
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಪಕ್ಷದೊಳಗಿನ ಆಂತರಿಕ ಚುನಾವಣೆಗಳು ಸಂಘಟಿತ ರೀತಿಯಲ್ಲಿ ನಡೆಯುತ್ತಿಲ್ಲ ಎಂದು ಆರೋಪಿಸಿದ್ದಾರೆ.
ವಿಜಯೇಂದ್ರ ಅಧಿಕಾರಕ್ಕಾಗಿ ತಮ್ಮನ್ನು ಬೆಂಬಲಿಸುವ ಅಭ್ಯರ್ಥಿಗಳ ಹೆಸರುಗಳನ್ನು ಮಾತ್ರ ಕೇಂದ್ರ ನಾಯಕತ್ವಕ್ಕೆ ಕಳುಹಿಸಿದ್ದಾರೆ ಎಂದು ಯತ್ನಾಳ್ ದೂರಿದ್ದಾರೆ.
ಇಂದು ಸದಾಶಿವನಗರದ ಕುಮಾರ ಬಂಗಾರಪ್ಪ ಅವರ ನಿವಾಸದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಯತ್ನಾಳ್, ಪಕ್ಷದ ಆಂತರಿಕ ಚುನಾವಣೆಗಳು ಸಂಘಟಿತ ರೀತಿಯಲ್ಲಿ ನಡೆಯುತ್ತಿಲ್ಲ. ಬದಲಾಗಿ, ಅವರು ಪಕ್ಷದ ರಾಜ್ಯ ಅಧ್ಯಕ್ಷರಾಗಬೇಕೆಂಬ ಏಕೈಕ ಉದ್ದೇಶದಿಂದ ಜಿಲ್ಲಾಧ್ಯಕ್ಷರ ಚುನಾವಣೆ ನಡೆಸಲಾಗಿದೆ ಎಂದರು.
ವಿಜಯೇಂದ್ರ ಜಿಲ್ಲಾ ಮಟ್ಟದಲ್ಲಿ ತಮ್ಮ ನಿಷ್ಠಾವಂತರನ್ನು ನೇಮಿಸಿದ್ದಾರೆ ಎಂಬ ಅನುಮಾನ ಈ ನಿಜವಾಗಿದೆ ಎಂದು ವಿಜಯಪುರ ಬಿಜೆಪಿ ಶಾಸಕರು ಹೇಳಿದ್ದಾರೆ.
ಜಿಲ್ಲಾಧ್ಯಕ್ಷರ ಚುನಾವಣೆಯಲ್ಲಿ ಬಹಳಷ್ಟು ಗೊಂದಲಗಳಿವೆ. ಈ ಬಗ್ಗೆ ತಟಸ್ಥರಾಗಿದ್ದ ಅನೇಕ ಹಿರಿಯರು ಈಗ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರಿಗೆ ಜಿಲ್ಲಾ ಅಧ್ಯಕ್ಷರ ಆಯ್ಕೆಯ ಬಗ್ಗೆ ಪತ್ರ ಬರೆಯುತ್ತಿದ್ದಾರೆ ಎಂದರು.
ಪಕ್ಷದ ಹಿರಿಯ ನಾಯಕರು ನಡ್ಡಾ ಅವರಿಗೆ ಪತ್ರ ಬರೆದು, ಜಿಲ್ಲಾಧ್ಯಕ್ಷರ ನೇಮಕದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪಕ್ಷದ ಸಂವಿಧಾನವನ್ನು ಉಲ್ಲಂಘಿಸಿ ಚುನಾವಣೆ ನಡೆಸಲಾಗಿದೆ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯ ಅಧ್ಯಕ್ಷರನ್ನಾಗಿ ಮರು ಆಯ್ಕೆ ಮಾಡುವ ಏಕೈಕ ಗುರಿಯೊಂದಿಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದರು.
ರಾಜ್ಯಾಧ್ಯಕ್ಷ ಚುನಾವಣೆ ಬಂದರೆ ಅಭ್ಯರ್ಥಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಇನ್ನೆರೆಡು ದಿನ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ. ಈ ನಿಟ್ಟಿನಲ್ಲಿ ದೆಹಲಿಯಲ್ಲಿ ಸಭೆ ನಡೆಸುತ್ತೇವೆ. ಜಿಲ್ಲಾಧ್ಯಕ್ಷರ ನೇಮಕಾತಿ ಪಾರದರ್ಶಕವಾಗಿಲ್ಲ. ಅಪಮಾನ, ಅವಮಾನ ಮಾಡುವ ರೀತಿಯಲ್ಲಿ ಜಿಲ್ಲಾಧ್ಯಕ್ಷರ ಆಯ್ಕೆ ನಡೆದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನನ್ನ ಹೋರಾಟಕ್ಕೆ ನಾವು ಬದ್ಧ, ಯಾವುದೇ ಬದಲಾವಣೆ ಇಲ್ಲ. ದೆಹಲಿಯಲ್ಲಿ ಸಂಸತ್ ಅಧಿವೇಶನ ನಡೆಯುತ್ತಿದೆ. ಅಲ್ಲಿ ಎಲ್ಲರ ಜೊತೆಗೆ ಚರ್ಚೆ ಮಾಡಿ ಯಾರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಚರ್ಚೆ ಮಾಡಿ ನಿರ್ಣಯ ಕೈಗೊಳ್ಳುತ್ತೇವೆ.
23 ಜಿಲ್ಲಾಧ್ಯಕ್ಷರ ನೇಮಕಾತಿಗೆ ಒಪ್ಪಿಗೆ ಇಲ್ಲ. ಯಾರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ರಾತ್ರೋ ರಾತ್ರಿ ನಮಗೆ ಬೇಕಾದವರನ್ನು ಆಯ್ಕೆ ಮಾಡಲಾಗಿದೆ. ಯಾರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ನಾಯಕತ್ವ ಎಂದರೆ ಏನು? ರಾಜ್ಯಾಧ್ಯಕ್ಷ ಬಿಜೆಪಿ ಕರ್ನಾಟಕದ ನಾಯಕ ಆಗಬೇಕು. ಆದರೆ ವಿಜಯೇಂದ್ರ ಉದ್ಧಟತನದಿಂದ ವರ್ತಿಸುತ್ತಿದ್ದಾರೆ. ಇದು ಆತಂಕಕಾರಿ. ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು, ಒಳ್ಳೆಯ ಆಡಳಿತ ನೀಡಬೇಕು ಎಂಬ ನಿಟ್ಟಿನಲ್ಲಿ ನಮ್ಮ ಹೋರಾಟ ಎಂದರು.
Advertisement