾಜಿಕ ನ್ಯಾಯವನ್ನು ಮನಸ್ಸಿನಲ್ಲಿಟ್ಟುಕೊಳ್ಳುವುದಿಲ್ಲ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುತ್ತಿದೆ. ಪ್ರತಿ ಜಿಲ್ಲೆಯಿಂದ ಮೂರು ಹೆಸರುಗಳನ್ನು ಹೈಕಮಾಂಡ್ ಮುಂದಿಡಲಾಗುವುದು. ರಾಜ್ಯ ನಾಯಕರೊಂದಿಗೆ ಚರ್ಚಿಸಿ ಹೆಸರುಗಳನ್ನು ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು,
ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸುವುದಿಲ್ಲ ಎಂದರು.
ಪಕ್ಷದ ಬಂಡಾಯ ನಾಯಕರ ಬಗ್ಗೆ ಚರ್ಚೆ ನಡೆದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಚರ್ಚೆ ನಡೆದಿದೆ, ಆದರೆ ಎಲ್ಲವನ್ನೂ ಇಲ್ಲಿ ಹೇಳಲಾರೆ ಎಂದು ಹೇಳಿದರು.
Advertisement