
ಬೆಂಗಳೂರು: ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಸೋಮವಾರ ಹೇಳಿದ್ದಾರೆ.
ಇಂದು ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಮೊಯ್ಲಿ ಅವರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಅವರು ಹೇಳಿರುವುದಕ್ಕೆ ನಾನು ಪ್ರತಿಕ್ರಿಯೆ ನೀಡುವ ಗೋಜಿಗೆ ಹೋಗಲ್ಲ ಎಂದರು.
ನಾಯಕತ್ವ ಬದಲಾವಣೆಯ ಬಗ್ಗೆ ಸಾರ್ವಜನಿಕವಾಗಿ ಮಾತನಾಡದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಸೂಚನೆಗಳನ್ನು ನಾನು ಪಾಲಿಸುತ್ತಿದ್ದೇನೆ ಎಂದರು.
ಡಿಕೆ ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಏಕೆಂದರೆ ಅದು "ಇತ್ಯರ್ಥಗೊಂಡ ವಿಷಯ" ಎಂದು ಮೊಯ್ಲಿ ಭಾನುವಾರ ಹೇಳಿದ್ದರು.
ರಾಜ್ಯದ ರಾಜಕೀಯ ವಲಯಗಳಲ್ಲಿ, ವಿಶೇಷವಾಗಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ, ಈ ವರ್ಷದ ಕೊನೆಯಲ್ಲಿ "ಸರದಿಯಂತೆ ಮುಖ್ಯಮಂತ್ರಿ" ಅಥವಾ "ಅಧಿಕಾರ ಹಂಚಿಕೆ" ಸೂತ್ರದಡಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಊಹಾಪೋಹಗಳಿವೆ.
ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಶಿವಕುಮಾರ್, ಪ್ರಬಲ ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದು, ಸಿಎಂ ಆಗುವ ತಮ್ಮ ಮಹತ್ವಾಕಾಂಕ್ಷೆಯನ್ನು ರಹಸ್ಯವಾಗಿಟ್ಟಿಲ್ಲ.
Advertisement