
ಬೆಂಗಳೂರು: ನಾಲ್ಕು ವಿಧಾನ ಪರಿಷತ್ ಸದಸ್ಯ ಸ್ಥಾನಗಳ ನಾಮನಿರ್ದೇಶನ ಮತ್ತು ನಿಗಮ ಮಂಡಳಿಗಳಿಗೆ ಸದಸ್ಯರು, ಅಧ್ಯಕ್ಷರ ಆಯ್ಕೆಗೆ ಕಾಂಗ್ರೆಸ್ ಹೈಕಮಾಂಡ್ ಅನುಮೋದನೆ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನವದೆಹಲಿಗೆ ತೆರಳಲಿದ್ದಾರೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗಿನ ಭೇಟಿ ಖಚಿತವಾಗಿಲ್ಲವಾದರೂ, ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಖರ್ಗೆ ಅವರು ನಾಲ್ಕು ಎಂಎಲ್‌ಸಿ ನಾಮನಿರ್ದೇಶಿತರ ಪಟ್ಟಿಯನ್ನು ಅಂತಿಮಗೊಳಸಿದ್ದು, ಒಂದೆರಡು ಬದಲಾವಣೆಗಳಿಗೆ ಸೂಚಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಈಗಾಗಲೇ ದೆಹಲಿಯಲ್ಲಿರುವ ಡಿಕೆ.ಶಿವಕುಮಾರ್ ಅವರು ಇದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಮತ್ತು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರನ್ನು ಭೇಟಿ ಮಾಡಲಿದ್ದು, ಈ ಮೂಲಕ ತಮ್ಮ ಮೂರು ದಿನಗಳ ಭೇಟಿಯನ್ನು ಆರಂಭಿಸಲಿದ್ದಾರೆ.
ಅಕ್ಟೋಬರ್‌ನಲ್ಲಿ ಮೈಸೂರು ದಸರಾ ಸಂದರ್ಭದಲ್ಲಿ ಏರ್ ಶೋ ನಡೆಸಲು ಅನುಮೋದನೆ ಪಡೆಯಲು ಸಿದ್ದರಾಮಯ್ಯ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡುವ ಸಾಧ್ಯತೆಗಳಿವೆ.
ಪಕ್ಷ ಅಧಿಕಾರಕ್ಕೆ ಬಂದ ನಂತರ, ಸಿದ್ದರಾಮಯ್ಯ ಅವರು ತಮ್ಮ ಎರಡೂವರೆ ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ ಬಳಿಕ ಡಿಕೆ.ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಬೇಕು ಎಂದು ಒಪ್ಪಂದವಾಗಿದ್ದು, ಈ ಒಪ್ಪಂದದ ವೇಳೆ ಖರ್ಗೆ ಕೂಡ ಇದ್ದರು ಎಂದು ಮೂಲಗಳು ತಿಳಿಸಿವೆ.
ಇದರಂತೆ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಭೇಟಿ ವೇಳೆ ಖರ್ಗೆಯವರು, ಸರ್ಕಾರ ಮತ್ತು ಪಕ್ಷದಲ್ಲಿನ ಬದಲಾವಣೆಯ ಬಗ್ಗೆ ಚರ್ಚಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ರಾಜಕೀಯ ಲೆಕ್ಕಾಚಾರಗಳು ಶುರುವಾಗಿವೆ.
ಏತನ್ಮಧ್ಯೆ ಮುಖ್ಯಮಂತ್ರಿ ಸ್ಥಾನ ತೊರೆಯುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರನ್ನು ಎಐಸಿಸಿ ಒಬಿಸಿ ವಿಭಾಗದ ಸಲಹಾ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಿ, ಅವರನ್ನು ಸಮಾಧಾನಪಡಿಸಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ.
ಇದು ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಎಳೆಯಲು ಕಾಂಗ್ರೆಸ್ ಹೈಕಮಾಂಡ್ ಮಾಡಿರುವ ಕುತಂತ್ರ ಎಂದು ಆರೋಪಿಸಿದೆ.
ಬಿಜೆಪಿ ಆರೋಪ ಬೆನ್ನಲ್ಲೇ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿದ್ದರಾಮಯ್ಯ ಅವರು, ನಾನು ಮಂಡಳಿಯ ಮುಖ್ಯಸ್ಥನಲ್ಲ. ಸದಸ್ಯನಷ್ಟೇ. ರಾಷ್ಟ್ರ ರಾಜಕಾರಣಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Advertisement