
ಬೆಂಗಳೂರು: ರಾಜ್ಯದ ಖಜಾನೆ ಖಾಲಿಯಾಗಿದ್ದು, ಬಹಳಷ್ಟು ಹಣ ಸೋರಿಕೆಯಾಗಿದೆ. ಇದರ ಮಧ್ಯೆ ಬಜೆಟ್ ಅಧಿವೇಶನ ನಡೆಸಿದರೆ ಏನಾದರೂ ಅರ್ಥವಿದೆಯೇ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಭಾನುವಾರ ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದ ಜನ 136 ಕ್ಷೇತ್ರಗಳಲ್ಲಿ ಗೆಲ್ಲಿಸಿದ್ದಾರೆ. ಒಳ್ಳೆಯ ಕೆಲಸಗಳನ್ನು ಮಾಡುವಂತೆ ಕೇಳುತ್ತಲೇ ಇದ್ದೇನೆ. ಕಳೆದ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ. ಕ್ರಿಯಾಯೋಜನೆ ಘೋಷಣೆ ಮಾಡಿತ್ತು. ನಂತರ ಒಂದು ಬಿಡಿಗಾಸು ಕೊಟ್ಟಿಲ್ಲ. ಅಂಕಿ ಅಂಶಗಳನ್ನು ನೋಡಿದರೆ ಎಷ್ಟರ ಮಟ್ಟಿಗೆ ಬಡವರ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟಿದೆ ಎಂದು ಗೊತ್ತಾಗುತ್ತದೆ. ಕಲ್ಯಾಣ ಕರ್ನಾಟಕಕ್ಕೆ ಎಷ್ಟು ಹಣ ನೀಡಲಾಗಿದೆ? ಸರ್ಕಾರ ಜನರ ಸಮಸ್ಯೆಗಳನ್ನು ಪರಿಹರಿಸುವತ್ತ ಗಮನ ಹರಿಸುವುದಕ್ಕಿಂತ ರಾಜಕೀಯ ಹೇಳಿಕೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಈಗಿನ ಸ್ಥಿತಿ ನೋಡಿದರೆ ರಾಜ್ಯ ಬಜೆಟ್‌ನಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಇಡಲಾಗದು. ಗ್ಯಾರಂಟಿ ಹೆಸರಿನಲ್ಲಿ ಒಂದೂವರೆ ಲಕ್ಷ ಕೋಟಿ ರೂಪಾಯಿ ಸಾಲ ಆಗದಿರಲೆಂದು ಆಶಿಸುತ್ತೇನೆಂದು ಹೇಳಿದರು.
ಏತನ್ಮಧ್ಯೆ, ಭಾನುವಾರ ಸಂಜೆ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಜೆಟ್ ಅಧಿವೇಶನದಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ತಂತ್ರಗಳ ಕುರಿತು ಚರ್ಚಿಸಲಾಯಿತು.
ಸಭೆ ಕುರಿತು ಮಾತನಾಡಿದ ಕುಮಾರಸ್ವಾಮಿಯವರು ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದಕ್ಕಿಂತ ಅವುಗಳನ್ನು ದುರ್ಬಳಕೆ ಮಾಡಿಕೊಂಡು ರಾಜಕೀಯ ಲಾಭ ಮಾಡಿಕೊಂಡಿದ್ದೇ ಹೆಚ್ಚು. 3-4 ತಿಂಗಳು ಗೃಹಲಕ್ಷ್ಮಿ ಹಣ ಬಾಕಿ ಇಟ್ಟುಕೊಂಡು ಯಾವುದಾದರೂ ಚುನಾವಣೆ ಬಂದಾಗ ಒಮ್ಮೆಲೇ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ. ಇದು ಸರಕಾರ ಜನರಿಗೆ ಮಾಡುತ್ತಿರುವ ಮೋಸ. ಈ ವಿಷಯವನ್ನು ಕಲಾಪದಲ್ಲಿ ಪರಿಣಾಮಕಾರಿಯಾಗಿ ಚರ್ಚೆ ನಡೆಸಬೇಕು ಎಂದು ಸಲಹೆ ನೀಡಿದರು.
ಗ್ಯಾರಂಟಿಗಳ ಬಗ್ಗೆ ಚರ್ಚೆ ಮಾಡಿ. ತೆರಿಗೆ ಎಷ್ಟು ವಸೂಲಿ ಮಾಡಿದ್ದೀರಿ? ಗ್ಯಾರಂಟಿಗಳಿಗೆ ಎಷ್ಟು ಹಣ ಖರ್ಚು ಮಾಡುತ್ತಿದ್ದೀರಿ? ಉಳಿದ ಹಣ ಎಲ್ಲಿ ಹೋಗುತ್ತಿದೆ? ಎಂಬ ಬಗ್ಗೆ ಪ್ರಶ್ನೆ ಮಾಡಿ. ಜನರ ತೆರಿಗೆ ಹಣ, ಯಾವುದೇ ಬಳಕೆ ಆಗುತ್ತಿದೆ ಎಂಬ ಮಾಹಿತಿ ಅವರಿಗೆ ಗೊತ್ತಾಗಬೇಕಿದೆ. ಅಬಕಾರಿ ಸುಂಕವನ್ನು 4 ಬಾರಿ ಏರಿಕೆ ಮಾಡಿದ್ದಾರೆ. ಈ ಬಗ್ಗೆ ಸರ್ಕಾರವನ್ನು ಪ್ರಶ್ನೆ ಮಾಡಬೇಕು ಎಂದು ಹೇಳಿದರು.
ಲೋಕಸಭೆ ಕ್ಷೇತ್ರಗಳ ಮರುವಿಂಗಡಣೆ ಬಗ್ಗೆ ಈಗಲೇ ಚರ್ಚೆ ಮಾಡುವ ಅಗತ್ಯ ಇಲ್ಲ. ಇನ್ನೂ ಸಮಯಾವಕಾಶ ಇದೆ. ಒಕ್ಕೂಟ ವ್ಯವಸ್ಥೆಯಲ್ಲಿ ಯಾವುದೇ ರಾಜ್ಯಕ್ಕೆ ಅನ್ಯಾಯ ಆಗಬಾರದು. ಸ್ವಾತಂತ್ರ್ಯ ಬಂದ ಬಳಿಕ ಕಾಂಗ್ರೆಸ್‌ನವರೇ ಆಡಳಿತ ಮಾಡಿಕೊಂಡು ಬಂದಿದ್ದಾರೆ. ಎಲ್ಲ ಸೀಟುಗಳೂ ಕಾಂಗ್ರೆಸ್ ಪಕ್ಷಕ್ಕೇ ಇದ್ದವು. ಈಗ ಅವರು ನಿರಂತರವಾಗಿ ಸೋಲುತ್ತಿದ್ದಾರೆ. ಹೀಗಾಗಿ ತಪ್ಪು ಹುಡುಕುತ್ತಿದ್ದಾರೆ. ಯಾವ ಆಧಾರದ ಮೇಲೆ ಕ್ಷೇತ್ರ ವಿಂಗಡಣೆ ಆಗಲಿದೆ ಎಂದು ನೋಡೋಣ ಎಂದರು.
ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿ, ಗೃಹ ಲಕ್ಷ್ಮಿ ಗ್ಯಾರಂಟಿ ಯೋಜನೆಯ ಅನುಷ್ಠಾನದಲ್ಲಿನ ಲೋಪಗಳು ಮತ್ತು ವಿಳಂಬಗಳ ವಿರುದ್ಧ ಪಕ್ಷವು ಸೋಮವಾರ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ತಿಳಿಸಿದರು.
Advertisement