ಅನುದಾನ ವಿಚಾರದಲ್ಲಿ ಸರ್ಕಾರ-ವಿಪಕ್ಷಗಳ ನಡುವೆ ಜಟಾಪಟಿ: ಪದ್ಧತಿ ಶುರು ಮಾಡಿದ್ದೇ BJP- ಪರಮೇಶ್ವರ್ ಸಮರ್ಥನೆ

ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಮತ್ತು ಆಡಳಿತದಲ್ಲಿ ವ್ಯಾಪಕ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ಶಾಸಕರಿಂದಲೇ ಅಸಮಾಧಾನ ವ್ಯಕ್ತವಾದ ಬಳಿಕ, ತಮ್ಮ ಪಕ್ಷದ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ 50 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ.
Siddaramaiah (File photo)
ಸಿದ್ದರಾಮಯ್ಯ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಅನುದಾನ ವಿಚಾರದ ಸಂಬಂಧ ರಾಜ್ಯ ಸರ್ಕಾರ ಹಾಗೂ ವಿಪಕ್ಷಗಳ ನಡುವೆ ಜಟಾಪಟಿ ಶುರುವಾಗಿದ್ದು, ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ವಿಪಕ್ಷಗಳು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿವೆ.

ವಿರೋಧ ಪಕ್ಷದ ಶಾಸಕರು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಮತ್ತು ಆಡಳಿತದಲ್ಲಿ ವ್ಯಾಪಕ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ಶಾಸಕರಿಂದಲೇ ಅಸಮಾಧಾನ ವ್ಯಕ್ತವಾದ ಬಳಿಕ, ತಮ್ಮ ಪಕ್ಷದ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ 50 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಮಾತ್ರ ಮುಖ್ಯಮಂತ್ರಿಯಾಗಿದ್ದಾರೆಯೇ ವಿನಃ ಇಡೀ ರಾಜ್ಯಕ್ಕೆ ಅಲ್ಲ ಎಂದು ಜನರು ಹೇಳುತ್ತಿದ್ದಾರೆ. ಇದಕ್ಕೆ ನಿಮ್ಮ ಉತ್ತರವೇನು ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದ್ದಾರೆ.

ವಿಪಕ್ಷಗಳ ಕ್ಷೇತ್ರಗಳಿಗೆ ಅಭಿವೃದ್ಧಿ ಬೇಕಿಲ್ಲವೇ? ಮುಖ್ಯಮಂತ್ರಿಗಳು ರಾಜ್ಯದ ಕೆಲಸ ಮಾಡಬೇಡವೇ ಎಂಬ ಪ್ರಶ್ನೆ ಉದ್ಭವವಾಗಿದೆ. ಅವರು ಉತ್ತರಿಸಬೇಕು ಎಂದು ಒತ್ತಾಯಿಸಿದರು.

Siddaramaiah (File photo)
ಶಾಸಕರಿಗೆ ಬಂಪರ್: ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ರೂ ಅನುದಾನ; ಸಿಎಂ ಸಿದ್ದರಾಮಯ್ಯ ಘೋಷಣೆ!

ಇದೇ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಹೆಸರಿಸುವಂತೆ ಕಾಂಗ್ರೆಸ್‌ಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸಲಹೆಯನ್ನು ಸಮರ್ಥಿಸಿಕೊಂಡ ಅವರು, ಆ ಸಲಹೆಯಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಹೆಸರಿಸಲು ಕಾಂಗ್ರೆಸ್ ಬಯಸದಿದ್ದರೆ, ಸಿದ್ದರಾಮಯ್ಯ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಹೆಸರಿಸಲಿ ಎಂದು ಹೇಳಿದರು.

ಕಾಂಗ್ರೆಸ್ಸಿಗೆ ದಲಿತರು ಕೇವಲ ಮತಬ್ಯಾಂಕ್. ಅವರನ್ನು ಕಾಂಗ್ರೆಸ್ ಪಕ್ಷ ಗುಲಾಮರೆಂದು ತಿಳಿದಿದೆ. ಹಿಂದುಳಿದ ವರ್ಗಗಳ ಚಾಂಪಿಯನ್ ಸಿದ್ದರಾಮಯ್ಯನವರ ನೇತೃತ್ವದಲ್ಲೇ ಒಂದು ಸಮಿತಿ ಮಾಡಿದ್ದಾರೆ. ನಿಮ್ಮನ್ನೇ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಲಿ ಎಂದು ಒತ್ತಾಯಿಸಿದರು.

ಈ ನಡುವೆ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಸಚಿವ ಪರಮೇಶ್ವರ್ ಅವರು, ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರಪೂ ಬಿಡುಗಡೆ ಮಾಡುವುದಾಗಿ ಹೇಳಿರುವ ಸಿಎಂ, ವಿರೋಧ ಪಕ್ಷದ ಶಾಸಕರಿಗೆ ಅನುದಾನ ಬಿಡುಗಡೆ ಮಾಡಲ್ಲ ಅಂತೇನಾದರೂ ಹೇಳಿದ್ದಾರೆಯೇ? ಹಾಗೆ ನೋಡಿದರೆ ಇಂತಹ ಸಂಪ್ರದಾಯ ಶುರು ಮಾಡಿದ್ದೇ ಹಿಂದಿನ ಸರ್ಕಾರ. ಆಗ ಅವರ ಪಕ್ಷದ ಶಾಸಕರಿಗೆ ತಲಾ 50 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದರೆ, ಕಾಂಗ್ರೆಸ್ ಶಾಸಕರಿಗೆ 20-25 ಕೋಟಿ ರೂ ಬಿಡುಗಡೆ ಮಾಡಲಾಗಿತ್ತು. ಅವರು ಮಾಡಿದ್ದಾರೆಂದು ನಾವು ದ್ವೇಷದ ರಾಜಕಾರಣ ಮಾಡಲ್ಲ. ಅಭಿವೃದ್ಧಿಯ ಅಗತ್ಯವನ್ನು ಆಧರಿಸಿ ಹಣವನ್ನು ನೀಡಲಾಗುತ್ತಿದೆ. ಹೆಚ್ಚಿನ ಅಭಿವೃದ್ಧಿಯ ಅಗತ್ಯವಿರುವ ಭಾಗಗಳಿಗೆ ಹೆಚ್ಚಿನ ನಿಧಿ ಸಿಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com