
ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟದ ನಡುವೆ, ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿದರು.
ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿಕೆ ನೀಡಿದ ನಂತರ ಖರ್ಗೆಯೊಂದಿಗಿನ 20 ನಿಮಿಷಗಳ ಕಾಲ ನಡೆದ ಈ ಸಭೆ ಮಹತ್ವ ಪಡೆದುಕೊಂಡಿದೆ.
ಈ ವರ್ಷಾಂತ್ಯಕ್ಕೆ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯಾಗಲಿದೆ ಎಂಬ ಊಹಾಪೋಹಗಳ ನಡುವೆ ಡಿಸೆಂಬರ್ ವೇಳೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಮತ್ತು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸುತ್ತಾರೆ ಎಂದು ಡಿಕೆ ಶಿವಕುಮಾರ್ ಅವರ ಕಟ್ಟಾ ಬೆಂಬಲಿಗರಾಗಿರುವ ಶಾಸಕ ಬಸವರಾಜು ವಿ. ಶಿವಗಂಗಾ ಅವರು ಭಾನುವಾರ ಹೇಳಿದ್ದಾರೆ.
ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ರಾಷ್ಟ್ರೀಯ ಅಧ್ಯಕ್ಷರು, ನಾನೇ ಅವರನ್ನು ಗೌರವಿಸದಿದ್ದರೆ, ಬೇರೆ ಯಾರನ್ನು ನಾನು ಗೌರವಿಸಬೇಕು? ಬದಲಿಗೆ ನಾನು ಬಿಜೆಪಿ ಕಚೇರಿಗೆ ಹೋಗಬೇಕೇ? ನಮ್ಮ ಹೊಸ ಕಚೇರಿಯ ನಿರ್ಮಾಣವನ್ನು ನಾನು ನೋಡಿಕೊಳ್ಳುತ್ತಿದ್ದೇನೆ ಮತ್ತು ಭೂಮಿಪೂಜೆ ಸಮಾರಂಭಕ್ಕೆ ಅವರ ಲಭ್ಯತೆಯನ್ನು ಕೇಳಿದ್ದೇನೆ. ಇದಕ್ಕಿಂತ ಹೆಚ್ಚಿನದನ್ನು ಚರ್ಚಿಸಿಲ್ಲ ಎಂದರು.
ವೀರಪ್ಪ ಮೊಯ್ಲಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೊಯ್ಲಿ ಅಥವಾ ಮತ್ಯಾರೋ ಹೇಳೋದ್ರಿಂದ ಯಾರೂ ಮುಖ್ಯಮಂತ್ರಿ ಅಗಲ್ಲ, ಅದು ಹೈಕಮಾಂಡ್ ವಿವೇಚನೆಗೆ ಬಿಟ್ಟಿರುವ ವಿಷಯ. ಪಕ್ಷದ ಹೈಕಮಾಂಡ್ ತೀರ್ಮಾನ ಮುಖ್ಯವಾಗಿದ್ದು, ಅದಕ್ಕೆ ಬದ್ಧರಾಗಿರುತ್ತೇವೆ ಎಂದು ಹೇಳಿದರು.
ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸೂಚನೆ ನೀಡಿದ್ದು, ಅವರ ಸೂಚನೆಗಳನ್ನು ಪಾಲಿಸುತ್ತಿದ್ದೇನೆ ಎಂದು ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಮೊಯ್ಲಿ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಇದು ಮಾಜಿ ಕೇಂದ್ರ ಸಚಿವರ ವೈಯಕ್ತಿಕ ಅಭಿಪ್ರಾಯ ಎಂದಿದ್ದಾರೆ.
Advertisement