
ಬೆಂಗಳೂರು: ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ ಹೇಳಿದರು.
ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಗೃಹಲಕ್ಷ್ಮೀ ಯೋಜನೆಗೆ 3 ತಿಂಗಳಿಂದ ಹಣ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಸರಕಾರದ ಯಾವುದೇ ಒಂದು ಕಾರ್ಯಕ್ರಮವು ಕೇವಲ ಪ್ರಚಾರಕ್ಕಾಗಿ ನಡೆಯುವ ಕಾರ್ಯಕ್ರಮಗಳೇ ಹೊರತು ಅದನ್ನು ಕಾರ್ಯರೂಪಕ್ಕೆ ತರುವಂಹ ಯಾವುದೇ ಪ್ರಯತ್ನ ಮಾಡಿರುವುದಿಲ್ಲ. ಹೀಗಾಗಿ ಸರಕಾರ ದಿವಾಳಿಯಾಗಿದೆ ಎಂದು ಟೀಕಿಸಿದರು.
ಸರ್ಕಾರದ ವಾಸ್ತವಿಕ ಸ್ಥಿತಿಯನ್ನು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹಾಗೂ ಮಂತ್ರಿಗಳು ಒಪ್ಪಿಕೊಳ್ಳಲಿ. ಅಲ್ಲದೆ, ರಾಜ್ಯದಲ್ಲಿನ ವಾಸ್ತವಿಕ ಹಣಕಾಸಿನ ಸ್ಥಿತಿಯನ್ನು ಬಿಡುಗಡೆ ಮಾಡಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.
ಈ ನಡುವೆ ಬಿಜೆಪಿ 'ಅರ್ಧನಾರೀಶ್ವರ'ರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಬಹುದು ಎಂಬ ಕಾಂಗ್ರೆಸ್ ಎಂಎಲ್‌ಸಿ ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆಗೆ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವಾಗ್ದಾಳಿ ನಡೆಸಿದರು. ಹರಿಪ್ರಸಾದ್ ಅವರ ಹೇಳಿಕೆ ಮಹಿಳೆಯರಿಗೆ ಅವಮಾನ ಮಾಡಿದಂತಾಗಿದೆ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್‌ನಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿರುವ ಹರಿಪ್ರಸಾದ್ ಅವರನ್ನು ಈಗ ಅದೇ ಪಕ್ಷವು ಬದಿಗಿಟ್ಟಿದೆ ಎಂದು ನಾರಾಯಣಸ್ವಾಮಿ ಟೀಕಿಸಿದರು.
Advertisement