
ಬೆಂಗಳೂರು: ಮೊದಲ ಬಾರಿ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ(RCB)ದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ.
ದುರಂತಕ್ಕೆ ಸಂಬಂಧಿಸಿದಂತೆ ನಿನ್ನೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾತುಗೊಳಿಸಿದ್ದ ರಾಜ್ಯ ಸರ್ಕಾರ, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದ ಕೆ ಗೋವಿಂದರಾಜ್ ಅವರಿಗೂ ಗೇಟ್‌ಪಾಸ್ ನೀಡಲಾಗಿದೆ.
ವಿಧಾನಸೌಧದ ಮುಂದೆ ತರಾತುರಿಯ ಸಂಭ್ರಮಾಚರಣೆಯ ಹಿಂದೆ ಸಿಎಂ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಪಾತ್ರವಿತ್ತು ಎನ್ನುವ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವಿಧಾನ ಪರಿಷತ್ ಸದಸ್ಯ ಮತ್ತು ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಗೋವಿಂದರಾಜು ಅವರು ತರಾತುರಿಯಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಕೆಲ ಸಚಿವರು ಗರಂ ಆಗಿದ್ದಾರೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಗೋವಿಂದರಾಜು ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
Advertisement